ರಾಯಚೂರು: ನಗರದ ಎಲ್ಬಿಎಸ್ ನಗರದಲ್ಲಿ ನರಸಿಂಹ ಎಂಬ ಯುವಕನ ಕೊಲೆ ನಡೆದಿರುವ ಘಟನೆಯನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎನ್. ವಿನಾಯಕ ರಾವ್ ತೀವ್ರವಾಗಿ ಖಂಡಿಸಿದ್ದು, ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕ್ಷುಲ್ಲಕ ಕಾರಣ ಹಾಗೂ ದುಶ್ಚಟಗಳ ಹಿನ್ನೆಲೆಯಲ್ಲಿ ಅಮಾಯಕ ಯುವಕನ ಪ್ರಾಣ ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಇಂತಹ ಘಟನೆಗಳು ಸಮಾಜದಲ್ಲಿ ಆತಂಕ ಸೃಷ್ಟಿಸುತ್ತಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರ ಬಂಧಿಸಿ, ಸಮಗ್ರ ತನಿಖೆ ನಡೆಸುವ ಮೂಲಕ ಕಾನೂನಿನಡಿ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು. ಮೃತ ಯುವಕನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವುದರ ಜೊತೆಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ರಾಯಚೂರು ನಗರದಲ್ಲಿ ಮಾದಕ ವಸ್ತುಗಳ ಬಳಕೆ, ಮದ್ಯಪಾನ ಹಾಗೂ ಇತರ ದುಶ್ಚಟಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ. ಯುವಜನತೆ ದುಶ್ಚಟಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸುವುದರೊಂದಿಗೆ ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ನಶಾಮುಕ್ತ ರಾಯಚೂರು ನಿರ್ಮಾಣಕ್ಕೆ ಮುಂದಾಗಬೇಕು. ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಸುರಕ್ಷಿತ ಹಾಗೂ ಶಾಂತಿಯುತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಎನ್. ವಿನಾಯಕ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



