ರಾಯಚೂರು: ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕೊಲೆ, ಮಾದಕ ವಸ್ತುಗಳ ಮಾರಾಟ ಹಾಗೂ ಇತರ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವಿಫಲವಾಗಿವೆ ಎಂದು ಲೋಕ ಜನಶಕ್ತಿ ಪಕ್ಷದ (ಕೀ.ಸೆ) ಜಿಲ್ಲಾಧ್ಯಕ್ಷ ಬಂಗಿ ಮುನಿರೆಡ್ಡಿ ಆರೋಪಿಸಿದ್ದಾರೆ.
ನಗರದ ಎಲ್.ಬಿ.ಎಸ್. ನಗರದಲ್ಲಿ ಹಾಡಹಗಲೇ ನರಸಿಂಹ ಎಂಬ ಯುವಕನನ್ನು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಈ ಹತ್ಯೆಯ ಹಿಂದೆ ಗಾಂಜಾ ಸೇವನೆ ಹಾಗೂ ಮಾದಕ ವಸ್ತುಗಳ ಪ್ರಭಾವವಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಪ್ರಕರಣದ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ತಪ್ಪಿತಸ್ಥರಿಗೆ ಕಾನೂನಿನಡಿ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನೊಂದೆಡೆ, ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸ್ಮಶಾನದಲ್ಲಿ ಹೂಳಲಾಗಿದ್ದ ಶವಗಳನ್ನು ಹೊರತೆಗೆದು ಖಾಸಗಿ ವೈದ್ಯಕೀಯ ಕಾಲೇಜಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಬೆಳಕಿಗೆ ಬಂದಿರುವುದು ಆಘಾತಕಾರಿಯಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಹಾಗೂ ಸಂಬಂಧಪಟ್ಟ ವೈದ್ಯಕೀಯ ಕಾಲೇಜಿನ ಸಿಬ್ಬಂದಿಯ ಪಾತ್ರದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ನಗರದಲ್ಲಿ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳ ಅಕ್ರಮ ಮಾರಾಟ ಹೆಚ್ಚಾಗುತ್ತಿದೆ. ಇದರೊಂದಿಗೆ ಮನೆಗಳು, ರಸ್ತೆಬದಿಗಳು ಹಾಗೂ ವಿವಿಧ ಪ್ರದೇಶಗಳಲ್ಲಿ ಅಕ್ರಮ ಮತ್ತು ನಕಲಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಇಂತಹ ಚಟುವಟಿಕೆಗಳು ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಿರುವ ಯುವಕರು ತಮ್ಮ ಭವಿಷ್ಯ ಹಾಳುಮಾಡಿಕೊಳ್ಳುವುದಲ್ಲದೆ, ಸಣ್ಣಪುಟ್ಟ ವಿಚಾರಗಳಿಗೂ ಜಗಳವಾಡಿ ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಆತಂಕ ಮೂಡಿಸಿದೆ. ಇಂತಹ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿ ಮಾದಕ ವಸ್ತುಗಳ ಮಾರಾಟ ಜಾಲವನ್ನು ಬೇರುಸಹಿತ ನಿರ್ಮೂಲನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಗಾಂಜಾ, ಮಾದಕ ವಸ್ತುಗಳು ಹಾಗೂ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವುದರ ಜೊತೆಗೆ ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು. ಸಾರ್ವಜನಿಕರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವ ನಿಟ್ಟಿನಲ್ಲಿ ತಕ್ಷಣ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಲೋಕ ಜನಶಕ್ತಿ ಪಕ್ಷದ (ಕೀ.ಸೆ) ಜಿಲ್ಲಾಧ್ಯಕ್ಷ ಬಂಗಿ ಮುನಿರೆಡ್ಡಿ ಆಗ್ರಹಿಸಿದ್ದಾರೆ.



