ರಾಯಚೂರು, ಅ.25: ನಗರದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಅಕ್ರಮ ಮಾರಾಟ ಹೆಚ್ಚುತ್ತಿರುವ ಆರೋಪಗಳಿದ್ದು, ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಸಾರ್ವಜನಿಕರು ನೆಮ್ಮದಿಯಿಂದ ಜೀವನ ನಡೆಸುವುದು ಹೇಗೆ ಎಂದು ಪ್ರಶ್ನಿಸಿರುವ ಬಿಜೆಪಿ ಮುಖಂಡರು, ಕಾನೂನು ಸುವ್ಯವಸ್ಥೆ ಬಲಪಡಿಸಿ ನಾಗರಿಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಅವರಿಗೆ ಮನವಿ ಸಲ್ಲಿಸಿದರು.

ನಗರದ ಎಲ್‌ಬಿಎಸ್ ಬಡಾವಣೆಯಲ್ಲಿ ಸಿಗರೇಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳದಲ್ಲಿ ವ್ಯಾಪಾರಿ ನರಸಿಂಹ ಕೊಲೆಯಾಗಿರುವ ಘಟನೆ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಪ್ರಾಣ ಹೋಗಿರುವುದು ಕಳವಳಕಾರಿ ಸಂಗತಿಯಾಗಿದ್ದು, ಇಂತಹ ಘಟನೆಗಳು ಮತ್ತೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ರಾಯಚೂರು ನಗರದ ವಿವಿಧ ಬಡಾವಣೆಗಳಲ್ಲಿ ಗಾಂಜಾ ಹಾಗೂ ಇತರ ಮಾದಕ ವಸ್ತುಗಳ ಮಾರಾಟ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಮಾದಕ ವಸ್ತುಗಳ ಅಮಲಿನಲ್ಲಿ ಕೆಲವರು ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುವುದು, ವಿನಾಕಾರಣ ಜಗಳ ತೆಗೆಯುವುದು ಹಾಗೂ ಸಣ್ಣ ವ್ಯಾಪಾರಿಗಳಿಗೆ ಕಿರುಕುಳ ನೀಡುತ್ತಿರುವ ಆರೋಪಗಳಿವೆ. ಇಂತಹ ಚಟುವಟಿಕೆಗಳನ್ನು ಆರಂಭದಲ್ಲಿಯೇ ನಿಯಂತ್ರಿಸದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಗಂಭೀರ ಘಟನೆಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

ನಗರದ ಸುಮಾರು 30ರಿಂದ 35 ಕೊಳೆಗೇರಿ ಪ್ರದೇಶಗಳಲ್ಲಿ ಅನೇಕ ಬಡ ಕುಟುಂಬಗಳು ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿವೆ. ದಿನದ ದುಡಿಮೆಯಿಂದ ಕುಟುಂಬ ನಿರ್ವಹಿಸುವ ವ್ಯಾಪಾರಿಗಳು ಭಯದ ವಾತಾವರಣದಲ್ಲಿ ಅಂಗಡಿ ನಡೆಸುವ ಪರಿಸ್ಥಿತಿ ಎದುರಾಗಬಾರದು. ವ್ಯಾಪಾರಿಗಳು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಸುರಕ್ಷಿತವಾಗಿ ಓಡಾಡುವಂತಹ ವಾತಾವರಣ ನಿರ್ಮಿಸುವುದು ಪೊಲೀಸ್ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ನಗರದಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಸ್ಥಳಗಳನ್ನು ಗುರುತಿಸಿ ನಿರಂತರ ದಾಳಿ ನಡೆಸಬೇಕು. ಕೇವಲ ಮಾದಕ ವಸ್ತುಗಳನ್ನು ಸೇವಿಸುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಸೀಮಿತವಾಗದೆ, ಅವುಗಳನ್ನು ಪೂರೈಸುವವರು, ಮಾರಾಟ ಮಾಡುವವರು ಹಾಗೂ ಇದರ ಹಿಂದಿರುವ ಜಾಲವನ್ನು ಪತ್ತೆಹಚ್ಚಬೇಕು. ಅಕ್ರಮ ಮಾದಕ ವಸ್ತುಗಳ ವ್ಯವಹಾರಕ್ಕೆ ಸಂಪೂರ್ಣ ಕಡಿವಾಣ ಹಾಕಲು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಬೇಕೆಂದು ಆಗ್ರಹಿಸಿದರು.

ಪೊಲೀಸ್ ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರು ಯಾರೇ ಆಗಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಪೊಲೀಸ್ ಗಸ್ತು ಹೆಚ್ಚಿಸುವುದರ ಜೊತೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಮನವಿ ಮಾಡಿದರು.

ಯುವಜನತೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಗಾಂಜಾ ಹಾವಳಿಯನ್ನು ನಿಯಂತ್ರಿಸುವಲ್ಲಿ ನಿರ್ಲಕ್ಷ್ಯ ವಹಿಸಿದರೆ ನಗರದ ಶಾಂತಿ ಮತ್ತು ಸಾರ್ವಜನಿಕ ಸುರಕ್ಷತೆಗೆ ಧಕ್ಕೆಯಾಗುವ ಆತಂಕವಿದೆ. ಎಲ್‌ಬಿಎಸ್ ಬಡಾವಣೆಯಲ್ಲಿ ನಡೆದ ನರಸಿಂಹ ಕೊಲೆ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ವಿನಾಯಕ ರಾವ್, ಬಿಜೆಪಿ ಮುಖಂಡರಾದ ಉಟ್ಕೂರು ರಾಘವೇಂದ್ರ, ರವೀಂದ್ರ ಜಲ್ದಾರ್, ಶಶಿರಾಜ್, ಕಡಗೋಲ ಆಂಜನೇಯ, ನಾಗರಾಜ ಪಲಗಲು ಸೇರಿದಂತೆ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.