ಸಿಂಧನೂರು: ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಾದರ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯುವ ಮುಖಂಡ ಅರುಣಕುಮಾರ ನಾಯಕ ಯಾಪಲಪರ್ವಿ ಅವರಿಗೆ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಜಿ. ಮಾರೇಶ ನಾಯಕ ಒತ್ತಾಯಿಸಿದ್ದಾರೆ.

ರೈತ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಅರುಣಕುಮಾರ ನಾಯಕ ಅವರು ಸಾಮಾಜಿಕ ಸೇವೆ, ಯುವಜನರ ಸಂಘಟನೆ ಹಾಗೂ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಸಿಂಧನೂರು ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ವಾಲ್ಮೀಕಿ ವೃತ್ತ ನಿರ್ಮಾಣ, ವಾಲ್ಮೀಕಿ ಭವನಕ್ಕೆ ನಿವೇಶನ ಹಾಗೂ ವಿದ್ಯಾರ್ಥಿನಿಲಯಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ ಶ್ರಮಿಸಿದ್ದಾರೆ ಎಂದು ತಿಳಿಸಿದ್ದಾರೆ.

ಸಮಾಜದ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸಿರುವ ಅವರು, ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವು, ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಪ್ರಯತ್ನ, ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ಹಾಗೂ ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಆಹಾರ ವಿತರಣೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದ್ದಾರೆ.

ಕ್ಷೇತ್ರದಲ್ಲಿ ಹಿರಿಯರು ಹಾಗೂ ಯುವಜನರೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ಅರುಣಕುಮಾರ ನಾಯಕ ಅವರಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಬೆಂಬಲಿಗರಿಂದ ಒತ್ತಾಯ ಕೇಳಿಬರುತ್ತಿದೆ. ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುವವರಿಗೆ ಆದ್ಯತೆ ನೀಡಬೇಕು ಎಂದು ಮಾರೇಶ ನಾಯಕ ಅಭಿಪ್ರಾಯಪಟ್ಟಿದ್ದಾರೆ.

ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಕಾಂಗ್ರೆಸ್ ಮುಖಂಡರಾದ ಪಂಪನಗೌಡ ಬಾದರ್ಲಿ, ಬಾಬುಗೌಡ ಬಾದರ್ಲಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಅರುಣಕುಮಾರ ನಾಯಕ ಅವರ ಸಮಾಜಸೇವೆ ಮತ್ತು ಸಂಘಟನಾ ಚಟುವಟಿಕೆಗಳನ್ನು ಪರಿಗಣಿಸಿ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಬಾದರ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಪಕ್ಷದ ಅಧಿಕೃತ ನಿರ್ಧಾರ ಇನ್ನೂ ಪ್ರಕಟವಾಗಿಲ್ಲ.