ರಾಯಚೂರು, ಅ.26: ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯ ಇಲಾಖೆಯ ಸೇವೆ ಮತ್ತು ಸೌಲಭ್ಯಗಳನ್ನು ಸಾರ್ವಜನಿಕರಿಗೆ ನಿಸ್ವಾರ್ಥ ಮನೋಭಾವದಿಂದ ಒದಗಿಸುವ ಮೂಲಕ ವಾಲ್ಮೀಕಿ ಜಯಂತಿಯನ್ನು ಸಾರ್ಥಕಗೊಳಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಿತಾ ಎಂ.ಎನ್. ಕರೆ ನೀಡಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಭಾರತೀಯ ಸಾಹಿತ್ಯ ಮತ್ತು ಸಂಸ್ಕೃತಿಗೆ ಮಹರ್ಷಿ ವಾಲ್ಮೀಕಿ ಅವರ ಕೊಡುಗೆ ಅಪಾರವಾಗಿದೆ. ಅವರು ರಚಿಸಿದ ರಾಮಾಯಣ ಮಹಾಕಾವ್ಯವು ಅನೇಕ ತಲೆಮಾರುಗಳಿಂದ ಮಾನವ ಸಮಾಜಕ್ಕೆ ನೈತಿಕತೆ, ಧರ್ಮ, ಸತ್ಯ ಮತ್ತು ಆದರ್ಶ ಜೀವನದ ಮಾರ್ಗದರ್ಶನ ನೀಡುತ್ತ ಬಂದಿದೆ. ವಾಲ್ಮೀಕಿ ಜಯಂತಿ ಕೇವಲ ಆಚರಣೆಗೆ ಸೀಮಿತವಾಗದೆ ಜ್ಞಾನ, ಸಮಾನತೆ, ಪರಿವರ್ತನೆ ಹಾಗೂ ಮಾನವೀಯ ಮೌಲ್ಯಗಳನ್ನು ಸಮಾಜದಲ್ಲಿ ಬೆಳೆಸುವ ಸಂಕಲ್ಪದ ದಿನವಾಗಬೇಕು ಎಂದು ಹೇಳಿದರು.
ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಆಗಮಿಸುವ ಗ್ರಾಮೀಣ ಮತ್ತು ನಗರ ಪ್ರದೇಶಗಳ ಜನರಿಗೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಸೌಜನ್ಯದಿಂದ ಸ್ಪಂದಿಸಬೇಕು. ವಿಶೇಷವಾಗಿ ತಾಯಿ ಮತ್ತು ಮಗುವಿನ ಆರೋಗ್ಯ ಸೇವೆ ಸೇರಿದಂತೆ ಇಲಾಖೆಯ ಎಲ್ಲ ಸೌಲಭ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಶ್ರಮಿಸಬೇಕು. ಆರೋಗ್ಯ ಸೇವೆಯಲ್ಲಿ ಕರ್ತವ್ಯನಿಷ್ಠೆ, ಸಮರ್ಪಣಾ ಭಾವ ಹಾಗೂ ಮಾನವೀಯ ದೃಷ್ಟಿಕೋನ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದರು.
ಆರೋಗ್ಯ ಇಲಾಖೆಯ ಪ್ರತಿಯೊಬ್ಬ ಸಿಬ್ಬಂದಿಯೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಉತ್ತಮ ಆರೋಗ್ಯ ಸೇವೆ ಒದಗಿಸಲು ಮುಂದಾಗಬೇಕು. ಮಹರ್ಷಿ ವಾಲ್ಮೀಕಿ ಅವರು ಸಾರಿದ ಮಾನವೀಯ ಮೌಲ್ಯಗಳನ್ನು ವೃತ್ತಿ ಜೀವನದಲ್ಲಿಯೂ ಅಳವಡಿಸಿಕೊಂಡಾಗ ಮಾತ್ರ ಅವರ ಜಯಂತಿ ಆಚರಣೆಗೆ ನಿಜವಾದ ಅರ್ಥ ದೊರೆಯುತ್ತದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಗಣೇಶ್ ಕೆ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಇಲಾಖೆಯ ಸಿಬ್ಬಂದಿಗಳಾದ ಎಎಸ್ಒ ಮಲ್ಲಿಕಾರ್ಜುನ, ಅಡಿವೆಪ್ಪ, ತಂಗಮ್ಮ, ಶರಣಬಸವ ಪಾಟೀಲ್, ಕನಕಾಚಲ ಪದಕಿ, ಮಹೇಶ್, ಮೃತ್ಯುಂಜಯ ಸೇರಿದಂತೆ ಇತರರು ಉಪಸ್ಥಿತರಿದ್ದರು.



