ಸಿಂಧನೂರು, ಅ. 26: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಂಡು ಕ್ರೀಡಾಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ಸಿಂಧನೂರು ರೂರಲ್ ಸ್ಕೇಟಿಂಗ್ ಅಕಾಡೆಮಿಯ ಕಾರ್ಯದರ್ಶಿ ರಾಜಶೇಖರ್ ಹೇಳಿದರು.

ರಾಯಚೂರು ಜಿಲ್ಲಾ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ಹಾಗೂ ಸಿಂಧನೂರು ರೂರಲ್ ಸ್ಕೇಟಿಂಗ್ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ನಗರದ ಎಪಿಎಂಸಿ ಆವರಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆ ಹಾಗೂ ರಾಜ್ಯಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಕ್ರೀಡೆಗಳು ಮಕ್ಕಳಲ್ಲಿ ಶಿಸ್ತು, ಆತ್ಮವಿಶ್ವಾಸ, ಏಕಾಗ್ರತೆ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ. ಪಾಲಕರು ತಮ್ಮ ಮಕ್ಕಳಿಗೆ ಪಠ್ಯ ಚಟುವಟಿಕೆಗಳ ಜೊತೆಗೆ ಕ್ರೀಡೆಗಳಲ್ಲಿಯೂ ಭಾಗವಹಿಸಲು ಉತ್ತೇಜನ ನೀಡಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ 60 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕ್ರೀಡಾ ಸಾಮರ್ಥ್ಯ ಪ್ರದರ್ಶಿಸಿದರು. ರಾಜ್ಯಮಟ್ಟದ ಸ್ಪರ್ಧೆಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಉದ್ದೇಶದಿಂದ ನಡೆದ ಈ ಸ್ಪರ್ಧೆಯಲ್ಲಿ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳಿಗೆ ಪ್ರೋತ್ಸಾಹ ನೀಡಿದರು.

ಓಪನ್ ಚಾಂಪಿಯನ್‌ಶಿಪ್‌ನ ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿದ ಕ್ರೀಡಾಪಟುಗಳು ಒಟ್ಟು 60 ಚಿನ್ನ, 30 ಬೆಳ್ಳಿ ಹಾಗೂ 35 ಕಂಚಿನ ಪದಕಗಳನ್ನು ಗಳಿಸಿದರು ಎಂದು ಆಯೋಜಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳಿಗೆ ಪದಕ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಮಾತನಾಡಿದ ಬಸವರಾಜ ನಾಡಗೌಡ, ವಿದ್ಯಾರ್ಥಿಗಳ ಜೀವನದಲ್ಲಿ ಶೈಕ್ಷಣಿಕ ಸಾಧನೆ ಎಷ್ಟು ಮುಖ್ಯವೋ ಕ್ರೀಡೆಗಳಲ್ಲಿನ ಆಸಕ್ತಿಯೂ ಅಷ್ಟೇ ಮುಖ್ಯವಾಗಿದೆ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಮಾನಸಿಕ ದೃಢತೆ ಹಾಗೂ ಏಕಾಗ್ರತೆ ಹೆಚ್ಚುತ್ತದೆ. ಇದು ಶೈಕ್ಷಣಿಕ ಪ್ರಗತಿಗೂ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಮತ್ತೋರ್ವ ಅತಿಥಿ ಸೋಮನಗೌಡ ಬಾದರ್ಲಿ ಮಾತನಾಡಿ, ಸಿಂಧನೂರು ಭಾಗದಲ್ಲಿ ಸ್ಕೇಟಿಂಗ್ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಸುಸಜ್ಜಿತ ಸ್ಕೇಟಿಂಗ್ ಕ್ರೀಡಾಂಗಣ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು. ಇಲ್ಲಿನ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಸಿಂಧನೂರಿಗೆ ಕೀರ್ತಿ ತರಬೇಕು ಎಂದು ಹಾರೈಸಿದರು.

ಸ್ಪರ್ಧೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಗಣ್ಯರು ಪದಕ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಿಂಧನೂರು ರೂರಲ್ ಸ್ಕೇಟಿಂಗ್ ಅಕಾಡೆಮಿಯ ಉಪಾಧ್ಯಕ್ಷ ಬಿ.ಜಿ. ವಟಗಲ್, ಖಜಾಂಚಿ ಗೀತಾ ಮೇಟಿ, ಕಾರ್ಯದರ್ಶಿ ರಾಜಶೇಖರ್, ಪಾಲಕರಾದ ಶಂಕರದೇವರು ಹಿರೇಮಠ, ಬಸವರಾಜ, ಸಂತೋಷ, ಶಮಶೋದ್ದೀನ್, ಹಿತೇಶ, ರಂಜಿತ್, ತಿಮ್ಮಣ್ಣ, ನಾಗರಾಜ, ರಾಜಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕುಮಾರಿ ಸಿಂಚನಾ ಪ್ರಾರ್ಥಿಸಿದರು. ರಾಜಪ್ಪ ಸ್ವಾಗತಿಸಿದರು. ಶಂಕರದೇವರು ಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಚಂದ್ರು ವಂದಿಸಿದರು.