ಮಾನ್ವಿ, ಅ. 26: ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಮಾನವ ಸಮಾಜಕ್ಕೆ ಸತ್ಯ, ಧರ್ಮ, ನ್ಯಾಯ ಹಾಗೂ ಆದರ್ಶ ಜೀವನದ ಮೌಲ್ಯಗಳನ್ನು ಪರಿಚಯಿಸಿದ್ದು, ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣವು ಭಾರತೀಯ ಸಾಹಿತ್ಯ ಪರಂಪರೆಯ ಶ್ರೇಷ್ಠ ಮಹಾಕಾವ್ಯಗಳಲ್ಲಿ ಒಂದಾಗಿದೆ. ಶ್ರೀರಾಮನ ಆದರ್ಶ ವ್ಯಕ್ತಿತ್ವ, ಕರ್ತವ್ಯನಿಷ್ಠೆ, ತ್ಯಾಗ, ಸಹನೆ ಹಾಗೂ ಧರ್ಮಪಾಲನೆಯಂತಹ ಮೌಲ್ಯಗಳನ್ನು ಈ ಕೃತಿಯ ಮೂಲಕ ಜಗತ್ತಿಗೆ ಪರಿಚಯಿಸಿದ್ದಾರೆ. ಮನುಷ್ಯ ಸಮಾಜದಲ್ಲಿ ಹೇಗೆ ಆದರ್ಶಪ್ರಾಯವಾಗಿ ಬದುಕಬೇಕು ಎಂಬುದರ ಜೊತೆಗೆ ನ್ಯಾಯ, ಸಮಾನತೆ ಮತ್ತು ಜನಕಲ್ಯಾಣದ ರಾಮರಾಜ್ಯದ ಪರಿಕಲ್ಪನೆಯನ್ನೂ ರಾಮಾಯಣ ತಿಳಿಸಿಕೊಡುತ್ತದೆ ಎಂದು ವಿವರಿಸಿದರು.
ಮಹರ್ಷಿ ವಾಲ್ಮೀಕಿಯವರ ಸಾಹಿತ್ಯ ಮತ್ತು ಜೀವನ ಸಂದೇಶಗಳು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ತಾಲೂಕು ಮಟ್ಟದ ‘ವಾಲ್ಮೀಕಿ ಶ್ರೀ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಖಾಲಿದ್ ಅಹಮ್ಮದ್, ಪೊಲೀಸ್ ಇನ್ಸ್ಪೆಕ್ಟರ್ ಸೋಮಶೇಖರ್ ಎಸ್. ಕೆಂಚರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಡಿ., ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಭಾಗಯ್ಯ ನಾಯಕ, ತಾಲೂಕು ಆರೋಗ್ಯಾಧಿಕಾರಿ ಡಾ. ಶರಣಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.



