ಮಾನ್ವಿ: ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶಾಸಕ ಹಂಪಯ್ಯ ನಾಯಕ ಅವರು ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹಂಪಯ್ಯ ನಾಯಕ, ಆದಿಕವಿ ಮಹರ್ಷಿ ವಾಲ್ಮೀಕಿ ಅವರು ತಮ್ಮ ಜೀವನದ ಆರಂಭದಲ್ಲಿ ಬೇಡರಾಗಿದ್ದು, ಕಠಿಣ ತಪಸ್ಸು, ದೃಢಸಂಕಲ್ಪ ಹಾಗೂ ಛಲದ ಮೂಲಕ ಮಹರ್ಷಿಯಾಗಿ ರೂಪುಗೊಂಡರು. ರಾಮಾಯಣದಂತಹ ಮಹಾಕಾವ್ಯವನ್ನು ರಚಿಸಿ ಸತ್ಯ, ಧರ್ಮ, ನ್ಯಾಯ ಹಾಗೂ ಆದರ್ಶ ಜೀವನದ ಮೌಲ್ಯಗಳನ್ನು ಜಗತ್ತಿಗೆ ಪರಿಚಯಿಸಿದರು ಎಂದು ಹೇಳಿದರು.

ಮಹರ್ಷಿ ವಾಲ್ಮೀಕಿ ಅವರು ತಮ್ಮ ಸಾಹಿತ್ಯ ಮತ್ತು ಜೀವನದ ಮೂಲಕ ಸಮಾಜದಲ್ಲಿನ ಅಜ್ಞಾನದ ಕತ್ತಲನ್ನು ದೂರ ಮಾಡಿ ಜ್ಞಾನದ ಬೆಳಕನ್ನು ಹರಿಸಿದ್ದಾರೆ. ಅವರ ತತ್ವಾದರ್ಶಗಳು ಇಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಯಂತಿ ಅಂಗವಾಗಿ ವಾಲ್ಮೀಕಿ ಸಮಾಜದ ಯುವಕರು ಪಟ್ಟಣದಲ್ಲಿ ಬೈಕ್ ರ‍್ಯಾಲಿ ನಡೆಸಿ ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಗಂಗಾಧರ ನಾಯಕ, ರಾಜಾ ವೆಂಕಟಪ್ಪ ನಾಯಕ, ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಕೆ. ಅಮರೇಶಪ್ಪ ವಕೀಲರು, ರಾಜಾ ಸುಭಾಷ್ ಚಂದ್ರ ನಾಯಕ, ಲಕ್ಷ್ಮಿದೇವಿ ನಾಯಕ, ಎಚ್. ಮೌನೇಶ್ ಗೌಡ, ಜಿ. ನಾಗರಾಜ್, ಹನುಮೇಶ್ ನಾಯಕ ಸದಾಪುರ, ಸತ್ತಾರ್ ಬಂಗ್ಲೆವಾಲೆ, ಹನುಮಂತರಾಯ ನಾಯಕ, ರಾಮಣ್ಣ ನಾಯಕ ಸೇರಿದಂತೆ ವಾಲ್ಮೀಕಿ ಸಮಾಜದ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.