ರಾಯಚೂರು, ಅ. 26: ಯುವಜನತೆ ದುಶ್ಚಟಗಳಿಂದ ದೂರವಿದ್ದು, ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಹಾಗೂ ಆದರ್ಶಗಳಿಂದ ಸ್ಫೂರ್ತಿ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಕರೆ ನೀಡಿದರು.
ಸೋಮವಾರ ನಗರದ ಆಶಾಪುರ ರಸ್ತೆಯ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಅವರು ಹಲವು ವರ್ಷಗಳ ಕಾಲ ಕಠಿಣ ತಪಸ್ಸಿನಲ್ಲಿ ನಿರತರಾಗಿದ್ದಾಗ ನಾರದ ಮುನಿಗಳು ದರ್ಶನ ನೀಡಿದರು. ಬಳಿಕ 'ಮರಾ' ಎಂಬ ಮಂತ್ರವನ್ನು ಜಪಿಸುತ್ತಾ 'ರಾಮ' ನಾಮವನ್ನು ಸಿದ್ಧಿಸಿಕೊಂಡು ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಏಳು ಕಾಂಡಗಳಲ್ಲಿ 24 ಸಾವಿರ ಶ್ಲೋಕಗಳನ್ನು ಒಳಗೊಂಡಿರುವ ರಾಮಾಯಣವು ಭಾರತದ ಅತ್ಯಂತ ಪವಿತ್ರ ಗ್ರಂಥಗಳಲ್ಲಿ ಒಂದಾಗಿದೆ ಎಂದು ತಿಳಿಸಿದರು.
ಇಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಆಚರಿಸುತ್ತಿರುವುದು ನಮ್ಮೆಲ್ಲರ ಭಾಗ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಯುವಜನರಲ್ಲಿ ಮದ್ಯಪಾನ ಹಾಗೂ ಮಾದಕ ವಸ್ತುಗಳ ಸೇವನೆ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ದುಶ್ಚಟಗಳಿಂದ ದೈಹಿಕ ಹಲ್ಲೆ, ಗುಂಪು ಘರ್ಷಣೆ ಸೇರಿದಂತೆ ವಿವಿಧ ಅಹಿತಕರ ಘಟನೆಗಳು ನಡೆಯುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಯುವಕರು ಮದ್ಯಪಾನ ಮತ್ತು ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು, ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಮಹರ್ಷಿ ವಾಲ್ಮೀಕಿ ಅವರು ಧನುರ್ವಿದ್ಯೆಯಲ್ಲಿ ಆಸಕ್ತಿ ಹೊಂದಿದ್ದಂತೆ ಯುವಕರು ಯಾವುದಾದರೂ ಒಂದು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಉತ್ತಮ ಶಿಕ್ಷಣ ಪಡೆದು ಆರ್ಥಿಕ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.
ರಾಯಚೂರು ಜಿಲ್ಲೆಯಲ್ಲಿ ಹೆಲ್ಮೆಟ್ ಧರಿಸುವವರ ಸಂಖ್ಯೆ ಕಡಿಮೆಯಿದ್ದು, ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುವುದರಿಂದ ಸಂಭವಿಸುವ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಡಾ. ಬಸವರಾಜ ಅವರು, ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಅವರ ಹೆಸರಿಡಲಾಗಿದ್ದು, ವಿಶ್ವವಿದ್ಯಾಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠವನ್ನು ಸ್ಥಾಪಿಸುವ ಅಗತ್ಯವಿದೆ. ಇದರಿಂದ ಮಹರ್ಷಿ ವಾಲ್ಮೀಕಿ ಅವರ ಜೀವನ, ಸಾಹಿತ್ಯ, ಚಿಂತನೆ ಹಾಗೂ ಸಮುದಾಯದ ಇತಿಹಾಸದ ಕುರಿತು ಸಂಶೋಧನೆ ಮತ್ತು ಅಧ್ಯಯನ ನಡೆಸಲು ಹೆಚ್ಚಿನ ಅವಕಾಶ ದೊರೆಯಲಿದೆ ಎಂದು ಅಭಿಪ್ರಾಯಪಟ್ಟರು.
ಮಹರ್ಷಿ ವಾಲ್ಮೀಕಿ ಅವರು ಮಾನವೀಯತೆ, ಕರುಣೆ ಹಾಗೂ ಮನುಷ್ಯತ್ವದ ಮಹತ್ವವನ್ನು ಪ್ರತಿಪಾದಿಸಿದ್ದಾರೆ. ಅವರ ವಿಚಾರಧಾರೆಗಳು ಸಮಾಜಕ್ಕೆ ಸದಾ ಮಾರ್ಗದರ್ಶಕವಾಗಿವೆ ಎಂದು ಹೇಳಿದರು.
ವಾಲ್ಮೀಕಿ ಸಮುದಾಯದ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಶೈಕ್ಷಣಿಕ ಪ್ರೋತ್ಸಾಹಧನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸರಳ ವಿವಾಹಗಳಿಗೆ ಪ್ರೋತ್ಸಾಹಧನ, ಸ್ವಯಂ ಉದ್ಯೋಗ ಆರಂಭಿಸಲು ಸಾಲ ಸೌಲಭ್ಯಗಳು ಲಭ್ಯವಿವೆ. ಅರಣ್ಯ ಹಕ್ಕುಗಳ ಕಾಯ್ದೆಯಡಿ ಅರ್ಹ ಭೂಹೀನರಿಗೆ ಭೂಮಿಯ ಹಕ್ಕು ಪಡೆಯಲು ಅವಕಾಶಗಳಿವೆ. ಸಮುದಾಯದವರು ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಮಾಜದ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗದಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು.
ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮೀಪವಿರುವ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಹಾಗೂ ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯು ಬಸವೇಶ್ವರ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ರೈಲ್ವೆ ನಿಲ್ದಾಣ ಹಾಗೂ ಆಶಾಪುರ ರಸ್ತೆ ಮಾರ್ಗವಾಗಿ ವಾಲ್ಮೀಕಿ ಭವನ ತಲುಪಿತು. ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿವಿಧ ಕಲಾ ತಂಡಗಳು ಭಾಗವಹಿಸಿ ಸಾಂಸ್ಕೃತಿಕ ಪ್ರದರ್ಶನ ನೀಡಿದವು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ, ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತ ಮುರಳೀಧರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಶಾವಂತಗೇರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸುನೀತಾ, ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ.ವೈ. ವಾಲ್ಮೀಕಿ, ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ, ಸಮಾಜದ ಮುಖಂಡ ರಘವೀರ್ ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.



