ಕವಿತಾಳ: ಸಮೀಪದ ಅಮೀನಗಡ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗ್ರಾಮಸ್ಥರು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಜಯಂತಿ ಅಂಗವಾಗಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರ ಹಾಗೂ ನಾಮಫಲಕಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಮಾಲೆ ಅರ್ಪಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಗ್ರಾಮದ ಮುಖಂಡರು ಹಾಗೂ ಯುವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಸಾಧನೆಗಳನ್ನು ಸ್ಮರಿಸಿದರು.
ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ಸತ್ಯ, ಧರ್ಮ, ನ್ಯಾಯ ಹಾಗೂ ಮಾನವೀಯ ಮೌಲ್ಯಗಳ ಸಂದೇಶ ನೀಡಿದ್ದಾರೆ. ಅವರ ತತ್ವಾದರ್ಶಗಳು ಪ್ರತಿಯೊಬ್ಬರ ಜೀವನಕ್ಕೂ ಮಾರ್ಗದರ್ಶಕವಾಗಿದ್ದು, ಯುವಜನತೆ ಅವುಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಅಭಿಪ್ರಾಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಅಮೀನಗಡ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಬಸಲಿಂಗಮ್ಮ, ಆದೇಶ, ಬಸವರಾಜು ರನ್ನರ್, ಅಯ್ಯಣ್ಣ, ಮನ್ಸೂರು ಸೇರಿದಂತೆ ಗ್ರಾಮದ ಮುಖಂಡರು, ಯುವಕರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.



