ಕವಿತಾಳ, ಅ.26: ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯವು ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಶ್ರೇಷ್ಠ ಕೃತಿಯಾಗಿದೆ. ಸತ್ಯ, ಧರ್ಮ, ಸಮಾನತೆ ಮತ್ತು ಮಾನವೀಯತೆಯ ಮಹತ್ವವನ್ನು ಸಾರಿದ ಅವರ ತತ್ವಾದರ್ಶಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ ಎಂದು ಹೇಳಿದರು.

ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಸಾಹಿತ್ಯಿಕ ಸಾಧನೆಗಳು ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದ್ದು, ಅವರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಸಾಮರಸ್ಯ ಹಾಗೂ ಸಹಬಾಳ್ವೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನಗೌಡ, ಸ್ಥಳೀಯ ಮುಖಂಡರಾದ ಪಟ್ಟಣ ತಿಪ್ಪಯ್ಯಸ್ವಾಮಿ, ಲಾಳೇಶ್ ನಾಯಕ, ಯಮನಪ್ಪ ದಿನ್ನಿ, ಎಚ್. ಬಸವರಾಜ, ಯಾಕೋಬ ಕಡತಲ್, ರಫಿ ಒಂಟಿಬಂಡಿ ಸೇರಿದಂತೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗಣ್ಯರು ಉಪಸ್ಥಿತರಿದ್ದರು.