ರಾಯಚೂರು: ನಗರದ ಎಲ್ಬಿಎಸ್ ನಗರದಲ್ಲಿ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಅಮಾಯಕ ವ್ಯಾಪಾರಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸಿ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ, ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ಹಾಗೂ ಕನ್ನಡ ಮಿತ್ರ ಕೂಟದ ವತಿಯಿಂದ ಹತ್ಯೆ ಘಟನೆಯನ್ನು ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳು ಹಾಗೂ ಮಾದಕ ವಸ್ತುಗಳ ಹಾವಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಲಾಗಿದೆ.
ಜಿಲ್ಲೆಯಲ್ಲಿ ಈ ಹಿಂದೆ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದ್ದವು. ಆ ಘಟನೆಗಳ ನೆನಪು ಮಾಸುವ ಮುನ್ನವೇ ನಗರದ ಜನನಿಬಿಡ ಪ್ರದೇಶದಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಾಪಾರಸ್ಥನೊಬ್ಬನನ್ನು ಹತ್ಯೆ ಮಾಡಿರುವುದು ನಾಗರಿಕರಲ್ಲಿ ಆತಂಕ ಸೃಷ್ಟಿಸಿದೆ. ಕುಟುಂಬಕ್ಕೆ ಆಧಾರವಾಗಿದ್ದ ಯುವಕನನ್ನು ಅಮಾನುಷವಾಗಿ ಕೊಲೆ ಮಾಡಿರುವುದು ಅತ್ಯಂತ ಖಂಡನೀಯ ಎಂದು ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿಯೇ ಯಾವುದೇ ಭಯವಿಲ್ಲದೆ ಇಂತಹ ಭೀಕರ ಕೃತ್ಯ ನಡೆಯುತ್ತಿರುವುದು ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅಪರಾಧ ಪ್ರಕರಣಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ನಿರ್ಭಯವಾಗಿ ಓಡಾಡುವ ವಾತಾವರಣ ನಿರ್ಮಿಸುವುದು ಜಿಲ್ಲಾಡಳಿತದ ಆದ್ಯ ಕರ್ತವ್ಯವಾಗಬೇಕು ಎಂದು ಒತ್ತಾಯಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಹೆಚ್ಚುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿವೆ. ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿರುವುದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಮತ್ತು ಸರಬರಾಜಿನಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ವ್ಯಾಪಾರಸ್ಥನ ಹತ್ಯೆ ಪ್ರಕರಣದ ಆರೋಪಿಯನ್ನು ಬಂಧಿಸಿರುವುದು ಸ್ವಾಗತಾರ್ಹ. ಆದರೆ ಕೇವಲ ಆರೋಪಿಯ ಬಂಧನದಿಂದ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವುದಿಲ್ಲ. ಇಂತಹ ಘಟನೆಗಳಿಗೆ ಕಾರಣವಾಗುವ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಾದಕ ವಸ್ತುಗಳ ಮಾರಾಟದ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಸಿ, ಅದರ ಹಿಂದೆ ಇರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಬೇಕು. ನಗರ ಮತ್ತು ಜಿಲ್ಲೆಯಾದ್ಯಂತ ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಸೂಕ್ತ ಕಾರ್ಯಯೋಜನೆ ರೂಪಿಸಬೇಕು. ಸಾರ್ವಜನಿಕರಲ್ಲಿ ಮೂಡಿರುವ ಭಯದ ವಾತಾವರಣವನ್ನು ದೂರ ಮಾಡಿ, ಜನಸಾಮಾನ್ಯರ ಜೀವ ಮತ್ತು ಆಸ್ತಿಗೆ ರಕ್ಷಣೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ರಾಯಚೂರು ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಕುಮಾರ ಸಿ.ಕೆ. ಜೈನ್, ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ರಫೀಕ್ ಅಹ್ಮದ್, ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ಹಾಗೂ ಕನ್ನಡ ಮಿತ್ರ ಕೂಟದ ಪ್ರಧಾನ ಕಾರ್ಯದರ್ಶಿ ರಾಮಣ್ಣ ಮ್ಯಾದಾರ ಸೇರಿದಂತೆ ಸಂಘಟನೆಗಳ ಮುಖಂಡರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.



