ರಾಯಚೂರು: ನಗರದಲ್ಲಿ ಹೆಚ್ಚುತ್ತಿರುವ ಗಾಂಜಾ ಹಾಗೂ ಇತರ ಮಾದಕ ವಸ್ತುಗಳ ಅಕ್ರಮ ಮಾರಾಟವನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಒಂದು ವಾರದೊಳಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಗರದ ವಿವಿಧ ಯುವ ಸಂಘಟನೆಗಳನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ವಿರುಪಾಕ್ಷಿ ಎಚ್ಚರಿಕೆ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಯಚೂರು ನಗರದ ಹಲವು ಬಡಾವಣೆಗಳಲ್ಲಿ ಗಾಂಜಾ ಮಾರಾಟ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿವೆ. ಮಾದಕ ವಸ್ತುಗಳ ಚಟಕ್ಕೆ ಯುವಕರು ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗಿದೆ ಎಂದು ಹೇಳಿದರು.

ನಗರದಲ್ಲಿ ಇತ್ತೀಚೆಗೆ ಸಂಭವಿಸಿರುವ ಕೊಲೆ ಪ್ರಕರಣಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಕುಲಸುಂಬಿ ಕಾಲೋನಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನಡೆದ ಹತ್ಯೆಗಳು ಹಾಗೂ ಏಕ ಮಿನಾರ್ ಸಮೀಪ ಸಂಭವಿಸಿದ ಕೊಲೆ ಪ್ರಕರಣಗಳ ಹಿನ್ನೆಲೆಯನ್ನು ಪೊಲೀಸರು ಸಮಗ್ರವಾಗಿ ತನಿಖೆ ನಡೆಸಬೇಕು. ಈ ಅಪರಾಧಗಳಿಗೂ ಮಾದಕ ವಸ್ತುಗಳ ಸೇವನೆ ಅಥವಾ ಅಕ್ರಮ ವ್ಯವಹಾರಕ್ಕೂ ಸಂಬಂಧವಿದೆಯೇ ಎಂಬುದನ್ನು ಪರಿಶೀಲಿಸಿ ವಾಸ್ತವಾಂಶವನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದು ಒತ್ತಾಯಿಸಿದರು.

ಕೆಲವು ಪ್ರದೇಶಗಳಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿರುವ ಆರೋಪ ಎದುರಿಸುತ್ತಿರುವ ವ್ಯಕ್ತಿಗಳು ರಾಜಕೀಯ ನಾಯಕರ ಹಾಗೂ ಜನಪ್ರತಿನಿಧಿಗಳ ಭಾವಚಿತ್ರಗಳಿರುವ ಫ್ಲೆಕ್ಸ್‌ಗಳನ್ನು ಬಳಸಿಕೊಂಡು ತಮ್ಮ ಪ್ರಭಾವ ಪ್ರದರ್ಶಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪಗಳಿವೆ. ಇಂತಹ ಚಟುವಟಿಕೆಗಳ ಕುರಿತು ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಮಾದಕ ವಸ್ತುಗಳ ಅಕ್ರಮ ವ್ಯವಹಾರದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ರಾಜಕೀಯ ಹಿನ್ನೆಲೆ ಅಥವಾ ಪ್ರಭಾವಕ್ಕೆ ಮಣಿಯದೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ನಗರದಲ್ಲಿ ಗಾಂಜಾ ಹಾವಳಿ ಹೆಚ್ಚುತ್ತಿರುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ಈ ಸಂಬಂಧ 187 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅಕ್ರಮ ಮಾರಾಟದ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ಕೇವಲ ಪ್ರಕರಣಗಳನ್ನು ದಾಖಲಿಸುವುದರಿಂದ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಗಾಂಜಾ ಎಲ್ಲಿಂದ ನಗರಕ್ಕೆ ಸರಬರಾಜಾಗುತ್ತಿದೆ, ಅದರ ವಿತರಣಾ ಜಾಲದಲ್ಲಿ ಯಾರು ಕಾರ್ಯನಿರ್ವಹಿಸುತ್ತಿದ್ದಾರೆ ಹಾಗೂ ಅಕ್ರಮ ದಂಧೆಯ ಹಿಂದೆ ಇರುವ ವ್ಯಕ್ತಿಗಳು ಯಾರು ಎಂಬುದನ್ನು ಪತ್ತೆಹಚ್ಚಬೇಕು. ಸಣ್ಣಪುಟ್ಟ ಮಾರಾಟಗಾರರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳದೆ, ಮಾದಕ ವಸ್ತುಗಳನ್ನು ಪೂರೈಸುವ ಪ್ರಮುಖ ಜಾಲವನ್ನು ಬೇಧಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಬೇಕು ಎಂದು ಒತ್ತಾಯಿಸಿದರು.

ನಗರದಲ್ಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸ್ ಇಲಾಖೆ ನಿರಂತರ ನಿಗಾ ವಹಿಸಬೇಕು. ಮಾದಕ ವಸ್ತುಗಳ ಮಾರಾಟದ ಕುರಿತು ಮಾಹಿತಿ ಇದ್ದರೂ ಕ್ರಮ ಕೈಗೊಳ್ಳದ ಅಧಿಕಾರಿಗಳಿದ್ದರೆ ಅವರ ಕಾರ್ಯವೈಖರಿಯನ್ನೂ ಪರಿಶೀಲಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.

ಯುವಜನತೆ ದುಶ್ಚಟಗಳಿಗೆ ಒಳಗಾಗದಂತೆ ತಡೆಯುವುದು ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿಯಲ್ಲ. ಪೋಷಕರು, ಶಿಕ್ಷಣ ಸಂಸ್ಥೆಗಳು, ಸಾಮಾಜಿಕ ಸಂಘಟನೆಗಳು ಹಾಗೂ ಸಾರ್ವಜನಿಕರು ಕೂಡ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಕೈಜೋಡಿಸಬೇಕು. ಮಾದಕ ವಸ್ತುಗಳ ಮಾರಾಟದ ಬಗ್ಗೆ ಮಾಹಿತಿ ದೊರೆತಲ್ಲಿ ಪೊಲೀಸರಿಗೆ ತಿಳಿಸುವ ಮೂಲಕ ಸಮಾಜವನ್ನು ಮಾದಕ ವಸ್ತುಗಳ ಹಾವಳಿಯಿಂದ ಮುಕ್ತಗೊಳಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಪೊಲೀಸ್ ಇಲಾಖೆ ಒಂದು ವಾರದೊಳಗೆ ಗಾಂಜಾ ಮಾರಾಟದ ವಿರುದ್ಧ ಪರಿಣಾಮಕಾರಿ ಕಾರ್ಯಾಚರಣೆ ಕೈಗೊಂಡು ಸ್ಪಷ್ಟ ಫಲಿತಾಂಶ ತೋರಿಸಬೇಕು. ಇಲ್ಲದಿದ್ದರೆ ರಾಯಚೂರು ನಗರದ ಎಲ್ಲ ಯುವ ಸಂಘಟನೆಗಳ ಮುಖಂಡರ ಸಭೆ ನಡೆಸಿ ಮುಂದಿನ ಹೋರಾಟದ ಸ್ವರೂಪ ನಿರ್ಧರಿಸಲಾಗುವುದು. ಯುವಕರ ಭವಿಷ್ಯ ರಕ್ಷಣೆ ಹಾಗೂ ನಗರದ ಶಾಂತಿ ಕಾಪಾಡುವ ಉದ್ದೇಶದಿಂದ ಪಕ್ಷಾತೀತವಾಗಿ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಎಂ. ವಿರುಪಾಕ್ಷಿ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಣ್ಣ ನರಸಿಂಹಲು, ನರಸಪ್ಪ, ಲಕ್ಷ್ಮೀಪತಿ ಗಣದಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.