ದೇವದುರ್ಗ: ಕ್ಷಯರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆಮನೆಗೆ ಭೇಟಿ ನೀಡಿ ನಡೆಸುವ ಸಕ್ರಿಯ ಕ್ಷಯರೋಗ ಪತ್ತೆ ಕಾರ್ಯಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು. ರೋಗದ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ವಹಿಸದೆ ತಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕು ಎಂದು ಜಾಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಆರ್.ಎಸ್. ಹುಲಿಮನಿಗೌಡ ಕರೆ ನೀಡಿದರು.

ತಾಲೂಕಿನ ಜಾಲಹಳ್ಳಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಸಕ್ರಿಯ ಕ್ಷಯರೋಗ ಪತ್ತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ಷಯರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಒದಗಿಸುವ ಮೂಲಕ ರೋಗ ಹರಡುವಿಕೆಯನ್ನು ತಡೆಗಟ್ಟುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮೀಣ ಪ್ರದೇಶಗಳಲ್ಲಿನ ಮನೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಆರೋಗ್ಯ ಸ್ಥಿತಿಗತಿ ಪರಿಶೀಲಿಸಲಿದ್ದಾರೆ ಎಂದು ತಿಳಿಸಿದರು.

ರಾಯಚೂರು ಜಿಲ್ಲೆಯಲ್ಲಿ ಅಕ್ಟೋಬರ್ 27ರಿಂದ ಡಿಸೆಂಬರ್ 8ರವರೆಗೆ ಸಕ್ರಿಯ ಕ್ಷಯರೋಗ ಪತ್ತೆ ಅಭಿಯಾನ ನಡೆಯಲಿದೆ. ಆಯ್ದ ಆರೋಗ್ಯ ಉಪಕೇಂದ್ರಗಳು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಒಟ್ಟು 33 ತಂಡಗಳು ಕಾರ್ಯನಿರ್ವಹಿಸಲಿದ್ದು, 28,588 ಜನರನ್ನು ತಪಾಸಣಾ ವ್ಯಾಪ್ತಿಗೆ ಒಳಪಡಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ 18 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ವಿವರಿಸಿದರು.

ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರು ಮನೆಮನೆಗೆ ತೆರಳಿ ಕುಟುಂಬದ ಸದಸ್ಯರ ಆರೋಗ್ಯದ ಕುರಿತು ಮಾಹಿತಿ ಸಂಗ್ರಹಿಸಲಿದ್ದಾರೆ. ಕ್ಷಯರೋಗದ ಶಂಕಿತ ಲಕ್ಷಣಗಳು ಕಂಡುಬರುವ ವ್ಯಕ್ತಿಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಅಥವಾ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿ ಕಫ ಪರೀಕ್ಷೆ ಹಾಗೂ ಎಕ್ಸ್‌ರೇ ತಪಾಸಣೆ ನಡೆಸಲಾಗುವುದು. ರೋಗ ದೃಢಪಟ್ಟವರಿಗೆ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಉಚಿತ ಚಿಕಿತ್ಸೆ ಒದಗಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಡಾ. ನಾಗರಾಜ್ ಹೂಗಾರ್ ಮಾತನಾಡಿ, ಕ್ಷಯರೋಗವು ಸೂಕ್ತ ಚಿಕಿತ್ಸೆಯಿಂದ ಸಂಪೂರ್ಣ ಗುಣಪಡಿಸಬಹುದಾದ ಕಾಯಿಲೆಯಾಗಿದೆ. ಎರಡು ವಾರಗಳಿಗಿಂತ ಹೆಚ್ಚು ಕಾಲ ನಿರಂತರ ಕೆಮ್ಮು, ಕಫದಲ್ಲಿ ರಕ್ತ ಕಾಣಿಸಿಕೊಳ್ಳುವುದು, ಹಸಿವು ಕಡಿಮೆಯಾಗುವುದು, ದೇಹದ ತೂಕ ಇಳಿಕೆಯಾಗುವುದು ಹಾಗೂ ಎದೆನೋವಿನಂತಹ ಲಕ್ಷಣಗಳು ಕಂಡುಬಂದರೆ ವಿಳಂಬ ಮಾಡದೆ ವೈದ್ಯರನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.

ಕ್ಷಯರೋಗಕ್ಕೆ ಸಾಮಾನ್ಯವಾಗಿ ಆರು ತಿಂಗಳ ಚಿಕಿತ್ಸಾ ಕ್ರಮವಿದ್ದು, ವೈದ್ಯರ ಸೂಚನೆಯಂತೆ ಔಷಧಿಗಳನ್ನು ನಿಯಮಿತವಾಗಿ ಸೇವಿಸುವುದು ಅತ್ಯಂತ ಮುಖ್ಯವಾಗಿದೆ. ರೋಗದ ಲಕ್ಷಣಗಳು ಕಡಿಮೆಯಾದರೂ ವೈದ್ಯರ ಸಲಹೆಯಿಲ್ಲದೆ ಮಧ್ಯದಲ್ಲಿಯೇ ಔಷಧಿ ಸೇವನೆ ನಿಲ್ಲಿಸಬಾರದು. ಸಂಪೂರ್ಣ ಚಿಕಿತ್ಸಾ ಅವಧಿಯನ್ನು ಪೂರ್ಣಗೊಳಿಸುವುದರಿಂದ ರೋಗದಿಂದ ಗುಣಮುಖರಾಗಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕ್ಷಯರೋಗಿಗಳಿಗೆ ಚಿಕಿತ್ಸೆಯ ಅವಧಿಯಲ್ಲಿ ಪೌಷ್ಟಿಕ ಆಹಾರ ಸೇವನೆಗೆ ನೆರವಾಗುವ ಉದ್ದೇಶದಿಂದ ಸರ್ಕಾರ ಮಾಸಿಕ ₹1,000 ಆರ್ಥಿಕ ಸಹಾಯವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಒದಗಿಸುತ್ತಿದೆ. ಅರ್ಹ ಫಲಾನುಭವಿಗಳು ಈ ಸೌಲಭ್ಯವನ್ನು ಪಡೆದುಕೊಂಡು ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಕ್ಷಯರೋಗದ ಬಗ್ಗೆ ಸಾರ್ವಜನಿಕರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡಿ, ರೋಗಿಗಳನ್ನು ತಾರತಮ್ಯವಿಲ್ಲದೆ ಬೆಂಬಲಿಸುವುದು ಅಗತ್ಯವಾಗಿದೆ. ರೋಗವನ್ನು ಮುಚ್ಚಿಡದೆ ಸಕಾಲದಲ್ಲಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯುವುದರಿಂದ ವೈಯಕ್ತಿಕ ಆರೋಗ್ಯದ ಜೊತೆಗೆ ಕುಟುಂಬ ಹಾಗೂ ಸಮಾಜದ ಆರೋಗ್ಯವನ್ನೂ ಕಾಪಾಡಬಹುದು ಎಂದು ವೈದ್ಯಾಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕ್ಷಯರೋಗ ಮೇಲ್ವಿಚಾರಕ ಮಹೇಶ ನಾಯಕ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ದೇವೇಂದ್ರಪ್ಪ ಮತ್ತು ಚೇತನ್ ಕುಮಾರ್, ಫಾರ್ಮಸಿ ಅಧಿಕಾರಿ ಸುರೇಶ, ಪ್ರಯೋಗಾಲಯ ತಾಂತ್ರಿಕ ಅಧಿಕಾರಿ ಬಸ್ಸಮ್ಮ, ಎನ್‌ಸಿಡಿ ವಿಭಾಗದ ಲಚಮಣ್ಣ ಮತ್ತು ಮಲ್ಲಿಕಾರ್ಜುನ, ಎನ್‌ಜಿಒ ತಂಡದ ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.