ಮಾನ್ವಿ: ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯವರೆಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕುಡಿಯುವ ನೀರಿನ ಕೆರೆಗಳು ಹಾಗೂ ಜಲಮೂಲಗಳ ಸಂರಕ್ಷಣೆಗೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಸೂಚಿಸಿದರು.
ತಾಲೂಕಿನ ಜಾನೇಕಲ್, ಆಲ್ದಾಳ, ಅಮರಾವತಿ, ನಕ್ಕುಂದಿ, ಬಾಗಲವಾಡ, ಲಕ್ಷ್ಮೀ ಕ್ಯಾಂಪ್ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಲಭ್ಯತೆ, ಕೆರೆಗಳ ಸ್ಥಿತಿಗತಿ ಹಾಗೂ ನೀರು ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಿದ ಬಳಿಕ ಅವರು ಅಧಿಕಾರಿಗಳೊಂದಿಗೆ ಮಾತನಾಡಿದರು.
ಗ್ರಾಮಗಳಲ್ಲಿರುವ ಸರ್ಕಾರಿ ಕುಡಿಯುವ ನೀರಿನ ಕೆರೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕೆರೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಿರ್ವಹಿಸಬೇಕು. ಕೆರೆಗಳಿಗೆ ತ್ಯಾಜ್ಯ ಹಾಗೂ ಕೊಳಚೆ ನೀರು ಸೇರದಂತೆ ಎಚ್ಚರಿಕೆ ವಹಿಸುವುದರ ಜೊತೆಗೆ ಜಲಮೂಲಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಕೆರೆಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಮತ್ತು ಸಂಗ್ರಹ ಸಾಮರ್ಥ್ಯವನ್ನು ಪರಿಶೀಲಿಸಬೇಕು. ಅಗತ್ಯವಿರುವ ಕಡೆಗಳಲ್ಲಿ ಹೂಳೆತ್ತುವಿಕೆ, ಸ್ವಚ್ಛತಾ ಕಾರ್ಯ ಹಾಗೂ ಕೆರೆಗಳ ಸುತ್ತ ಬೇಲಿ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಕೆರೆಗಳ ಒತ್ತುವರಿಯನ್ನು ತಡೆಗಟ್ಟಿ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಕಾರ್ಯಪ್ರವೃತ್ತವಾಗಬೇಕು ಎಂದು ಸೂಚಿಸಿದರು.
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಅಂತಹ ಗ್ರಾಮಗಳಲ್ಲಿ ನೀರಿನ ಲಭ್ಯತೆಯನ್ನು ಪರಿಶೀಲಿಸಿ, ಅಗತ್ಯವಿರುವ ಕಡೆಗಳಲ್ಲಿ ಪರ್ಯಾಯ ಜಲಮೂಲಗಳನ್ನು ಗುರುತಿಸಿಕೊಳ್ಳಬೇಕು. ಕೊಳವೆಬಾವಿಗಳು, ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಹಾಗೂ ಪೈಪ್ಲೈನ್ಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ, ದುರಸ್ತಿಗೆ ಅಗತ್ಯವಿರುವ ಕಡೆಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕುಡಿಯುವ ನೀರಿನ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸದೆ, ಗ್ರಾಮಸ್ಥರಿಗೆ ಯಾವುದೇ ತೊಂದರೆಯಾಗದಂತೆ ನಿರಂತರ ನೀರು ಪೂರೈಕೆಗೆ ಆದ್ಯತೆ ನೀಡಬೇಕು. ಬೇಸಿಗೆಯವರೆಗೆ ನೀರಿನ ಲಭ್ಯತೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಸಮರ್ಪಕ ಯೋಜನೆ ರೂಪಿಸಬೇಕು ಎಂದು ಬೋಸರಾಜು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಹಂಪಯ್ಯ ನಾಯಕ ಮಾತನಾಡಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೆರೆಗಳ ನಿರ್ವಹಣೆ ಹಾಗೂ ಸ್ವಚ್ಛತೆಗೆ ವಿಶೇಷ ಗಮನ ಹರಿಸಬೇಕು. ನೀರಿನ ಮಹತ್ವ ಮತ್ತು ಮಿತಬಳಕೆಯ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗದಂತೆ ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕೈಗೊಂಡ ಕ್ರಮಗಳ ಕುರಿತು ಅಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸಬೇಕು. ಗ್ರಾಮೀಣ ಪ್ರದೇಶಗಳ ಜನರಿಗೆ ಸಮರ್ಪಕವಾಗಿ ನೀರು ದೊರೆಯುವಂತೆ ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಖಾಲೀದ್ ಅಹಮ್ಮದ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಸುರೇಶ, ನಯೋಪ್ರ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ಶರಣಯ್ಯ ನಾಯಕ, ಬಾಲಸ್ವಾಮಿ ಕೊಡ್ಲಿ, ರಾಜಾ ಸುಭಾಷ್ ಚಂದ್ರ ನಾಯಕ, ಮಹಾಂತೇಶ ಸ್ವಾಮಿ ರೌಡೂರು, ಖಾಲಿದ್ ಗುರು, ತಿಪ್ಪಣ್ಣ ಬಾಗಲವಾಡ, ಪ್ರಸಾದ್ ರಾವ್, ರಾಜಶೇಖರಗೌಡ, ನೀಲಪ್ಪಗೌಡ ಜಾನೇಕಲ್, ಆಲ್ದಾಳ ವೀರಭದ್ರಪ್ಪ, ರಾಮಕೃಷ್ಣ, ನಕ್ಕುಂದಿ ಶಂಕ್ರಪ್ಪ, ವೀರೇಶ, ಆಂಜನೇಯ್ಯ, ಗಣೇಶ ರಾವ್, ಮಲ್ಲಿಕಾರ್ಜುನ ಸ್ವಾಮಿ, ಸತ್ತಾರ್ ಬಂಗ್ಲೆವಾಲೆ, ಬೀರಪ್ಪ ಬಲ್ಲಟಗಿ ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.



