ಲಿಂಗಸುಗೂರು: ಪಟ್ಟಣದ ತಾಲೂಕು ಆಡಳಿತದ ತಹಶೀಲ್ದಾರ್ ಕಚೇರಿಯಲ್ಲಿರುವ ಸಾರ್ವಜನಿಕ ಶೌಚಾಲಯ ದುರಸ್ತಿಯಿಲ್ಲದೆ ದುರ್ವಾಸನೆ ಬೀರುತ್ತಿದ್ದು, ಕಚೇರಿಗೆ ವಿವಿಧ ಕೆಲಸಗಳಿಗಾಗಿ ಆಗಮಿಸುವ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಂದ ನಿತ್ಯವೂ ನೂರಾರು ಜನರು ಕಂದಾಯ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಕೆಲಸಗಳಿಗಾಗಿ ತಹಶೀಲ್ದಾರ್ ಕಚೇರಿಗೆ ಆಗಮಿಸುತ್ತಾರೆ. ಆದರೆ ಕಚೇರಿ ಆವರಣದಲ್ಲಿರುವ ಶೌಚಾಲಯ ಬಳಕೆಗೆ ಯೋಗ್ಯವಾಗಿಲ್ಲದ ಕಾರಣ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಶೌಚಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ದುರ್ವಾಸನೆ ಹರಡುತ್ತಿದ್ದು, ಅಲ್ಲಿಗೆ ಬರುವ ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಸಾರ್ವಜನಿಕರಿಗೆ ಅತ್ಯಗತ್ಯವಾಗಿರುವ ಮೂಲಸೌಕರ್ಯವನ್ನು ಸಮರ್ಪಕವಾಗಿ ನಿರ್ವಹಿಸದ ತಾಲೂಕು ಆಡಳಿತದ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶೌಚಾಲಯದ ಮುಂಭಾಗದಲ್ಲಿ 'ಶೌಚಾಲಯ ದುರಸ್ತಿಯಲ್ಲಿದೆ' ಎಂಬ ನಾಮಫಲಕ ಅಳವಡಿಸಿ ಹಲವು ದಿನಗಳು ಕಳೆದರೂ ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕೇವಲ ನಾಮಫಲಕ ಹಾಕುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ಶೌಚಾಲಯವನ್ನು ದುರಸ್ತಿಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ಕುಡಿಯುವ ನೀರು, ಸ್ವಚ್ಛ ಶೌಚಾಲಯ ಸೇರಿದಂತೆ ಕನಿಷ್ಠ ಮೂಲಸೌಕರ್ಯಗಳನ್ನು ಒದಗಿಸುವುದು ಆಡಳಿತದ ಜವಾಬ್ದಾರಿಯಾಗಿದೆ. ಅದರಲ್ಲೂ ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ಶೌಚಾಲಯದ ಸಮಸ್ಯೆಯಿಂದ ಹೆಚ್ಚಿನ ಅನಾನುಕೂಲವಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಶೌಚಾಲಯದ ದುರಸ್ತಿ ಹಾಗೂ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶೌಚಾಲಯವನ್ನು ಶೀಘ್ರ ಬಳಕೆಗೆ ಮುಕ್ತಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.