ದೇವದುರ್ಗ: ಮಕ್ಕಳಿಗೆ ಕೇವಲ ಶಿಕ್ಷಣ ನೀಡಿದರಷ್ಟೇ ಸಾಲದು. ಅವರಲ್ಲಿ ಉತ್ತಮ ಸಂಸ್ಕಾರ, ನೈತಿಕ ಮೌಲ್ಯಗಳು, ಶಿಸ್ತು ಹಾಗೂ ಗುರುಹಿರಿಯರ ಮೇಲಿನ ಗೌರವವನ್ನು ಬೆಳೆಸುವುದು ಅತ್ಯಂತ ಅಗತ್ಯವಾಗಿದೆ ಎಂದು ನಿವೃತ್ತ ಪ್ರಾಚಾರ್ಯ ಅಮರೇಗೌಡ ಹೇಳಿದರು.

ತಾಲೂಕಿನ ಗಬ್ಬೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ 2005ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ಆಯೋಜಿಸಿದ್ದ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಕರು ವಿದ್ಯಾರ್ಥಿಗಳ ಜೀವನಕ್ಕೆ ದಾರಿದೀಪವಾಗಿದ್ದು, ಅವರ ಮಾರ್ಗದರ್ಶನವು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದರ ಜೊತೆಗೆ ಉತ್ತಮ ನಡವಳಿಕೆ, ಮಾನವೀಯ ಮೌಲ್ಯಗಳು ಹಾಗೂ ಪ್ರಾಮಾಣಿಕತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಸಂಸ್ಕಾರಯುತ ಜೀವನದ ಮಾದರಿಯಾಗಬೇಕು ಎಂದು ಕಿವಿಮಾತು ಹೇಳಿದರು.

ಶಾಲಾ ದಿನಗಳಲ್ಲಿ ಶಿಕ್ಷಕರು ನೀಡಿದ ಶಿಕ್ಷಣ, ಶಿಸ್ತು ಮತ್ತು ಜೀವನ ಮೌಲ್ಯಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿಯಾಗುತ್ತವೆ. ವಿದ್ಯಾರ್ಥಿಗಳು ಎಷ್ಟೇ ಉನ್ನತ ಸ್ಥಾನಕ್ಕೆ ಏರಿದರೂ ತಮಗೆ ವಿದ್ಯೆ ಕಲಿಸಿದ ಗುರುಗಳನ್ನು ಮರೆಯಬಾರದು. ಗುರುಹಿರಿಯರಿಗೆ ಗೌರವ ನೀಡುವ ಗುಣವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಬ್ಬೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ವನಕೇರಪ್ಪ ವಹಿಸಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ಮಲ್ಲನಗೌಡ ಹದ್ದಿನಾಳ, ನಿವೃತ್ತ ಶಿಕ್ಷಕ ಪ್ರಕಾಶ ಗದ್ದೆ, ಬಿಬ್ಬಿ ಬಾಚರಸ, ಶಂಕರಗೌಡ, ಸುನಂದಾ, ಬಾಬು, ನಂದಪ್ಪ, ಶರಣಪ್ಪ, ಸಾಬಿರ್ ಬೇಗಂ ಹಾಗೂ ಬೋಧಕೇತರ ಸಿಬ್ಬಂದಿ ಬುದೆಪ್ಪ ಎಸ್. ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುಮಾರು ಎರಡು ದಶಕಗಳ ನಂತರ ಒಂದೆಡೆ ಸೇರಿದ 2005ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ ಸವಿನೆನಪುಗಳನ್ನು ಹಂಚಿಕೊಂಡರು. ಬಾಲ್ಯದ ಸ್ನೇಹ, ತರಗತಿಯ ಅನುಭವಗಳು ಹಾಗೂ ಶಿಕ್ಷಕರ ಮಾರ್ಗದರ್ಶನವನ್ನು ನೆನಪಿಸಿಕೊಂಡು ಸಂತಸ ವ್ಯಕ್ತಪಡಿಸಿದರು.

ತಮ್ಮ ಜೀವನ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಿಕ್ಷಕರನ್ನು ಸ್ಮರಿಸಿದ ಹಳೆಯ ವಿದ್ಯಾರ್ಥಿಗಳು, ಕಾರ್ಯಕ್ರಮದಲ್ಲಿ ಗುರುಗಳನ್ನು ಸನ್ಮಾನಿಸಿ ಗೌರವ ಸಲ್ಲಿಸಿದರು. ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಹಾಗೂ ಕೃತಜ್ಞತೆಯ ಭಾವನೆಗಳಿಗೆ ಸ್ನೇಹ ಸಮ್ಮಿಲನ ಕಾರ್ಯಕ್ರಮ ಸಾಕ್ಷಿಯಾಯಿತು.

ಕಾರ್ಯಕ್ರಮದಲ್ಲಿ ವೀರಭದ್ರ ಹೇರುಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನುರಾಧ ಮಸೀದಾಪುರ ಸ್ವಾಗತಿಸಿದರು. ರವಿಚಂದ್ರ ಸುಲ್ತಾನಪುರ, ಸುರೇಶ ಪಾಟೀಲ್ ಹುಣಗುಂದಬಾಡ ಹಾಗೂ ಕುಸುಮಾ ಹಿರೇಮಠ ಜಿನ್ನಾಪುರ ಕಾರ್ಯಕ್ರಮ ನಿರ್ವಹಿಸಿದರು.