ರಾಯಚೂರು: ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರಿಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯರಾಜೇಶ್ವರಿ ಗೋಪಿಶೆಟ್ಟಿ ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಶಿಕ್ಷಕ ಮತದಾರರು ನೀಡಿದ್ದ ಬೆಂಬಲದ ಭರವಸೆಯನ್ನು ಮತದಾನದ ಮೂಲಕ ಈಡೇರಿಸಿದ್ದಾರೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಹಾಗೂ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಶ್ರಮಿಸಿರುವ ನಮೋಶಿ ಅವರ ಅನುಭವ ಮತ್ತು ಕಾರ್ಯವೈಖರಿಯನ್ನು ಗುರುತಿಸಿ ಮತದಾರರು ಮತ್ತೊಮ್ಮೆ ಅವಕಾಶ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈಶಾನ್ಯ ಕರ್ನಾಟಕ ಭಾಗದ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಅನುದಾನ ಒದಗಿಸುವುದು ಹಾಗೂ ಶಿಕ್ಷಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸಲು ನಮೋಶಿ ಅವರು ಶ್ರಮಿಸಿದ್ದಾರೆ. ಶಿಕ್ಷಕರ ಹಿತಾಸಕ್ತಿಗಾಗಿ ಅವರು ತೋರಿದ ಬದ್ಧತೆ ಮತ್ತು ಸೇವಾ ಮನೋಭಾವವೇ ಐದನೇ ಬಾರಿಗೆ ಗೆಲುವು ಸಾಧಿಸಲು ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಂಘಟಿತವಾಗಿ ಪ್ರಚಾರ ನಡೆಸಿದ್ದಾರೆ. ರಾಯಚೂರು ನಗರ ಶಾಸಕ ಡಾ. ಶಿವರಾಜ ಪಾಟೀಲ್, ಪಕ್ಷದ ಜಿಲ್ಲಾಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಿದ್ದು, ಎಲ್ಲರ ಪರಿಶ್ರಮಕ್ಕೆ ಉತ್ತಮ ಫಲಿತಾಂಶ ದೊರೆತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಆಗ್ನೇಯ ಮತ್ತು ಪಶ್ಚಿಮ ಪದವೀಧರರ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ನೀಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಮತದಾರರು ತಮ್ಮ ಅಸಮಾಧಾನವನ್ನು ಚುನಾವಣೆಯ ಮೂಲಕ ವ್ಯಕ್ತಪಡಿಸಿದ್ದಾರೆ ಎಂದು ವಿಜಯರಾಜೇಶ್ವರಿ ಗೋಪಿಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ಈ ಚುನಾವಣಾ ಫಲಿತಾಂಶವು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಾಯಕತ್ವ ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಂಘಟಿತ ಪ್ರಯತ್ನಕ್ಕೆ ದೊರೆತ ಯಶಸ್ಸಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.