ಮಾನ್ವಿ: ತಾಲೂಕಿನ ನಂದಿಹಾಳ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರಗಾಲದ ಪರಿಣಾಮ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಜನರು ಹಾಗೂ ಜಾನುವಾರುಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ಗೋಲದಿನ್ನಿ ಎಸ್ಕೇಪ್ ಮೂಲಕ ನಂದಿಹಾಳ್ ಹಳ್ಳಕ್ಕೆ ತಕ್ಷಣ ನೀರು ಹರಿಸಬೇಕೆಂದು ಗ್ರಾಮಸ್ಥರು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಅವರಿಗೆ ಮನವಿ ಸಲ್ಲಿಸಿದರು.
ನಂದಿಹಾಳ್ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬೋಸರಾಜು ಅವರನ್ನು ಭೇಟಿಯಾದ ಗ್ರಾಮಸ್ಥರು, ತಾಲೂಕಿನಲ್ಲಿ ಮಳೆಯ ಕೊರತೆಯಿಂದಾಗಿ ಜಲಮೂಲಗಳಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಾನುವಾರುಗಳಿಗೂ ಸಮರ್ಪಕವಾಗಿ ನೀರು ದೊರೆಯದೆ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗೋಲದಿನ್ನಿ ಎಸ್ಕೇಪ್ನಿಂದ ನಂದಿಹಾಳ್ ಹಳ್ಳಕ್ಕೆ ನೀರು ಬಿಡುಗಡೆ ಮಾಡುವ ಮೂಲಕ ಸುತ್ತಮುತ್ತಲಿನ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಸಿಂಧನೂರು ಹೆದ್ದಾರಿಯಲ್ಲಿ ನಂದಿಹಾಳ್ ಗ್ರಾಮದ ಸಮೀಪ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಸೂಕ್ತ ಬಸ್ ನಿಲ್ದಾಣ ನಿರ್ಮಿಸಬೇಕು. ಗ್ರಾಮಸ್ಥರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಸ್ಗಳಿಗಾಗಿ ಕಾಯಲು ಅಗತ್ಯ ವ್ಯವಸ್ಥೆ ಇಲ್ಲದಿರುವುದರಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗಮನ ಸೆಳೆದರು.
ಗ್ರಾಮದ ಮುಂಭಾಗದಲ್ಲಿರುವ ಹೆದ್ದಾರಿಯ ತಿರುವಿನಲ್ಲಿ ರಾತ್ರಿ ವೇಳೆ ಸಮರ್ಪಕ ಬೆಳಕಿನ ವ್ಯವಸ್ಥೆ ಇಲ್ಲದಿರುವುದರಿಂದ ವಾಹನ ಸವಾರರಿಗೆ ರಸ್ತೆ ಸ್ಪಷ್ಟವಾಗಿ ಕಾಣುತ್ತಿಲ್ಲ. ಇದರಿಂದ ಅಪಘಾತ ಸಂಭವಿಸುವ ಆತಂಕವಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತಿರುವಿನ ರಸ್ತೆ ಹಾಗೂ ಗ್ರಾಮದ ಪ್ರವೇಶ ಭಾಗದಲ್ಲಿ ಅಗತ್ಯ ವಿದ್ಯುತ್ ದೀಪಗಳನ್ನು ಅಳವಡಿಸಬೇಕೆಂದು ಮನವಿ ಮಾಡಿದರು.
ಗ್ರಾಮಸ್ಥರ ಅಹವಾಲು ಸ್ವೀಕರಿಸಿದ ಎನ್.ಎಸ್. ಬೋಸರಾಜು ಮಾತನಾಡಿ, ನಂದಿಹಾಳ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ರಾಜ್ಯ ನೀರಾವರಿ ಸಚಿವರೊಂದಿಗೆ ಚರ್ಚಿಸಿ, ಗೋಲದಿನ್ನಿ ಎಸ್ಕೇಪ್ ಮೂಲಕ ನಂದಿಹಾಳ್ ಹಳ್ಳಕ್ಕೆ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬರಗಾಲದ ಸಂದರ್ಭದಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವುದು ಅತ್ಯಂತ ಅಗತ್ಯವಾಗಿದೆ. ನೀರಿನ ಕೊರತೆಯಿಂದ ಗ್ರಾಮೀಣ ಜನಜೀವನಕ್ಕೆ ತೊಂದರೆಯಾಗದಂತೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಸಿಂಧನೂರು ಹೆದ್ದಾರಿಯಲ್ಲಿರುವ ನಂದಿಹಾಳ್ ಗ್ರಾಮದ ಬಳಿ ಬಸ್ಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಅಪಾಯಕಾರಿ ತಿರುವಿನ ಪ್ರದೇಶದಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಬೇಕು. ಈ ಎರಡೂ ಕಾಮಗಾರಿಗಳನ್ನು ಒಂದು ವಾರದೊಳಗೆ ಕೈಗೊಳ್ಳುವಂತೆ ಚತುಷ್ಪಥ ರಸ್ತೆ ನಿರ್ಮಾಣ ಸಂಸ್ಥೆಯ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆಯ ಕಿರಿಯ ಎಂಜಿನಿಯರ್ ಸ್ಯಾಮೇಲಪ್ಪ ಅವರಿಗೆ ಸೂಚಿಸಿದರು.
ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಗ್ರಾಮಸ್ಥರ ಸುರಕ್ಷತೆಗೆ ಆದ್ಯತೆ ನೀಡಬೇಕು. ವಿಶೇಷವಾಗಿ ರಾತ್ರಿ ವೇಳೆ ಅಪಘಾತಗಳ ಸಂಭವವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಹಂಪಯ್ಯ ನಾಯಕ, ಮಾನ್ವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ಬಿ.ಕೆ. ಅಂಬರೇಶಪ್ಪ ವಕೀಲರು, ಮಹಾಂತೇಶ ಸ್ವಾಮಿ, ಎ. ಬಾಲಸ್ವಾಮಿ ಕೊಡ್ಲಿ, ರಾಜಾ ಸುಭಾಷ್ ಚಂದ್ರ ನಾಯಕ, ಜಿ. ನಾಗರಾಜ್, ಸತ್ತಾರ್ ಬಂಗ್ಲೆವಾಲೆ, ಎಸ್.ಎಂ. ಪಾಟೀಲ್ ರಾಜಲದಿನ್ನಿ ಸೇರಿದಂತೆ ನಂದಿಹಾಳ್ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



