ಮಾನ್ವಿ: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಯಲ್ಲಿ ಗ್ರಾಮಾಭಿವೃದ್ಧಿ ಸಮಿತಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಗ್ರಾಮಸ್ಥರು ಸಂಘಟಿತರಾಗಿ ತಮ್ಮ ಊರಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳ ಪರಿಹಾರಕ್ಕೆ ಮುಂದಾದಾಗ ಮಾತ್ರ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಲೊಯೋಲ ಸಮಾಜ ಸೇವಾ ಕೇಂದ್ರದ ಕ್ಷೇತ್ರಾಧಿಕಾರಿ ಫಾ. ಶಾಂತರಾಜ ಎಸ್.ಜೆ. ಹೇಳಿದರು.
ಪಟ್ಟಣದ ಲೊಯೋಲ ಸಮಾಜ ಸೇವಾ ಕೇಂದ್ರದಲ್ಲಿ ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಹಾಗೂ ಗ್ರಾಮೀಣ ಭಾಗದ ಮುಖಂಡರಿಗಾಗಿ ಆಯೋಜಿಸಿದ್ದ ಗ್ರಾಮಾಭಿವೃದ್ಧಿ ಸಮಿತಿಗಳ ರಚನೆ ಕುರಿತ ತರಬೇತಿ ಕಾರ್ಯಾಗಾರವನ್ನು ಗ್ರಾಮಾಭಿವೃದ್ಧಿ ಸಮಿತಿಯ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮಗಳ ಅಭಿವೃದ್ಧಿ ಕೇವಲ ಸರ್ಕಾರದ ಯೋಜನೆಗಳಿಂದ ಮಾತ್ರ ಸಾಧ್ಯವಿಲ್ಲ. ಸ್ಥಳೀಯ ಜನರ ಸಕ್ರಿಯ ಪಾಲ್ಗೊಳ್ಳುವಿಕೆ, ಸಂಘಟಿತ ಪ್ರಯತ್ನ ಹಾಗೂ ಸಮುದಾಯದ ಸಹಕಾರವೂ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮಾಭಿವೃದ್ಧಿ ಸಮಿತಿಗಳು ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸುವ ವೇದಿಕೆಗಳಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಲೊಯೋಲ ಸಮಾಜ ಸೇವಾ ಕೇಂದ್ರವು ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳು, ಯುವಕರ ಸಂಘಟನೆಗಳು, ಕಟ್ಟಡ ಕಾರ್ಮಿಕರ ಗುಂಪುಗಳು ಹಾಗೂ ಕಲಿಕಾ ಕೇಂದ್ರಗಳ ಮೂಲಕ ವಿವಿಧ ಸಮುದಾಯಗಳಿಗೆ ಅಗತ್ಯ ತರಬೇತಿ ಮತ್ತು ಮಾರ್ಗದರ್ಶನ ನೀಡುತ್ತಿದೆ. ಜನರಲ್ಲಿ ನಾಯಕತ್ವ ಗುಣ ಬೆಳೆಸುವುದರ ಜತೆಗೆ ತಮ್ಮ ಹಕ್ಕುಗಳು ಹಾಗೂ ಸರ್ಕಾರದ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಮುಂಡಗೋಡದ ಲೊಯೋಲ ವಿಕಾಸ ಕೇಂದ್ರದ ಸಂಯೋಜಕ ಲಕ್ಷ್ಮಣ ಉಪನ್ಯಾಸ ನೀಡಿ, ಪ್ರತಿಯೊಂದು ಗ್ರಾಮದಲ್ಲಿಯೂ ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಗ್ರಾಮಾಭಿವೃದ್ಧಿ ಸಮಿತಿಗಳನ್ನು ರಚಿಸಬೇಕು. ಶಿಕ್ಷಣ, ಮೂಲಸೌಕರ್ಯ, ಆರೋಗ್ಯ, ಉದ್ಯೋಗ ಮತ್ತು ಜೀವನೋಪಾಯ, ಪರಿಸರ ಸಂರಕ್ಷಣೆ, ಸಂಪನ್ಮೂಲಗಳ ಕ್ರೋಡೀಕರಣ ಹಾಗೂ ಕಲೆ ಮತ್ತು ಸಂಸ್ಕೃತಿ ಸಂರಕ್ಷಣೆ ಸೇರಿದಂತೆ ವಿವಿಧ ವಿಷಯಗಳಿಗೆ ಪ್ರತ್ಯೇಕ ಉಪಸಮಿತಿಗಳನ್ನು ರಚಿಸುವುದು ಅಗತ್ಯವಾಗಿದೆ ಎಂದು ವಿವರಿಸಿದರು.
ಈ ಸಮಿತಿಗಳಿಗೆ ಸೂಕ್ತ ಪದಾಧಿಕಾರಿಗಳನ್ನು ಆಯ್ಕೆ ಮಾಡಿ, ಅವರ ಜವಾಬ್ದಾರಿಗಳನ್ನು ನಿಗದಿಪಡಿಸಬೇಕು. ಗ್ರಾಮಗಳ ಹಿರಿಯರು, ಸಮುದಾಯದ ಮುಖಂಡರು, ಸ್ವಸಹಾಯ ಸಂಘಗಳು ಹಾಗೂ ವಿವಿಧ ಸಂಘಟನೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಿದಾಗ ಗ್ರಾಮಗಳ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಗ್ರಾಮಾಭಿವೃದ್ಧಿ ಸಮಿತಿಗಳು ಕೇವಲ ಸಭೆಗಳನ್ನು ನಡೆಸುವುದಕ್ಕೆ ಸೀಮಿತವಾಗದೆ, ಗ್ರಾಮಗಳ ಮೂಲಭೂತ ಅಗತ್ಯಗಳನ್ನು ಗುರುತಿಸಿ ಅವುಗಳ ಈಡೇರಿಕೆಗೆ ಸಂಬಂಧಿಸಿದ ಇಲಾಖೆಗಳೊಂದಿಗೆ ನಿರಂತರ ಸಂಪರ್ಕ ಹೊಂದಿರಬೇಕು. ಸಾರ್ವಜನಿಕರ ಸಹಭಾಗಿತ್ವದಿಂದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಾಗ ಉತ್ತಮ ಫಲಿತಾಂಶ ದೊರೆಯುತ್ತದೆ ಎಂದು ತಿಳಿಸಿದರು.
ಫಾ. ಸಿಪ್ರಿಯನ್ ಟೆಲ್ಲಿಸ್ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡಲು ಗ್ರಾಮಸ್ಥರು ಸಂಘಟಿತರಾಗಬೇಕು. ತಮ್ಮ ಹಕ್ಕುಗಳು ಹಾಗೂ ಗ್ರಾಮಗಳ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಪ್ರಯತ್ನಿಸುವುದು ಅಗತ್ಯವಾಗಿದೆ. ಈ ಉದ್ದೇಶದಿಂದ ಪ್ರತಿಯೊಂದು ಗ್ರಾಮದಲ್ಲಿಯೂ ಗ್ರಾಮಾಭಿವೃದ್ಧಿ ಸಮಿತಿಗಳನ್ನು ರಚಿಸಿಕೊಂಡು ಜನಪರ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.
ಕಾರ್ಯಾಗಾರದಲ್ಲಿ ಗ್ರಾಮಾಭಿವೃದ್ಧಿ ಸಮಿತಿಗಳ ರಚನೆ, ಪದಾಧಿಕಾರಿಗಳ ಆಯ್ಕೆ, ಜವಾಬ್ದಾರಿಗಳು ಹಾಗೂ ಸಮುದಾಯದ ಸಹಭಾಗಿತ್ವದ ಕುರಿತು ಪ್ರತಿನಿಧಿಗಳಿಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಲೊಯೋಲ ಸಮಾಜ ಸೇವಾ ಕೇಂದ್ರದ ಸಿಬ್ಬಂದಿ, ವಿವಿಧ ಗ್ರಾಮಗಳ ಸ್ವಸಹಾಯ ಸಂಘಗಳ ಪ್ರತಿನಿಧಿಗಳು, ಗ್ರಾಮೀಣ ಮುಖಂಡರು ಹಾಗೂ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು.



