ಮಾನ್ವಿ: ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು ಗುಣಮಟ್ಟದ ಕಲಿಕೆಗೆ ಶಿಕ್ಷಕರ ಪರಿಶ್ರಮದ ಜತೆಗೆ ಪಾಲಕರ ಸಹಕಾರವೂ ಅತ್ಯಂತ ಅಗತ್ಯವಾಗಿದೆ. ಮನೆಯಲ್ಲಿ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವ ಮೂಲಕ ಅವರ ಭವಿಷ್ಯ ರೂಪಿಸಲು ಪಾಲಕರು ಹೆಚ್ಚಿನ ಗಮನ ಹರಿಸಬೇಕು ಎಂದು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಾರ್ಡನ್ ಹಾಗೂ ಕಲ್ಮಠ ವಿದ್ಯಾಸಂಸ್ಥೆಯ ಹಳೆಯ ವಿದ್ಯಾರ್ಥಿ ಪಿ. ಕೋಮಲ್ ಹೇಳಿದರು.
ಪಟ್ಟಣದ ಕಲ್ಮಠ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ‘ಸಮುದಾಯದತ್ತ ಶಾಲಾ’ ಕಾರ್ಯಕ್ರಮದ ಅಂಗವಾಗಿ ನಡೆದ ಪಾಲಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಬಳಕೆ ಹಾಗೂ ಆನ್ಲೈನ್ ಆಟಗಳತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಅವರ ಕಲಿಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ ಪಾಲಕರು ಮಕ್ಕಳ ಮೊಬೈಲ್ ಬಳಕೆಯ ಮೇಲೆ ನಿಗಾ ವಹಿಸಿ, ಓದು ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು. ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಎಂಬ ಸಂದೇಶವನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗಬಾರದು. ಮಕ್ಕಳಲ್ಲಿ ಉತ್ತಮ ನಡವಳಿಕೆ, ಶಿಸ್ತು, ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಕೂಡ ಮುಖ್ಯವಾಗಿದೆ. ಶಿಕ್ಷಕರು ಶಾಲೆಯಲ್ಲಿ ನೀಡುವ ಮಾರ್ಗದರ್ಶನಕ್ಕೆ ಮನೆಯಲ್ಲಿ ಪಾಲಕರು ಪೂರಕವಾಗಿ ಸ್ಪಂದಿಸಿದಾಗ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಲ್ಮಠ ಪ್ರೌಢಶಾಲೆಯ ಮುಖ್ಯಗುರು ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮದ ಮಾರ್ಗದರ್ಶಿ ಶಿಕ್ಷಕ ಪ್ರಭಯ್ಯಸ್ವಾಮಿ ಮಾತನಾಡಿ, ಮಕ್ಕಳಲ್ಲಿ ಶಿಸ್ತು, ಪ್ರಾಮಾಣಿಕತೆ ಮತ್ತು ಉತ್ತಮ ಸಂಸ್ಕಾರಗಳನ್ನು ಬೆಳೆಸುವಲ್ಲಿ ಪಾಲಕರ ಪಾತ್ರ ಮಹತ್ವದ್ದಾಗಿದೆ. ಮಕ್ಕಳೊಂದಿಗೆ ಆತ್ಮೀಯವಾಗಿ ಬೆರೆತು ಅವರ ಆಸಕ್ತಿ, ಸಾಮರ್ಥ್ಯ ಹಾಗೂ ಸಮಸ್ಯೆಗಳನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಪಾಲಕರಿಗಾಗಿ ವಿವಿಧ ಮನರಂಜನಾತ್ಮಕ ಹಾಗೂ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಮ್ಯೂಸಿಕಲ್ ಚೇರ್ ಆಟದ ಜತೆಗೆ ತಮ್ಮ ಮಕ್ಕಳ ಕೈಬರಹ ಗುರುತಿಸುವುದು, ಮಕ್ಕಳಿಗೆ ಇಷ್ಟವಾದ ತಿಂಡಿ, ಬಣ್ಣ ಹಾಗೂ ನೆಚ್ಚಿನ ವಿಷಯಗಳನ್ನು ತಿಳಿಸುವಂತಹ ಚಟುವಟಿಕೆಗಳನ್ನು ನಡೆಸಲಾಯಿತು.
ಮಕ್ಕಳು ಮತ್ತು ಪಾಲಕರಿಗೆ ಪ್ರತ್ಯೇಕವಾಗಿ ಪ್ರಶ್ನೆಗಳನ್ನು ಕೇಳುವ ಮೂಲಕ ಪಾಲಕರು ತಮ್ಮ ಮಕ್ಕಳ ಅಭಿರುಚಿ ಹಾಗೂ ಆಸಕ್ತಿಗಳನ್ನು ಎಷ್ಟರಮಟ್ಟಿಗೆ ಅರ್ಥಮಾಡಿಕೊಂಡಿದ್ದಾರೆ ಎಂಬುದನ್ನು ತಿಳಿಸುವ ಪ್ರಯತ್ನ ಮಾಡಲಾಯಿತು. ಈ ಚಟುವಟಿಕೆಗಳು ಪಾಲಕರಲ್ಲಿ ಮಕ್ಕಳೊಂದಿಗೆ ಹೆಚ್ಚಿನ ಸಮಯ ಕಳೆಯುವ ಮತ್ತು ಅವರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಅಗತ್ಯದ ಕುರಿತು ಅರಿವು ಮೂಡಿಸಿದವು.
ವಿವಿಧ ಸ್ಪರ್ಧೆಗಳಲ್ಲಿ ಪಾಲಕರಾದ ಲಕ್ಷ್ಮಿ, ಪಾರ್ವತಿ, ಮಾಧವಿ, ಸಿರಿನ್ ರಿಜ್ವಾನ್ ಬೇಗಂ, ಸರೋಜಾ, ಮಹದೇವ್, ಶಿವಜ್ಞಾನಿ, ಹಬೀಬ್, ಲಕ್ಷ್ಮಣ್ ಸೇರಿದಂತೆ ಹಲವರು ಉತ್ಸಾಹದಿಂದ ಭಾಗವಹಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ಪಾಲಕರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲ್ಮಠ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಮಂಜುನಾಥ ಕಮತರ ಮಾತನಾಡಿ, ಮಕ್ಕಳ ಶೈಕ್ಷಣಿಕ ಸಾಧನೆ ಉತ್ತಮಗೊಳ್ಳಲು ಶಾಲೆ ಮತ್ತು ಪಾಲಕರ ನಡುವೆ ನಿರಂತರ ಸಂಪರ್ಕ ಹಾಗೂ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ಶಿಕ್ಷಕರಾದ ಕೇಮ್ಯಾನಾಯ್ಕ, ಜಯಶ್ರೀ, ಶಾಲಾ ಸಂಸತ್ತಿನ ವಿದ್ಯಾರ್ಥಿ ಪ್ರತಿನಿಧಿಗಳಾದ ಅನಿಲ್, ಚೈತನ್ಯ, ಫಾರಾನ್, ಐಂದ್ರಿತಾ, ಸೌಜನ್ಯ, ಶಿಕ್ಷಕರಾದ ಪವಿತ್ರ, ಸೌಮ್ಯ, ರವಿ ಹುಲಿಯಾಪುರ ಹಾಗೂ ವಿದ್ಯಾರ್ಥಿಗಳು ಮತ್ತು ಪಾಲಕರು ಉಪಸ್ಥಿತರಿದ್ದರು.
ರೂಪ ಕಾರ್ಯಕ್ರಮ ನಿರೂಪಿಸಿದರು. ಮಹಾಂತಮ್ಮ ಸ್ವಾಗತಿಸಿದರು. ರಿಜ್ವಾನ್ ಬೇಗಂ ವಂದಿಸಿದರು.



