ರಾಯಚೂರು, ಅ.29: ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜತೆಗೆ ಸಮಾಜ ಸೇವೆ, ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು. ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಬೂದೆಪ್ಪ ಹೇಳಿದರು.
ನಗರದ ಬಹೇರೂನ್ ಖಿಲ್ಲಾ ಪ್ರದೇಶದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವ್ಯಾಪ್ತಿಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ 2026-27ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ (ಎನ್ಎಸ್ಎಸ್) ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನವು ಕೇವಲ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸುವುದಕ್ಕೆ ಸೀಮಿತವಾಗಬಾರದು. ಸಮಾಜದ ಸಮಸ್ಯೆಗಳನ್ನು ಅರಿತು ಅವುಗಳ ಪರಿಹಾರಕ್ಕೆ ಕೈಜೋಡಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಸೇವಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು, ಸಹಕಾರ ಮನೋಭಾವ ಹಾಗೂ ಸಾಮಾಜಿಕ ಕಳಕಳಿಯನ್ನು ಮೂಡಿಸುತ್ತವೆ ಎಂದು ತಿಳಿಸಿದರು.
ವಿಶೇಷವಾಗಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ವಚ್ಛತೆ, ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು. ರಾಷ್ಟ್ರೀಯ ಸೇವಾ ಯೋಜನೆಯಂತಹ ಶಿಬಿರಗಳು ಯುವಜನರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಲು ಸಹಕಾರಿಯಾಗುತ್ತವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ರವೀಂದ್ರ ಎಸ್. ಬಂಡಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ ಗುಣ, ಸೇವಾ ಮನೋಭಾವ ಹಾಗೂ ಭಾವೈಕ್ಯತೆಯನ್ನು ಬೆಳೆಸುವ ಪ್ರಮುಖ ವೇದಿಕೆಯಾಗಿದೆ. ಶಿಬಿರದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ತಂಡವಾಗಿ ಕಾರ್ಯನಿರ್ವಹಿಸುವುದನ್ನು ಕಲಿಯುವುದರ ಜತೆಗೆ ಸಮಾಜದ ವಿವಿಧ ವರ್ಗಗಳ ಜನರೊಂದಿಗೆ ಬೆರೆಯುವ ಅವಕಾಶ ಪಡೆಯುತ್ತಾರೆ ಎಂದು ಹೇಳಿದರು.
ಶಿಕ್ಷಣದೊಂದಿಗೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಜವಾಬ್ದಾರಿಯ ಪ್ರಜ್ಞೆ ಹೆಚ್ಚುತ್ತದೆ. ಶಿಬಿರದ ಅವಧಿಯಲ್ಲಿ ನಡೆಯುವ ಚಟುವಟಿಕೆಗಳಲ್ಲಿ ಸ್ವಯಂಸೇವಕರು ಉತ್ಸಾಹದಿಂದ ಪಾಲ್ಗೊಂಡು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಮಹಿಬೂಬ ಸಾಬ್ ಪ್ರಾಸ್ತಾವಿಕವಾಗಿ ಮಾತನಾಡಿ, ವಾರ್ಷಿಕ ವಿಶೇಷ ಶಿಬಿರದ ಉದ್ದೇಶ, ಕಾರ್ಯಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳ ಸಾಮಾಜಿಕ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಗೋವರ್ಧನ ರೆಡ್ಡಿ, ರೂತ್ ನಳಿನಿ, ಪದ್ಮಾವತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಉಪಸ್ಥಿತರಿದ್ದರು.
ಉಪನ್ಯಾಸಕ ಮಹಮ್ಮದ್ ಖಾಜಾ ಸ್ವಾಗತಿಸಿದರು. ಉಪನ್ಯಾಸಕ ವೆಂಕನಗೌಡ ವಂದಿಸಿದರು.



