ಲಿಂಗಸುಗೂರು: ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ತಜ್ಞ ವೈದ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲೂಕು ಘಟಕ ನಡೆಸಿದ್ದ ಹೋರಾಟಕ್ಕೆ ಸ್ಪಂದನೆ ದೊರೆತಿದ್ದು, ಚರ್ಮರೋಗ ತಜ್ಞ ಡಾ. ಮಲ್ಲೇಶ ಅವರನ್ನು ನೇಮಕ ಮಾಡಲಾಗಿದೆ.

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ನಿವಾರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲೂಕು ಘಟಕದ ಪದಾಧಿಕಾರಿಗಳು ಸೆಪ್ಟೆಂಬರ್ 7ರಂದು ಪ್ರತಿಭಟನೆ ನಡೆಸಿದ್ದರು.

ಈ ಸಂದರ್ಭದಲ್ಲಿ ಭಾರತ ಸರ್ಕಾರದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ವಾಣಿಜ್ಯ ಇಲಾಖೆಯ ಜಂಟಿ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿ, ಆಸ್ಪತ್ರೆಗೆ ಅಗತ್ಯವಿರುವ ತಜ್ಞ ವೈದ್ಯರನ್ನು ನೇಮಕ ಮಾಡುವಂತೆ ಒತ್ತಾಯಿಸಲಾಗಿತ್ತು.

ಸಂಘಟನೆಯ ಮನವಿಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಚರ್ಮರೋಗ ತಜ್ಞ ಡಾ. ಮಲ್ಲೇಶ ಅವರನ್ನು ನೇಮಕ ಮಾಡಲಾಗಿದ್ದು, ಅವರು ಕರ್ತವ್ಯಕ್ಕೆ ಹಾಜರಾಗಿ ಸೇವೆ ಆರಂಭಿಸಿದ್ದಾರೆ ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

ತಜ್ಞ ವೈದ್ಯರ ನೇಮಕಕ್ಕೆ ಸ್ಪಂದಿಸಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ವಾಣಿಜ್ಯ ಇಲಾಖೆಯ ಜಂಟಿ ಕಾರ್ಯದರ್ಶಿಗಳು ಹಾಗೂ ಲಿಂಗಸುಗೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲೂಕು ಘಟಕದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಇದೇ ವೇಳೆ ಮಾತನಾಡಿದ ಸಂಘಟನೆಯ ಪದಾಧಿಕಾರಿಗಳು, ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಚರ್ಮರೋಗ ತಜ್ಞರ ನೇಮಕವಾಗಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಆದರೆ ಆಸ್ಪತ್ರೆಯಲ್ಲಿ ಇನ್ನೂ ಕೆಲವು ತಜ್ಞ ವೈದ್ಯರ ಅಗತ್ಯವಿದ್ದು, ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ದೊರೆಯುವಂತಾಗಬೇಕು. ವಿಶೇಷವಾಗಿ ಕಿವಿ, ಮೂಗು ಮತ್ತು ಗಂಟಲು ತಜ್ಞರನ್ನು ಆದಷ್ಟು ಶೀಘ್ರ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲೂಕು ಘಟಕದ ಅಧ್ಯಕ್ಷ ಜಿಲಾನಿ ಪಾಷಾ, ರವಿಕುಮಾರ ಬರಗುಡಿ, ಅಜೀಜ್ ಪಾಷಾ, ಬಾಬಾ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.