ಲಿಂಗಸುಗೂರು: ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ, ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ರಾಜ್ಯೋತ್ಸವ ಮೆರವಣಿಗೆ ಹಾಗೂ ಅಧಿಕೃತ ಕಾರ್ಯಕ್ರಮಗಳಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸಹಾಯಕ ಆಯುಕ್ತ ನಾಗೇಂದ್ರಬಾಬು ಕುಮಾರ ಸೂಚಿಸಿದರು.
ಪಟ್ಟಣದ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದ ಅವರು, ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮಹತ್ವವನ್ನು ಸಾರುವ ರಾಜ್ಯೋತ್ಸವ ಕಾರ್ಯಕ್ರಮವನ್ನು ಎಲ್ಲರ ಸಹಕಾರದೊಂದಿಗೆ ಯಶಸ್ವಿಯಾಗಿ ಆಯೋಜಿಸಬೇಕು ಎಂದು ತಿಳಿಸಿದರು.
ನವೆಂಬರ್ 1ರಂದು ಬೆಳಿಗ್ಗೆ 8 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ರಾಜ್ಯೋತ್ಸವ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಬಳಿಕ ಬೆಳಿಗ್ಗೆ 9 ಗಂಟೆಗೆ ತಾಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅಧಿಕೃತ ರಾಜ್ಯೋತ್ಸವ ಕಾರ್ಯಕ್ರಮ ನಡೆಸಲಾಗುವುದು ಎಂದು ವಿವರಿಸಿದರು.
ರಾಜ್ಯೋತ್ಸವ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು. ಕಾರ್ಯಕ್ರಮದ ಯಶಸ್ಸಿಗೆ ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯ ಸಾಧಿಸಿ ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಕನ್ನಡ ಭಾಷೆ, ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ಕೊಡುಗೆ ನೀಡಿರುವ ಬರಹಗಾರರು, ಸಾಹಿತಿಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಗುವುದು. ಕನ್ನಡಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ತಹಶೀಲ್ದಾರ್ ಸತ್ಯಮ್ಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಕನ್ನಡಪರ ಸಂಘಟನೆಗಳ ಮುಖಂಡರಾದ ಜಿಲಾನಿ ಪಾಷಾ, ಮಾದೇಶ ಸರ್ಜಾಪುರ, ಬಾಲನಗೌಡ ಪಾಟೀಲ್, ಅಬಕಾರಿ ಇನ್ಸ್ಪೆಕ್ಟರ್ ಲಕ್ಷ್ಮೀದೇವಿ, ಎಪಿಎಂಸಿ ಕಾರ್ಯದರ್ಶಿ ನೀಲಪ್ಪ ಶೆಟ್ಟಿ, ಪುರಸಭೆ ವ್ಯವಸ್ಥಾಪಕ ಹನುಮಂತರಾಯ ನಾಯಕ, ಪಶುವೈದ್ಯಾಧಿಕಾರಿ ಅಮರೇಗೌಡ, ದೈಹಿಕ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ, ಕಂದಾಯ ನಿರೀಕ್ಷಕ ರಾಮಕೃಷ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.



