ಬೆಂಗಳೂರು, ಅ. 31: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಜನಕಲ್ಯಾಣ ಯೋಜನೆಗಳು, ಸೌಲಭ್ಯಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲು ಡಿಜಿಟಲ್ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಚಂಚಲ್ ಕುಮಾರ್ ತಿಳಿಸಿದರು.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳ ಮಾಹಿತಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಆಧುನಿಕ ಸಂವಹನ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದ ಮಾಧ್ಯಮ ಮತ್ತು ಮನರಂಜನಾ ಕ್ಷೇತ್ರದ ಅಭಿವೃದ್ಧಿ, ಆಡಳಿತಾತ್ಮಕ ಸಾಮರ್ಥ್ಯ ವೃದ್ಧಿ, ಉದ್ಯಮ ಸ್ನೇಹಿ ವಾತಾವರಣ ನಿರ್ಮಾಣ ಹಾಗೂ ಸೃಜನಶೀಲ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ಕಲ್ಪಿಸುವ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು.

2027ರಲ್ಲಿ ನಡೆಯಲಿರುವ ವಿಶ್ವ ಶ್ರವ್ಯ-ದೃಶ್ಯ ಮತ್ತು ಮನರಂಜನಾ ಶೃಂಗಸಭೆ (ವೇವ್ಸ್–2027)ಯಲ್ಲಿ ಕರ್ನಾಟಕದ ಸಕ್ರಿಯ ಪಾಲ್ಗೊಳ್ಳುವಿಕೆಗೆ ವಿಶೇಷ ಒತ್ತು ನೀಡಲಾಯಿತು. ರಾಜ್ಯದ ಮಾಧ್ಯಮ ಮತ್ತು ಮನರಂಜನಾ ಉದ್ಯಮಗಳ ಸಾಮರ್ಥ್ಯ, ಸ್ಥಳೀಯ ಪ್ರತಿಭೆಗಳು, ಸಾಂಸ್ಕೃತಿಕ ವೈವಿಧ್ಯತೆ ಹಾಗೂ ಹೂಡಿಕೆ ಅವಕಾಶಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಲು ಪ್ರತ್ಯೇಕ ಕರ್ನಾಟಕ ಪೆವಿಲಿಯನ್ ಸ್ಥಾಪಿಸುವ ಕುರಿತು ಚರ್ಚಿಸಲಾಯಿತು.

ಅಲ್ಲದೆ, ‘ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜಸ್–ಸೀಸನ್ 2’ ಸ್ಪರ್ಧೆಯಲ್ಲಿ ರಾಜ್ಯದ ವಿದ್ಯಾರ್ಥಿಗಳು, ಯುವ ಪ್ರತಿಭೆಗಳು ಹಾಗೂ ಸೃಜನಶೀಲ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುವುದು ಮತ್ತು ವೇವ್ಸ್ ಶೃಂಗಸಭೆಯಲ್ಲಿ ಕರ್ನಾಟಕದ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಯಿತು.

ಮಾಧ್ಯಮ ಮತ್ತು ಮನರಂಜನಾ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕದ ನವೋದ್ಯಮಗಳಿಗೆ ಹೊಸ ಮಾರುಕಟ್ಟೆಗಳನ್ನು ಪರಿಚಯಿಸುವ ಉದ್ದೇಶದಿಂದ ವೇವ್ ಎಕ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗತ್ಯ ನೆರವು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲಾಯಿತು. ಇದೇ ವೇಳೆ ವೇವ್ಸ್ ಬಜಾರ್ ಮೂಲಕ ವಿಷಯ ನಿರ್ಮಾಪಕರು, ಚಲನಚಿತ್ರ ನಿರ್ಮಾಣ ಸಂಸ್ಥೆಗಳು, ಸ್ಟುಡಿಯೋಗಳು, ಖರೀದಿದಾರರು ಹಾಗೂ ವಿತರಕರ ನಡುವೆ ವಾಣಿಜ್ಯ ಸಂಪರ್ಕ ಬೆಳೆಸಲು ಅನುಕೂಲ ಕಲ್ಪಿಸುವ ಕುರಿತು ಚರ್ಚಿಸಲಾಯಿತು.

ಸರ್ಕಾರದ ಮಾಹಿತಿ ಪ್ರಸಾರ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಗೆ ವಿಶೇಷ ತರಬೇತಿ ನೀಡುವ ಅಗತ್ಯವನ್ನೂ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಭಾರತೀಯ ಸಮೂಹ ಸಂವಹನ ಸಂಸ್ಥೆ (ಐಐಎಂಸಿ) ಸಹಯೋಗದಲ್ಲಿ ಅಧಿಕಾರಿಗಳಿಗೆ ಆಧುನಿಕ ಮಾಧ್ಯಮ ನಿರ್ವಹಣೆ, ಸಾರ್ವಜನಿಕ ಸಂವಹನ ಹಾಗೂ ಡಿಜಿಟಲ್ ಮಾಹಿತಿ ಪ್ರಸಾರಕ್ಕೆ ಸಂಬಂಧಿಸಿದ ವ್ಯವಸ್ಥಿತ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಯಿತು.

ಪತ್ರಿಕಾ ಮತ್ತು ನಿಯತಕಾಲಿಕಗಳ ನೋಂದಣಿ ಕಾಯ್ದೆ–2023ರ ಅನುಷ್ಠಾನದ ಭಾಗವಾಗಿ ಪತ್ರಿಕೆಗಳ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವುದು ಹಾಗೂ ಪ್ರೆಸ್ ಸೇವಾ ಪೋರ್ಟಲ್ ಮೂಲಕ ಸಲ್ಲಿಕೆಯಾಗುವ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡುವ ಮೂಲಕ ಡಿಜಿಟಲ್ ವ್ಯವಸ್ಥೆಗೆ ಪರಿವರ್ತನೆಯ ಕಾರ್ಯವನ್ನು ಚುರುಕುಗೊಳಿಸುವ ಅಗತ್ಯವನ್ನು ಒತ್ತಿಹೇಳಲಾಯಿತು.

ಪ್ರಾದೇಶಿಕ ಭಾಷೆಯ ಚಲನಚಿತ್ರಗಳಿಗೆ ಹೆಚ್ಚಿನ ಪ್ರೇಕ್ಷಕರನ್ನು ತಲುಪುವ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸಣ್ಣ ನಗರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ವೆಚ್ಚದ ಚಿತ್ರಮಂದಿರಗಳ ಸ್ಥಾಪನೆಗೆ ಉತ್ತೇಜನ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದರೊಂದಿಗೆ ಕೇಬಲ್ ಆಪರೇಟರ್‌ಗಳಿಗೆ ಅಗತ್ಯವಿರುವ ಮೂಲಸೌಕರ್ಯ ಅನುಮತಿಗಳನ್ನು ಪಾರದರ್ಶಕವಾಗಿ ಮತ್ತು ಕಾಲಮಿತಿಯೊಳಗೆ ಒದಗಿಸಲು ‘ರೈಟ್ ಆಫ್ ವೇ’ ವ್ಯವಸ್ಥೆಯನ್ನು ರೂಪಿಸುವ ವಿಷಯವೂ ಪ್ರಸ್ತಾಪವಾಯಿತು.

ಇದೇ ಸಂದರ್ಭದಲ್ಲಿ ಬೆಂಗಳೂರಿನ ಆಕಾಶವಾಣಿ ಕೇಂದ್ರದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ವ್ಯಾಪ್ತಿಗೆ ಒಳಪಡುವ ವಿವಿಧ ಮಾಧ್ಯಮ ಘಟಕಗಳ ಮುಖ್ಯಸ್ಥರೊಂದಿಗೆ ಚಂಚಲ್ ಕುಮಾರ್ ಸಭೆ ನಡೆಸಿ, ಇಲಾಖೆಗಳ ಕಾರ್ಯಚಟುವಟಿಕೆಗಳು ಹಾಗೂ ಮಾಹಿತಿ ಪ್ರಸಾರ ವ್ಯವಸ್ಥೆಯ ಕುರಿತು ವಿಚಾರ ವಿನಿಮಯ ನಡೆಸಿದರು.

ಸಭೆಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಜಂಟಿ ಕಾರ್ಯದರ್ಶಿ ಕೃಷ್ಣ ಕುಮಾರ್ ನಿರಾಲಾ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.