ಸಿಂಧನೂರು: ತಾಲೂಕಿನ ಉಮಲೂಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಕ್ಕನಹಟ್ಟಿ ಗ್ರಾಮದಲ್ಲಿ ಕಳೆದ ಒಂದೂವರೆ ವರ್ಷದಿಂದ ಎರಡು ವರ್ಷಗಳವರೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಶನಿವಾರ ಕೊಡ, ಬಿಂದಿಗೆ ಹಿಡಿದು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮದ ಅರ್ಧದಷ್ಟು ಜನರಿಗೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಬೀದಿ ದೀಪಗಳ ಕೊರತೆಯಿಂದಲೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಮೂಲಸೌಕರ್ಯಗಳ ಸಮಸ್ಯೆಗಳನ್ನು ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಬುಕ್ಕನಹಟ್ಟಿ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ವರ್ಷಗಳೇ ಕಳೆದಿದ್ದರೂ ಇದುವರೆಗೆ ದುರಸ್ತಿಗೆ ಕ್ರಮ ಕೈಗೊಂಡಿಲ್ಲ. ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕಾದ ಅಧಿಕಾರಿಗಳು ಸಮಸ್ಯೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

ಗ್ರಾಮದಲ್ಲಿ ಜಲಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಪೈಪ್‌ಲೈನ್ ಅಳವಡಿಸಿದ್ದರೂ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುವಂತಾಗಿದ್ದು, ದಿನನಿತ್ಯದ ಅಗತ್ಯಗಳಿಗೂ ನೀರಿನ ಕೊರತೆ ಎದುರಾಗಿದೆ ಎಂದು ಅಳಲು ತೋಡಿಕೊಂಡರು.

ಈ ಹಿಂದೆ ಗ್ರಾಮದ ಪಕ್ಕದ ಜಮೀನಿನಿಂದ ನೀರು ಪೂರೈಸಲು ಪ್ರಯತ್ನಿಸಲಾಗಿತ್ತು. ಆದರೆ ಅದರಿಂದ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ. ಗ್ರಾಮದ ಅರ್ಧದಷ್ಟು ಪ್ರದೇಶಕ್ಕೆ ಇನ್ನೂ ಸರಿಯಾಗಿ ನೀರು ತಲುಪುತ್ತಿಲ್ಲ. ಜನರಿಗೇ ಕುಡಿಯಲು ನೀರಿಲ್ಲದ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ನೀರು ಒದಗಿಸುವುದಾದರೂ ಹೇಗೆ ಎಂದು ಗ್ರಾಮಸ್ಥರು ಪ್ರಶ್ನಿಸಿದರು.

ಕುಡಿಯುವ ನೀರಿನ ಸಮಸ್ಯೆ ಕುರಿತು ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಾಶ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಕಾರ್ಯವೈಖರಿಯನ್ನು ಖಂಡಿಸಿದರು.

ಪ್ರತಿಭಟನೆಯ ಮಾಹಿತಿ ತಿಳಿದು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಯಂಕಪ್ಪ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹಾಂತೇಶ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು.

ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೂಡಲೇ ದುರಸ್ತಿಗೊಳಿಸಬೇಕು. ಜೆಜೆಎಂ ಪೈಪ್‌ಲೈನ್ ಮೂಲಕ ಎಲ್ಲ ಮನೆಗಳಿಗೆ ಸಮರ್ಪಕ ನೀರು ಪೂರೈಸಬೇಕು. ಜತೆಗೆ ಬೀದಿ ದೀಪಗಳ ಸಮಸ್ಯೆಯನ್ನೂ ಪರಿಹರಿಸಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.