ರಾಯಚೂರು: ಸ್ವಾತಂತ್ರ್ಯಾನಂತರ ದೇಶದ ವಿವಿಧ ಸಂಸ್ಥಾನಗಳನ್ನು ಭಾರತದ ಒಕ್ಕೂಟಕ್ಕೆ ಸೇರ್ಪಡೆಗೊಳಿಸುವ ಮೂಲಕ ರಾಷ್ಟ್ರದ ಏಕೀಕರಣ, ಐಕ್ಯತೆ ಮತ್ತು ಅಖಂಡತೆ ಸಾಧಿಸುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಅಪ್ರತಿಮ ಕೊಡುಗೆ ನೀಡಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಗುಣಾ ಬಸವರಾಜ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವತಿಯಿಂದ ಆಯೋಜಿಸಿದ್ದ ಭಾರತದ ಉಕ್ಕಿನ ಮನುಷ್ಯ ಹಾಗೂ ಸ್ವತಂತ್ರ ಭಾರತದ ಪ್ರಥಮ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 151ನೇ ಜಯಂತಿ ಅಂಗವಾಗಿ ರಾಷ್ಟ್ರೀಯ ಏಕತಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಆರಂಭದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು.
ಸರ್ದಾರ್ ಪಟೇಲ್ ಅವರು ದೇಶದ ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹಾನ್ ನಾಯಕರು. ಸ್ವಾತಂತ್ರ್ಯಾನಂತರ ವಿಭಜನೆಯ ಸವಾಲುಗಳ ನಡುವೆಯೂ ವಿವಿಧ ಸಂಸ್ಥಾನಗಳನ್ನು ಒಗ್ಗೂಡಿಸಿ ಏಕೀಕೃತ ಭಾರತ ನಿರ್ಮಾಣಕ್ಕೆ ಶ್ರಮಿಸಿದರು. ಅವರ ದೃಢನಿರ್ಧಾರ, ಆಡಳಿತಾತ್ಮಕ ಸಾಮರ್ಥ್ಯ, ನಾಯಕತ್ವ ಗುಣ ಹಾಗೂ ದೇಶಪ್ರೇಮ ಇಂದಿನ ಯುವಜನತೆಗೆ ಆದರ್ಶವಾಗಬೇಕು ಎಂದು ಡಾ. ಸುಗುಣಾ ಬಸವರಾಜ್ ತಿಳಿಸಿದರು.
ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ. ಸಂತೋಷಕುಮಾರ ರೇವೂರ ಮಾತನಾಡಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೂರದೃಷ್ಟಿ ಮತ್ತು ದೃಢನಿರ್ಧಾರದ ಮನೋಬಲ ಇಂದಿನ ಯುವ ಸಮುದಾಯಕ್ಕೆ ಮಾರ್ಗದರ್ಶಕವಾಗಬೇಕು. ದೇಶದ ಏಕತೆ, ಭದ್ರತೆ ಹಾಗೂ ಸಮಗ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದ ಸಾಂಸ್ಕೃತಿಕ ಮತ್ತು ಸಾಮಾಜಿಕ ಪರಂಪರೆಯನ್ನು ಉಳಿಸಿಕೊಳ್ಳಲು ಯುವಜನತೆ ಮುಂದಾಗಬೇಕು. ಜಾತಿ, ಧರ್ಮ, ಭಾಷೆ ಹಾಗೂ ಪ್ರಾದೇಶಿಕ ಭಿನ್ನತೆಗಳನ್ನು ಮೀರಿ ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸಿಕೊಳ್ಳಬೇಕು. ಸರ್ದಾರ್ ಪಟೇಲರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಸರ್ದಾರ್ ಪಟೇಲ್ ಅವರ ಆಶಯದಂತೆ ದೇಶದ ಏಕತೆ, ಅಖಂಡತೆ ಮತ್ತು ಭದ್ರತೆಯನ್ನು ಕಾಪಾಡುವ ಕುರಿತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಡಾ. ಸಂತೋಷಕುಮಾರ ರೇವೂರ ರಾಷ್ಟ್ರೀಯ ಏಕತಾ ಪ್ರತಿಜ್ಞಾವಿಧಿ ಬೋಧಿಸಿದರು.
ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವು ವಿದ್ಯಾರ್ಥಿನಿಯರಲ್ಲಿ ದೇಶಪ್ರೇಮ, ರಾಷ್ಟ್ರೀಯ ಭಾವೈಕ್ಯತೆ, ಸಾಮಾಜಿಕ ಸಾಮರಸ್ಯ ಹಾಗೂ ಏಕತೆಯ ಮನೋಭಾವ ಬೆಳೆಸುವ ಉದ್ದೇಶ ಹೊಂದಿತ್ತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.



