ರಾಯಚೂರು, ನ.1: ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅಭಿಮಾನ ಮೂಡಿಸುವ ಉದ್ದೇಶದಿಂದ ಹಾಷ್ಮೀಯಾದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಆಂಗ್ಲ ಮಾಧ್ಯಮ ಶಾಲೆಗಳ ಸಂಯುಕ್ತಾಶ್ರಯದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ಮೂರು ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಒಗ್ಗೂಡಿ ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಭಾಷಾಭಿಮಾನ, ಸೌಹಾರ್ದತೆ ಮತ್ತು ಏಕತೆಯ ಸಂದೇಶ ಸಾರಿದರು.

ಈ ಸಂದರ್ಭದಲ್ಲಿ ಮಾತನಾಡಿದ ದೈಹಿಕ ಶಿಕ್ಷಣ ಶಿಕ್ಷಕ ಇಸ್ಮಾಯಿಲ್, ಕನ್ನಡ ಭಾಷೆಯು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಸಮೃದ್ಧ ಭಾಷೆಯಾಗಿದ್ದು, ಕರ್ನಾಟಕದ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಹೇಳಿದರು.

ಕರ್ನಾಟಕ ಏಕೀಕರಣದ ಇತಿಹಾಸವನ್ನು ವಿವರಿಸಿದ ಅವರು, ವಿವಿಧ ಪ್ರಾಂತ್ಯಗಳಲ್ಲಿ ಹಂಚಿಹೋಗಿದ್ದ ಕನ್ನಡ ಭಾಷಿಕ ಪ್ರದೇಶಗಳನ್ನು ಒಗ್ಗೂಡಿಸಲು ಅನೇಕ ಮಹನೀಯರು ಹೋರಾಟ ನಡೆಸಿದ್ದರು. ಅವರ ಪರಿಶ್ರಮದ ಫಲವಾಗಿ 1956ರ ನವೆಂಬರ್ 1ರಂದು ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂದಿತು. ನಂತರ 1973ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಈ ಐತಿಹಾಸಿಕ ದಿನವನ್ನು ಪ್ರತಿವರ್ಷ ಕನ್ನಡ ರಾಜ್ಯೋತ್ಸವವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಕನ್ನಡ ಭಾಷೆಯ ಬಗ್ಗೆ ಅಭಿಮಾನ ಹೊಂದುವುದರ ಜೊತೆಗೆ ಇತರ ಭಾಷೆಗಳನ್ನು ಗೌರವಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಭಾಷೆಯು ಜನರನ್ನು ಒಗ್ಗೂಡಿಸುವ ಸಾಧನವಾಗಬೇಕೇ ಹೊರತು ವಿಭಜಿಸುವ ಕಾರಣವಾಗಬಾರದು. ಕನ್ನಡವನ್ನು ದೈನಂದಿನ ಜೀವನದಲ್ಲಿ ಬಳಸುವ ಮೂಲಕ ಅದರ ಬೆಳವಣಿಗೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸಂತೋಷ ಮರೆಣ್ಣವರ್, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಖನಿಜ ಫಾತಿಮಾ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ ಅವರು ಕನ್ನಡ ನಾಡಿನ ಹಿರಿಮೆ ಮತ್ತು ಭಾಷೆಯ ಮಹತ್ವವನ್ನು ಸ್ಮರಿಸಿದರು.

ಮೂರು ಶಾಲೆಗಳ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡರು. ವಿಭಿನ್ನ ಬೋಧನಾ ಮಾಧ್ಯಮಗಳ ಶಾಲೆಗಳು ಒಂದೇ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿದ್ದು ಭಾಷಾ ಸೌಹಾರ್ದತೆ ಮತ್ತು ಪರಸ್ಪರ ಗೌರವದ ಸಂದೇಶಕ್ಕೆ ಸಾಕ್ಷಿಯಾಯಿತು.