ನವದೆಹಲಿ: ವಿವಿಧ ಜಾತಿ, ಧರ್ಮ, ಭಾಷೆ ಹಾಗೂ ಸಂಸ್ಕೃತಿಗಳ ಜನರು ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವದಿಂದ ಬದುಕುತ್ತಿರುವ ಕರ್ನಾಟಕವು ಸರ್ವಜನಾಂಗದ ಶಾಂತಿಯ ತೋಟವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಹೇಳಿದರು.
ನವದೆಹಲಿಯಲ್ಲಿ ನಡೆಯುತ್ತಿರುವ ‘ವೋಟ್ ಬಚಾವ್, ದೇಶ್ ಬಚಾವ್’ ಆಂದೋಲನದಲ್ಲಿ ಭಾಗವಹಿಸಲು ತೆರಳಿರುವ ಅವರು, ದೆಹಲಿಯ ಕರ್ನಾಟಕ ಭವನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ರಾಷ್ಟ್ರಕವಿ ಕುವೆಂಪು ಅವರ ‘ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು’ ಹಾಗೂ ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಎಂಬ ಸಂದೇಶಗಳು ಪ್ರತಿಯೊಬ್ಬ ಕನ್ನಡಿಗನಿಗೂ ಮಾರ್ಗದರ್ಶಕವಾಗಿವೆ. ಕನ್ನಡಿಗರು ಜಗತ್ತಿನ ಯಾವುದೇ ಭಾಗದಲ್ಲಿ ನೆಲೆಸಿದ್ದರೂ ತಮ್ಮ ಮಾತೃಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಮೇಲಿನ ಅಭಿಮಾನವನ್ನು ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.
ಕರ್ನಾಟಕವು ಬಹುಭಾಷೆ, ಬಹುಧರ್ಮ ಹಾಗೂ ವೈವಿಧ್ಯಮಯ ಸಂಸ್ಕೃತಿಗಳ ಸಂಗಮವಾಗಿದ್ದು, ಎಲ್ಲ ಸಮುದಾಯಗಳ ಜನರು ಪರಸ್ಪರ ಗೌರವ ಮತ್ತು ಸಹಬಾಳ್ವೆಯಿಂದ ಜೀವನ ನಡೆಸುತ್ತಿರುವುದು ನಾಡಿನ ವಿಶೇಷತೆಯಾಗಿದೆ. ಜಾತಿ, ಧರ್ಮಗಳ ಭೇದವಿಲ್ಲದೆ ಎಲ್ಲರೂ ಅನ್ಯೋನ್ಯತೆಯಿಂದ ಬದುಕುವುದೇ ಕರ್ನಾಟಕದ ನಿಜವಾದ ಮಾದರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯೊಂದಿಗೆ ಕನ್ನಡವನ್ನು ಕಲಿತು ಮಾತನಾಡುವ ಮೂಲಕ ಭಾಷಾ ಬಾಂಧವ್ಯವನ್ನು ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆಯು ಜನರನ್ನು ಒಗ್ಗೂಡಿಸುವ ಶಕ್ತಿಯಾಗಿದ್ದು, ಭಾಷಾಭಿಮಾನವು ಸಾಮಾಜಿಕ ಸಾಮರಸ್ಯ ಮತ್ತು ಸಹೋದರತ್ವವನ್ನು ಮತ್ತಷ್ಟು ಬಲಪಡಿಸಬೇಕು. ಕನ್ನಡ ರಾಜ್ಯೋತ್ಸವದ ಆಚರಣೆಯ ನಿಜವಾದ ಉದ್ದೇಶವೂ ಇದೇ ಆಗಿದೆ ಎಂದು ಹೇಳಿದರು.
ರಾಜ್ಯದ ಹೊರಗಿದ್ದರೂ ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸುವ ಮೂಲಕ ವಸಂತಕುಮಾರ ಅವರು ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮೇಲಿನ ಅಭಿಮಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಗಫೂರ, ಶಿವಕುಮಾರ ಚುಕ್ಕಿ, ನಾಗೇಂದ್ರಪ್ಪ ಮಟಮಾರಿ, ಅಂಬಯ್ಯ, ಎನ್. ಶ್ರೀನಿವಾಸರೆಡ್ಡಿ, ಅಂಜನೇಯ ಕುರುಬದೊಡ್ಡಿ, ಶರಣಗೌಡ, ವೀರೇಶ ನಾಯಕ, ಗೋವಿಂದ ನಾಯಕ, ಶಿವಶಂಕರಗೌಡ, ಹನುಮಂತಪ್ಪ ಮುದ್ದಾಪುರ, ಖಾಜಿ ಮಲಿಕ, ಲಿಂಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.



