ರಾಯಚೂರು: ನಗರದ ಹೆಚ್ಸಿಎಂಎಸ್ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಹಾಗೂ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ಸಂಯುಕ್ತಾಶ್ರಯದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಮಹಾವಿದ್ಯಾಲಯದ ಹಿರಿಯ ಉಪನ್ಯಾಸಕ ಡಾ. ಸಿದ್ದರಾಮಯ್ಯ ಹಿರೇಮಠ ಅವರು ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಅರ್ಪಿಸಿದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಹೇಮರೆಡ್ಡಿ ಪಾಟೀಲ ಮಾತನಾಡಿ, ಕರ್ನಾಟಕವು ಶ್ರೀಮಂತ ಇತಿಹಾಸ, ಸಾಹಿತ್ಯ, ಕಲೆ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ನಾಡಾಗಿದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬ ಕನ್ನಡಿಗರೂ ಕೈಜೋಡಿಸಬೇಕು ಎಂದು ಹೇಳಿದರು.
ಕನ್ನಡ ಭಾಷೆಯು ಕೇವಲ ಸಂವಹನದ ಮಾಧ್ಯಮವಲ್ಲ, ಅದು ಕನ್ನಡಿಗರ ಸ್ವಾಭಿಮಾನ, ಸಂಸ್ಕೃತಿ ಮತ್ತು ಅಸ್ಮಿತೆಯ ಪ್ರತೀಕವಾಗಿದೆ. ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದರ ಜೊತೆಗೆ ನಾಡಿನ ಇತಿಹಾಸ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಅರಿತುಕೊಳ್ಳಬೇಕು. ಕನ್ನಡದ ಹಿರಿಮೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ಯುವಜನರು ವಹಿಸಿಕೊಳ್ಳಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯೋತ್ಸವವು ಕನ್ನಡಿಗರ ಏಕತೆ, ಸ್ವಾಭಿಮಾನ ಮತ್ತು ನಾಡಿನ ಮೇಲಿನ ಪ್ರೀತಿಯನ್ನು ಪ್ರತಿಬಿಂಬಿಸುವ ಮಹತ್ವದ ದಿನವಾಗಿದೆ. ಕನ್ನಡ ಭಾಷೆ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸುವುದರೊಂದಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಕನ್ನಡದ ಬಳಕೆಯನ್ನು ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವೀರನಗೌಡ, ಶರಣಮ್ಮ, ಹಂಪಮ್ಮ, ಈರಪ್ಪ ಸರ್ಜಾಪುರ, ಬೋಧಕೇತರ ಸಿಬ್ಬಂದಿ ರಾಚಯ್ಯ ಸ್ವಾಮಿ ಸೇರಿದಂತೆ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮಹತ್ವವನ್ನು ಸ್ಮರಿಸುವ ಮೂಲಕ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು.



