ರಾಯಚೂರು: ನಗರದ 71ನೇ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕಿಶೋರಿ ಕೇಂದ್ರ ಸೇರಿದಂತೆ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಸಾರ್ವಜನಿಕರ ಗಮನ ಸೆಳೆಯಿತು.

ಕನ್ನಡ ಸಂಘದ ಭವನದಿಂದ ಮಹಾತ್ಮ ಗಾಂಧಿ ಕ್ರೀಡಾಂಗಣದವರೆಗೆ ನಡೆದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆರೋಗ್ಯ ಇಲಾಖೆಯ ಸ್ತಬ್ಧಚಿತ್ರಕ್ಕೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಧರ್ಮಸಿಂಗ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಿತಾ ಎಂ.ಎನ್. ಅವರಿಂದ ಸ್ತಬ್ಧಚಿತ್ರದಲ್ಲಿ ಪ್ರದರ್ಶಿಸಲಾಗಿದ್ದ ವಿವಿಧ ಆರೋಗ್ಯ ಯೋಜನೆಗಳ ಕುರಿತು ಮಾಹಿತಿ ಪಡೆದ ಸಚಿವರು, ಇಲಾಖೆಯ ಜಾಗೃತಿ ಕಾರ್ಯವನ್ನು ಶ್ಲಾಘಿಸಿದರು.

ಜಿಲ್ಲಾ ಪಂಚಾಯಿತಿಯ ಮಹತ್ವಾಕಾಂಕ್ಷಿ ಯೋಜನೆಯಾದ ಕಿಶೋರಿ ಕೇಂದ್ರದ ಮೂಲಕ 11ರಿಂದ 18 ವರ್ಷದೊಳಗಿನ ಹದಿಹರೆಯದ ಬಾಲಕಿಯರ ಸರ್ವತೋಮುಖ ಅಭಿವೃದ್ಧಿ ಹಾಗೂ ಸಬಲೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಆರೋಗ್ಯ, ಶಿಕ್ಷಣ, ಪೌಷ್ಟಿಕಾಂಶ, ಜೀವನ ಕೌಶಲ್ಯ ಮತ್ತು ಆತ್ಮರಕ್ಷಣೆಯ ಕುರಿತು ಅರಿವು ಮೂಡಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಜಿಲ್ಲೆಯ ರಾಯಚೂರು, ದೇವದುರ್ಗ, ಜಾಲಹಳ್ಳಿ, ಅರಕೇರಾ, ಸಿರವಾರ ಹಾಗೂ ಗಬ್ಬೂರುಗಳಲ್ಲಿ ಕಿಶೋರಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಉಳಿದ ತಾಲೂಕುಗಳಿಗೂ ವಿಸ್ತರಿಸುವ ಕಾರ್ಯ ನಡೆಯುತ್ತಿದೆ. ಪ್ರಸ್ತುತ ಬಾಲಕರಿಗೂ ಕೇಂದ್ರಗಳ ಸೇವೆಗಳನ್ನು ಒದಗಿಸಲಾಗುತ್ತಿದೆ.

ಕಿಶೋರಿ ಕೇಂದ್ರಗಳಲ್ಲಿ ಬಾಲ್ಯವಿವಾಹ ತಡೆಗಟ್ಟುವಿಕೆ, ದೈಹಿಕ ಮತ್ತು ಮಾನಸಿಕ ಆರೋಗ್ಯ, ಮುಟ್ಟಿನ ನೈರ್ಮಲ್ಯ, ಸ್ಯಾನಿಟರಿ ಪ್ಯಾಡ್‌ಗಳ ಬಳಕೆ, ಪೌಷ್ಟಿಕಾಂಶ, ಇಂಟರ್ನೆಟ್ ಸುರಕ್ಷತೆ ಹಾಗೂ ಜೀವನ ಕೌಶಲ್ಯಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವುದರ ಜೊತೆಗೆ ಯೋಗ, ಕರಾಟೆಯಂತಹ ಆತ್ಮರಕ್ಷಣಾ ತರಬೇತಿಗಳ ಮೂಲಕ ಆತ್ಮವಿಶ್ವಾಸ ಬೆಳೆಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಇದಲ್ಲದೆ, ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆ, ನಗರ ಪ್ರದೇಶದ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ನಮ್ಮ ಕ್ಲಿನಿಕ್, ಹುಟ್ಟಿನಿಂದ 18 ವರ್ಷದೊಳಗಿನ ಮಕ್ಕಳ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಚಿಕಿತ್ಸೆ ಒದಗಿಸುವ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ (ಆರ್‌ಬಿಎಸ್‌ಕೆ) ಕುರಿತು ಸ್ತಬ್ಧಚಿತ್ರದಲ್ಲಿ ಮಾಹಿತಿ ಪ್ರದರ್ಶಿಸಲಾಗಿತ್ತು.

ಡೆಂಗ್ಯು ಹರಡುವ ಈಡಿಸ್ ಈಜಿಪ್ಟೈ ಸೊಳ್ಳೆಯ ನಿಯಂತ್ರಣ, ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸುವ ಮಾದರಿಗಳನ್ನೂ ಪ್ರದರ್ಶಿಸಲಾಗಿತ್ತು.

ಆರೋಗ್ಯ ಇಲಾಖೆಯ ಮಾಹಿತಿ, ಶಿಕ್ಷಣ ಮತ್ತು ಸಂವಹನ ವಿಭಾಗದಿಂದ ಸಿದ್ಧಪಡಿಸಲಾಗಿದ್ದ ಸ್ತಬ್ಧಚಿತ್ರವನ್ನು ಮೆರವಣಿಗೆಯುದ್ದಕ್ಕೂ ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸಿ, ವಿವಿಧ ಆರೋಗ್ಯ ಯೋಜನೆಗಳ ಕುರಿತು ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ, ಮಹಾನಗರ ಪಾಲಿಕೆ ಆಯುಕ್ತ ಜುಬೀನ್ ಮೋಹಪಾತ್ರ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೋಪಾಲ ಗೆಣ್ಣೂರ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ, ತಹಶೀಲ್ದಾರ್ ಸುರೇಶ ವರ್ಮಾ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.