ದೇವದುರ್ಗ, ನ. 1: ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ನಾಡಿನ ಅಸ್ಮಿತೆ, ಸಂಸ್ಕೃತಿ ಹಾಗೂ ಸ್ವಾಭಿಮಾನದ ಸಂಕೇತವಾಗಿದೆ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ ಎಂದು ರಾಯಚೂರು ರಿಮ್ಸ್‌ನ ಶುಶ್ರೂಷಕ ಅಧಿಕಾರಿ ಮಲ್ಲಿಕಾರ್ಜುನ ನಾಯಕ ಬೂದಿನಾಳ ಹೇಳಿದರು.

ತಾಲೂಕಿನ ಬೂದಿನಾಳ ಗ್ರಾಮದಲ್ಲಿ ಆಯೋಜಿಸಿದ್ದ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಕನ್ನಡ ನಾಡು ಶ್ರೀಮಂತ ಇತಿಹಾಸ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯನ್ನು ಹೊಂದಿದೆ. ಕನ್ನಡ ಭಾಷೆಯ ಬಗ್ಗೆ ಅಭಿಮಾನ ಹೊಂದುವುದರ ಜೊತೆಗೆ ದೈನಂದಿನ ಜೀವನದಲ್ಲಿ ಕನ್ನಡವನ್ನು ಹೆಚ್ಚು ಬಳಸಬೇಕು. ಕನ್ನಡದಲ್ಲಿ ಮಾತನಾಡುವುದು, ಬರೆಯುವುದು ಹಾಗೂ ಮುಂದಿನ ಪೀಳಿಗೆಗೆ ಭಾಷೆಯ ಮಹತ್ವವನ್ನು ತಿಳಿಸುವ ಮೂಲಕ ಕನ್ನಡದ ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

‘ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು’ ಎಂಬ ಸಂದೇಶವನ್ನು ಸ್ಮರಿಸಿದ ಅವರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂಬ ಭಾವನೆಯೊಂದಿಗೆ ನಾಡು, ನುಡಿ ಹಾಗೂ ಸಂಸ್ಕೃತಿಯ ಸಂರಕ್ಷಣೆಗೆ ಎಲ್ಲರೂ ಶ್ರಮಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ರವೀಂದ್ರ ನಾಯಕ ಮಾತನಾಡಿ, ಕರ್ನಾಟಕವು ಐತಿಹಾಸಿಕ ಪರಂಪರೆ, ಪ್ರಸಿದ್ಧ ಪ್ರವಾಸಿ ತಾಣಗಳು ಹಾಗೂ ವೈವಿಧ್ಯಮಯ ಸಂಸ್ಕೃತಿಯನ್ನು ಹೊಂದಿರುವ ಪುಣ್ಯಭೂಮಿಯಾಗಿದೆ. ವಿದ್ಯಾರ್ಥಿಗಳು ಕನ್ನಡ ನಾಡಿನ ಇತಿಹಾಸ, ಪರಂಪರೆ ಹಾಗೂ ಸಾಧಕರ ಕುರಿತು ತಿಳಿದುಕೊಂಡು ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷ ಮುರುಗೇಂದ್ರ ಸ್ವಾಮಿ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕನ್ನಡ ನಾಡಿನ ಏಕತೆ ಹಾಗೂ ಭಾಷಾಭಿಮಾನವನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಇದಕ್ಕೂ ಮುನ್ನ ಕನ್ನಡಾಂಬೆ ಭುವನೇಶ್ವರಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಪೂಜೆ ನೆರವೇರಿಸಲಾಯಿತು. ಬಳಿಕ ಕನ್ನಡ ಧ್ವಜಾರೋಹಣ ನೆರವೇರಿಸಿ, ಸಾಮೂಹಿಕವಾಗಿ ನಾಡಗೀತೆ ಹಾಡುವ ಮೂಲಕ ಕನ್ನಡ ನಾಡಿನ ಬಗ್ಗೆ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಸನಗೌಡ, ವೀರೇಶ್ ವಿಶ್ವಕರ್ಮ, ಸಾಬುಗೌಡ ಕೆ., ಪ್ರಭುಲಿಂಗ, ಸಂತೋಷ್, ಶಾಲೆಯ ಅತಿಥಿ ಶಿಕ್ಷಕಿಯರಾದ ಹನುಮಂತಿ, ಅನಿತಾ, ಶಾಲಾ ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿ ಉಪಸ್ಥಿತರಿದ್ದರು.