ದೇವದುರ್ಗ, ನ.2: ದೇವದುರ್ಗ ಮತ್ತು ಅರಕೇರಾ ತಾಲೂಕುಗಳ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರ ವಿತರಿಸಬೇಕು ಹಾಗೂ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಭೂ ಮಂಜೂರಾತಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ವತಿಯಿಂದ ಸೋಮವಾರ ಪಟ್ಟಣದ ಮಿನಿ ವಿಧಾನಸೌಧದ ಎದುರು ಪ್ರತಿಭಟನಾ ಧರಣಿ ನಡೆಸಲಾಯಿತು.
ದೇವದುರ್ಗ ಮತ್ತು ಅರಕೇರಾ ತಾಲೂಕುಗಳ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಬಗರ್ ಹುಕುಂ ಸಾಗುವಳಿದಾರರು ಹಾಗೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಭೂಮಿಯ ಹಕ್ಕಿಗಾಗಿ ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ದೇವದುರ್ಗ ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಹಾಗೂ ಅರಕೇರಾ ಗ್ರೇಡ್-2 ತಹಶೀಲ್ದಾರ್ ಶ್ರೀಧರ ಪವಾರ್ ಅವರಿಗೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಲಾಯಿತು.
ಪ್ರತಿಭಟನಾಕಾರರು ಮಾತನಾಡಿ, ಕರ್ನಾಟಕ ಸರ್ಕಾರದ 2023ರ ಡಿಸೆಂಬರ್ 1ರ ಸುತ್ತೋಲೆ ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಅನ್ವಯ ನಮೂನೆ 50, 53 ಮತ್ತು 57ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು. ಆದರೆ ಅಧಿಕಾರಿಗಳ ವಿಳಂಬ ಧೋರಣೆಯಿಂದಾಗಿ ಅನೇಕ ಬಡ ರೈತರು ದಶಕಗಳಿಂದ ಸಾಗುವಳಿ ಮಾಡುತ್ತಿರುವ ಭೂಮಿಗೆ ಕಾನೂನುಬದ್ಧ ಹಕ್ಕು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.
ಅರಕೇರಾ ತಾಲೂಕು ರಚನೆಯಾಗಿ ಸುಮಾರು ಆರು ವರ್ಷ ಕಳೆದರೂ ಭೂ ಮಂಜೂರಾತಿ ಸಮಿತಿ ರಚನೆಯಾಗದಿರುವುದು ರೈತರ ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿದೆ. ತಾಲೂಕಿನಲ್ಲಿ ಸುಮಾರು 789 ಬಗರ್ ಹುಕುಂ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿದ್ದು, ಕೂಡಲೇ ಭೂ ಮಂಜೂರಾತಿ ಸಮಿತಿ ರಚಿಸಿ ಅರ್ಜಿಗಳ ಪರಿಶೀಲನೆ ಹಾಗೂ ಭೂ ಮಂಜೂರಾತಿ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಒತ್ತಾಯಿಸಿದರು.
ದೇವದುರ್ಗ ಮತ್ತು ಅರಕೇರಾ ತಾಲೂಕುಗಳಲ್ಲಿ ಭೂ ಮಂಜೂರಾತಿ ಸಮಿತಿಗಳ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು. ಅರ್ಹ ರೈತರ ಅರ್ಜಿಗಳನ್ನು ಅನಗತ್ಯವಾಗಿ ವಿಳಂಬ ಮಾಡದೆ ಕಾನೂನು ಪ್ರಕಾರ ಇತ್ಯರ್ಥಪಡಿಸಬೇಕು. ಹಲವು ದಶಕಗಳಿಂದ ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಬಡ ರೈತರು ಹಾಗೂ ಕೃಷಿ ಕಾರ್ಮಿಕರ ಹಿತಾಸಕ್ತಿಯನ್ನು ಸರ್ಕಾರ ರಕ್ಷಿಸಬೇಕು ಎಂದು ಆಗ್ರಹಿಸಿದರು.
ಕೆಲವು ಪ್ರದೇಶಗಳಲ್ಲಿ ಕಂದಾಯ ಭೂಮಿಯನ್ನು ಅರಣ್ಯ ಭೂಮಿಯಾಗಿ ಪರಿವರ್ತಿಸಲಾಗುತ್ತಿದೆ ಎಂಬ ಆತಂಕ ರೈತರಲ್ಲಿ ಮೂಡಿದ್ದು, ಈ ಕುರಿತು ಕಂದಾಯ ಮತ್ತು ಅರಣ್ಯ ಇಲಾಖೆಗಳು ಸ್ಪಷ್ಟನೆ ನೀಡಬೇಕು. ಭೂಮಿಯ ವರ್ಗೀಕರಣದ ನೆಪದಲ್ಲಿ ದೀರ್ಘಕಾಲದಿಂದ ಸಾಗುವಳಿ ಮಾಡುತ್ತಿರುವ ಬಡ ರೈತರನ್ನು ಒಕ್ಕಲೆಬ್ಬಿಸಬಾರದು. ಅವರ ಜೀವನೋಪಾಯಕ್ಕೆ ಧಕ್ಕೆಯಾಗದಂತೆ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಹಾಗೂ ಗ್ರೇಡ್-2 ತಹಶೀಲ್ದಾರ್ ಶ್ರೀಧರ ಪವಾರ್ ಅವರು ರೈತರ ಸಮಸ್ಯೆಗಳ ಪರಿಹಾರಕ್ಕೆ ಕಾಲಾವಕಾಶ ಕೋರಿದ್ದು, ಸಂಬಂಧಪಟ್ಟ ಹಂತದಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಆದರೆ ಅಧಿಕಾರಿಗಳ ಭರವಸೆಗಳು ಕೇವಲ ಮಾತಿಗೆ ಸೀಮಿತವಾಗಬಾರದು. ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಆದ್ಯತೆ ನೀಡಿ, ಅರ್ಹ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಲು ಸರ್ಕಾರ ಮತ್ತು ಜಿಲ್ಲಾಡಳಿತ ತಕ್ಷಣ ಮುಂದಾಗಬೇಕು ಎಂದು ಸಂಘಟನೆಯ ಮುಖಂಡರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಗರ್ ಹುಕುಂ ಸಾಗುವಳಿದಾರರ ರಾಜ್ಯ ಸಂಚಾಲಕ ಲಕ್ಷ್ಮಣ್ ಜಡಗಣ್ಣನವರ್, ರೈತ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ದುರ್ಗಣ್ಣ ಅಡಕಲಗುಡ್ಡ, ಜಿಲ್ಲಾ ಕಾರ್ಯದರ್ಶಿ ಮಲ್ಲನಗೌಡ ಅಂಚೆಸಗೂರು ಸೇರಿದಂತೆ ದೇವದುರ್ಗ ಮತ್ತು ಅರಕೇರಾ ತಾಲೂಕುಗಳ ವಿವಿಧ ಗ್ರಾಮಗಳ ರೈತರು, ಕೃಷಿ ಕಾರ್ಮಿಕರು ಹಾಗೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.



