ಮಾನ್ವಿ: ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆಯ ಹೆಮ್ಮೆಯ ಸಂಕೇತವಾಗಿರುವ ಕನ್ನಡ ರಾಜ್ಯೋತ್ಸವವು ಪ್ರತಿಯೊಬ್ಬ ಕನ್ನಡಿಗನ ಸ್ವಾಭಿಮಾನದ ಹಬ್ಬವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಮಾಧ್ಯಮದಲ್ಲಿ ಶಿಕ್ಷಣ ಪಡೆಯುತ್ತಿದ್ದರೂ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿ ಮತ್ತು ಅಭಿಮಾನವನ್ನು ಸದಾ ಉಳಿಸಿಕೊಳ್ಳಬೇಕು ಎಂದು ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಾಂತೇಶ್ ಓಲೇಕಾರ ಹೇಳಿದರು.

ಪಟ್ಟಣದ ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡಾಂಬೆ ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ನಾಡಿನ ಇತಿಹಾಸ, ಸಂಸ್ಕೃತಿ, ಸಾಹಿತ್ಯ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವ ಅಸ್ಮಿತೆಯಾಗಿದೆ. ವಿದ್ಯಾರ್ಥಿಗಳು ಕನ್ನಡ ಭಾಷೆಯ ಮಹತ್ವವನ್ನು ಅರಿತು ದೈನಂದಿನ ಜೀವನದಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು. ಇತರ ಭಾಷೆಗಳನ್ನು ಕಲಿಯುವುದರ ಜೊತೆಗೆ ಮಾತೃಭಾಷೆಯ ಮೇಲಿನ ಗೌರವವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು.

ಕರ್ನಾಟಕ ಏಕೀಕರಣಕ್ಕಾಗಿ ಅನೇಕ ಮಹನೀಯರು, ಸಾಹಿತಿಗಳು, ಕನ್ನಡಪರ ಸಂಘಟನೆಗಳು ಹಾಗೂ ಹೋರಾಟಗಾರರು ಶ್ರಮಿಸಿದ್ದಾರೆ. ಅವರ ತ್ಯಾಗ ಮತ್ತು ಹೋರಾಟದ ಫಲವಾಗಿ ಕನ್ನಡ ಮಾತನಾಡುವ ಪ್ರದೇಶಗಳು ಒಂದಾಗಿ ರಾಜ್ಯದ ಉದಯಕ್ಕೆ ಕಾರಣವಾಯಿತು. ಈ ಐತಿಹಾಸಿಕ ಹೋರಾಟವನ್ನು ಸ್ಮರಿಸುವುದರ ಜೊತೆಗೆ ಕನ್ನಡ ಭಾಷೆಯ ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ವೆಂಕಟೇಶ್ವರ ಪ್ರೌಢಶಾಲೆಯ ಆಡಳಿತಾಧಿಕಾರಿ ಶಂಕರಪ್ಪ ನಕ್ಕುಂದಿ ಮಾತನಾಡಿ, ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಸುದೀರ್ಘ ಇತಿಹಾಸ ಹೊಂದಿರುವ ಕನ್ನಡ ಭಾಷೆಯು ಶ್ರೀಮಂತ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಕನ್ನಡ ಮಾತನಾಡುವ ಪ್ರದೇಶಗಳನ್ನು ಏಕೀಕರಿಸುವ ನಿಟ್ಟಿನಲ್ಲಿ 1905ರಲ್ಲಿಯೇ ಆಲೂರು ವೆಂಕಟರಾಯರು ಹೋರಾಟಕ್ಕೆ ಚಾಲನೆ ನೀಡಿದ್ದರು. ಅವರಂತಹ ಮಹನೀಯರ ನಿರಂತರ ಪ್ರಯತ್ನ ಹಾಗೂ ಕನ್ನಡಿಗರ ಹೋರಾಟದ ಫಲವಾಗಿ 1956ರ ನವೆಂಬರ್ 1ರಂದು ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂದಿತು ಎಂದು ವಿವರಿಸಿದರು.

ಕನ್ನಡ ರಾಜ್ಯೋತ್ಸವವು ನಾಡಿನ ಏಕತೆ, ಭಾಷಾಭಿಮಾನ ಹಾಗೂ ಸಾಂಸ್ಕೃತಿಕ ವೈಭವವನ್ನು ಸಾರುವ ಮಹತ್ವದ ದಿನವಾಗಿದೆ. ಇಂದಿನ ವಿದ್ಯಾರ್ಥಿಗಳು ಕನ್ನಡದ ಇತಿಹಾಸ, ಸಾಹಿತ್ಯ ಮತ್ತು ಪರಂಪರೆಯನ್ನು ತಿಳಿದುಕೊಂಡು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ವಹಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ವೆಂಕಟೇಶ್, ಎಸ್‌ಎಂವಿಒ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀದೇವಿ, ಉಪನ್ಯಾಸಕರಾದ ಅಬ್ದುಲ್ ರಹೀಮ್, ಮಹಾದೇವ, ನೀಲಮ್ಮ, ವೆಂಕಟೇಶ್ವರ ಪ್ರೌಢಶಾಲೆಯ ಮುಖ್ಯಗುರು ಚಂದ್ರಶೇಖರ ಪಾಟೀಲ್, ಶಿಕ್ಷಕಿಯರಾದ ಸುವರ್ಣ, ಸುಮಂಗಳ, ರೂಬಿಯಾ, ಅಮರಮ್ಮ, ಅನುಸೂಯ, ಆಯಿಷಾ ಸೇರಿದಂತೆ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.