ದೇವದುರ್ಗ, ನ. 2: ರಾಯಚೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ದಲಿತರ ಮೇಲಿನ ಹಲ್ಲೆ, ಕೊಲೆ, ಅತ್ಯಾಚಾರ, ಅಸ್ಪೃಶ್ಯತೆ ಹಾಗೂ ಸಾಮಾಜಿಕ ಬಹಿಷ್ಕಾರದಂತಹ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇಂತಹ ಕೃತ್ಯಗಳನ್ನು ತಡೆಗಟ್ಟಲು ಸರ್ಕಾರ ವಿಶೇಷ ಕಾನೂನು ರೂಪಿಸುವುದರ ಜೊತೆಗೆ ಅಸ್ತಿತ್ವದಲ್ಲಿರುವ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.), ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ರಾಜ್ಯ ಸಮಿತಿ ಒತ್ತಾಯಿಸಿದೆ.

ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೋಮವಾರ ದೇವದುರ್ಗ ತಾಲೂಕು ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ, ಜಿಲ್ಲೆಯಲ್ಲಿ ದಲಿತರ ವಿರುದ್ಧ ನಡೆದಿರುವ ವಿವಿಧ ದೌರ್ಜನ್ಯ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಿ ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.

ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ದಲಿತ ಸಮುದಾಯದವರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಕಳವಳ ಮೂಡಿಸಿವೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದಲ್ಲಿ ದಲಿತ ಯುವಕನನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಭೀಮರಾಯ ಹದ್ದಿನಾಳ ಅವರನ್ನು ಇದುವರೆಗೂ ಬಂಧಿಸಿಲ್ಲ ಎಂದು ಸಮಿತಿ ಆರೋಪಿಸಿದೆ. ಪ್ರಕರಣದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ಸಿರವಾರ ತಾಲೂಕಿನ ಹೊಕ್ಕಾಣೆ ಗ್ರಾಮದಲ್ಲಿ 21 ವರ್ಷದ ಪದವೀಧರೆ ಅಶ್ವಿನಿ ಅವರನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿ ಶವವನ್ನು ಬಾವಿಗೆ ಎಸೆಯಲಾಗಿದೆ ಎಂಬ ಆರೋಪವನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಅದೇ ರೀತಿ ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದ ರಾಣಮ್ಮ ಅವರ ಮೇಲೆ ಆಗಸ್ಟ್ 19ರಂದು ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಲಾಗಿದೆ ಎಂದು ಸಮಿತಿ ಆರೋಪಿಸಿದ್ದು, ಈ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ರಥೋತ್ಸವದ ಸಂದರ್ಭದಲ್ಲಿ ಜಾತಿ ತಾರತಮ್ಯದ ಹಿನ್ನೆಲೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಮಿತಿ ತಿಳಿಸಿದೆ. ಇಂತಹ ಘಟನೆಗಳು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಅಸಮಾನತೆ ಮತ್ತು ಜಾತಿ ತಾರತಮ್ಯ ಇನ್ನೂ ಮುಂದುವರಿಯುತ್ತಿರುವುದಕ್ಕೆ ಸಾಕ್ಷಿಯಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಇದಲ್ಲದೆ, ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ದಲಿತ ಗ್ರಾಹಕರಿಗೆ ಪ್ರತ್ಯೇಕವಾಗಿ ನೀರು ನೀಡದೆ, ದೂರದಿಂದ ಮೇಲಿನಿಂದ ನೀರು ಸುರಿಯುವ ಮೂಲಕ ಅಸ್ಪೃಶ್ಯತೆ ಆಚರಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಸಂವಿಧಾನದ 17ನೇ ವಿಧಿಯಡಿ ಅಸ್ಪೃಶ್ಯತೆ ನಿಷೇಧಿಸಲ್ಪಟ್ಟಿದ್ದರೂ ಇಂತಹ ಆಚರಣೆಗಳು ಮುಂದುವರಿಯುತ್ತಿರುವುದು ಖಂಡನೀಯ ಎಂದು ಸಮಿತಿ ತಿಳಿಸಿದೆ.

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಸಂಬಂಧಪಟ್ಟ ಇಲಾಖೆಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ದೂರುಗಳು ಬಂದ ತಕ್ಷಣ ಪ್ರಕರಣ ದಾಖಲಿಸಿಕೊಂಡು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಿಶೇಷವಾಗಿ ಭೂಮಾನಂದ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳ ವಿರುದ್ಧ ಸಮರ್ಪಕ ಆರೋಪಪಟ್ಟಿ ಸಲ್ಲಿಸಬೇಕು. ದೌರ್ಜನ್ಯ ಪ್ರಕರಣಗಳ ವಿಚಾರಣೆಯನ್ನು ವಿಶೇಷ ತ್ವರಿತ ನ್ಯಾಯಾಲಯಗಳ ಮೂಲಕ ನಡೆಸಿ ಸಂತ್ರಸ್ತ ಕುಟುಂಬಗಳಿಗೆ ಶೀಘ್ರ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಲಾಗಿದೆ.

ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ ಹಾಗೂ ಗೌರವಯುತ ಬದುಕಿನ ಹಕ್ಕನ್ನು ನೀಡಿದೆ. ಆದರೂ ದಲಿತ ಸಮುದಾಯದವರು ಜಾತಿ ಆಧಾರಿತ ತಾರತಮ್ಯ ಮತ್ತು ದೌರ್ಜನ್ಯಗಳನ್ನು ಎದುರಿಸುತ್ತಿರುವುದು ಸಾಮಾಜಿಕ ನ್ಯಾಯದ ಆಶಯಗಳಿಗೆ ವಿರುದ್ಧವಾಗಿದೆ. ಸರ್ಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ, ದಲಿತರ ಜೀವ ಮತ್ತು ಆಸ್ತಿಗೆ ರಕ್ಷಣೆ ಒದಗಿಸುವುದರ ಜೊತೆಗೆ ದೌರ್ಜನ್ಯ ತಡೆಗೆ ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಮಿತಿ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕ ಶಿವಪ್ಪ ಪಲಕನಮರಡಿ, ದೇವದುರ್ಗ ತಾಲೂಕು ಸಂಚಾಲಕ ರಮೇಶ್ ಭಾವಿಮನಿ, ಅರಕೇರಾ ತಾಲೂಕು ಸಂಚಾಲಕ ರಾಮಪ್ಪ ಮೇಸ್ತ್ರಿ, ತಾಲೂಕು ಸಂಘಟನಾ ಸಂಚಾಲಕರಾದ ಈಶಪ್ಪ ಶಿವಂಗಿ, ಡೇವಿಡ್ ಮಸರಕಲ್, ರಂಗಪ್ಪ ತೊಗರಿ, ಸಿದ್ದಪ್ಪ ಜನಕಲ್ ಪಾಲಕನಮರಡಿ, ರಮೇಶ್ ಭೋವಿ ಗೆಜ್ಜೆಬಾವಿ, ದುರುಗೇಶ್, ವಿರೇಶ್ ಬೆರಿ, ರಮೇಶ್ ಹಿರೇಬುದುರ್, ಅದಪ್ಪ ಮ್ಯಾಕಲದೊಡ್ಡಿ, ಸಿದ್ದಪ್ಪ ಬೂದಿನಾಳ್, ಸಂಗಮೇಶ ಲಿಂಗದಹಳ್ಳಿ, ಗಫೂರ್ ಗೌರಪೇಟೆ, ರಮೇಶ್ ಹೆದ್ದಾರಿ, ಮೌನೇಶ್ ಕಕ್ಕಲದೊಡ್ಡಿ, ಮೌನೇಶ್ ಗಾಂಧಿ, ರಾಜು ತವಗ ಸೇರಿದಂತೆ ದಲಿತ ಸಂಘರ್ಷ ಸಮಿತಿಯ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.