ರಾಯಚೂರು, ನ.3: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು ಹಾಗೂ ಮೀಸಲಾತಿ ಪ್ರಮಾಣವನ್ನು ಶೇ.17 ಮತ್ತು ಶೇ.7ರಂತೆ ಮುಂದುವರಿಸಲು ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಯ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಒಕ್ಕೂಟದ ಪದಾಧಿಕಾರಿಗಳು ಧರಣಿ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕೆಂಬ ಬೇಡಿಕೆ ಹಲವು ದಶಕಗಳಿಂದ ಕೇಳಿಬರುತ್ತಿದೆ. ಈ ಹಿಂದೆ ಪರಿಶಿಷ್ಟ ಜಾತಿಗಳಿಗೆ ಶೇ.15 ಹಾಗೂ ಪರಿಶಿಷ್ಟ ಪಂಗಡಗಳಿಗೆ ಶೇ.3ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಸುದೀರ್ಘ ಹೋರಾಟಗಳ ಪರಿಣಾಮವಾಗಿ 2022ರಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಿತ್ತು ಎಂದು ಪ್ರತಿಭಟನಾಕಾರರು ತಿಳಿಸಿದರು.
ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗವು ಸಮಗ್ರ ಅಧ್ಯಯನ ನಡೆಸಿ 2020ರ ಜುಲೈ 2ರಂದು ವರದಿ ಸಲ್ಲಿಸಿತ್ತು. ನಂತರ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ಪರಿಗಣಿಸಿ ಮೀಸಲಾತಿ ಹೆಚ್ಚಳಕ್ಕೆ ಕಾನೂನು ರೂಪ ನೀಡಲಾಗಿತ್ತು ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಆದರೆ, ಮೀಸಲಾತಿ ಹೆಚ್ಚಳದ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಮರ್ಥವಾಗಿ ವಾದ ಮಂಡಿಸಿಲ್ಲ. ಸರ್ಕಾರದ ನಿರ್ಲಕ್ಷ್ಯದಿಂದ ಪರಿಶಿಷ್ಟ ಜಾತಿಗಳಿಗೆ ಹೆಚ್ಚುವರಿಯಾಗಿ ದೊರೆತಿದ್ದ ಶೇ.2 ಹಾಗೂ ಪರಿಶಿಷ್ಟ ಪಂಗಡಗಳಿಗೆ ದೊರೆತಿದ್ದ ಶೇ.4ರಷ್ಟು ಮೀಸಲಾತಿಗೆ ಧಕ್ಕೆಯಾಗಿದೆ ಎಂದು ಸಂಘಟನೆ ಆರೋಪಿಸಿದೆ.
ಮೀಸಲಾತಿ ಹೆಚ್ಚಳದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಯುವಕರಿಗೆ ಉದ್ಯೋಗಾವಕಾಶಗಳು ದೊರೆತಿವೆ. ಇದೀಗ ಮೀಸಲಾತಿ ಪ್ರಮಾಣ ಕಡಿತಗೊಂಡರೆ ಶೈಕ್ಷಣಿಕ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಹಿಂದುಳಿದ ಸಮುದಾಯಗಳ ಅವಕಾಶಗಳಿಗೆ ತೊಂದರೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರವು ಶೇ.15ರ ಮೀಸಲಾತಿಯೊಳಗೆ ಕೈಗೊಂಡಿರುವ ಒಳಮೀಸಲಾತಿ ವರ್ಗೀಕರಣವನ್ನು ಮರುಪರಿಶೀಲಿಸಿ, ಹೊಸದಾಗಿ ಸೃಜಿಸಿರುವ ಎಸ್ಸಿ ಸಾಮಾನ್ಯ ಕೋಟಾವನ್ನು ರದ್ದುಪಡಿಸಬೇಕು. 1995ರ ಮೀಸಲಾತಿ ರೋಸ್ಟರ್ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಹಾಗೂ ಬಡ್ತಿ ಮೀಸಲಾತಿಯಲ್ಲಿಯೂ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ವಿಶೇಷ ಘಟಕ ಯೋಜನೆ (ಎಸ್ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್ಪಿ) ಅನುದಾನವನ್ನು ಇತರ ಉದ್ದೇಶಗಳಿಗೆ ಬಳಸುವುದನ್ನು ನಿಲ್ಲಿಸಬೇಕು. ಈ ಅನುದಾನವನ್ನು ಸಂಬಂಧಪಟ್ಟ ಸಮುದಾಯಗಳ ಶಿಕ್ಷಣ, ಆರೋಗ್ಯ, ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಮರ್ಪಕವಾಗಿ ವಿನಿಯೋಗಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರವು ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ನರಸಪ್ಪ ದಂಡೋರ, ರವೀಂದ್ರ ಜಲ್ದಾರ್, ಪಿ. ಯಲ್ಲಪ್ಪ, ಸುಭಾಷ್ ಅಸ್ಕಿಹಾಳ್, ಜಿ.ಎಂ. ವೀರೇಶ್, ಭೀಮ್ ರಾಜ್, ಜೆ.ಎಂ. ಮೌನೇಶ್, ರಾಘವೇಂದ್ರ ಬೋರೆಡ್ಡಿ, ಶರಣಪ್ಪ ನಾಮಾಲಿ, ಸಂಪತ್ ಕುಮಾರ್ ಉಟಕೂರ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



