ಲಿಂಗಸುಗೂರು, ನ.3: ಪಟ್ಟಣದ ಬೀದಿಬದಿ ವ್ಯಾಪಾರಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸಿ, ವ್ಯಾಪಾರಿಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಬೀದಿಬದಿ ಮಾರಾಟಗಾರರ ಸಂಘದ (ಟಿಯುಸಿಐ) ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪಟ್ಟಣದಲ್ಲಿ ಬೀದಿಬದಿ ವ್ಯಾಪಾರಿಗಳು ಹಲವು ವರ್ಷಗಳಿಂದ ಸಣ್ಣಪುಟ್ಟ ವ್ಯಾಪಾರ ನಡೆಸುವ ಮೂಲಕ ಜೀವನೋಪಾಯ ಕಂಡುಕೊಂಡಿದ್ದಾರೆ. ಆದರೆ, ಸೂಕ್ತ ವ್ಯಾಪಾರ ಸ್ಥಳ, ಮೂಲಸೌಕರ್ಯ ಹಾಗೂ ಅಧಿಕೃತ ಗುರುತಿನ ಚೀಟಿಗಳ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪುರಸಭೆ ಆಡಳಿತವು ಬೀದಿಬದಿ ವ್ಯಾಪಾರಿಗಳ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪುರಸಭೆ ಮುಂಭಾಗದ ರಸ್ತೆಯಲ್ಲಿ ವಾಹನಗಳು ವೇಗವಾಗಿ ಸಂಚರಿಸುತ್ತಿರುವುದರಿಂದ ಪಾದಚಾರಿಗಳು ಹಾಗೂ ವ್ಯಾಪಾರಿಗಳಿಗೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಆದ್ದರಿಂದ ವಾಹನಗಳ ವೇಗ ನಿಯಂತ್ರಣಕ್ಕಾಗಿ ಅಗತ್ಯ ಸ್ಥಳಗಳಲ್ಲಿ ರಸ್ತೆ ಉಬ್ಬುಗಳನ್ನು (ಹಂಪ್ಸ್) ಅಳವಡಿಸಬೇಕು. ಪಟ್ಟಣದ ಉದ್ಯಾನವನದಲ್ಲಿರುವ ಒಣಗಿದ ಮರವನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಸಂಭವಿಸಬಹುದಾದ ಅಪಾಯವನ್ನು ತಪ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ಪಟ್ಟಣದ ಬಸ್ ನಿಲ್ದಾಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಸುತ್ತಮುತ್ತ ಆಟೋರಿಕ್ಷಾಗಳು ಮತ್ತು ತಳ್ಳುವ ಬಂಡಿಗಳು ಅಸ್ತವ್ಯಸ್ತವಾಗಿ ನಿಲ್ಲುತ್ತಿರುವುದರಿಂದ ವಾಹನ ಸಂಚಾರ ಹಾಗೂ ಪಾದಚಾರಿಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ. ಈ ಪ್ರದೇಶಗಳಲ್ಲಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಆಟೋರಿಕ್ಷಾ ನಿಲುಗಡೆ ಹಾಗೂ ತಳ್ಳುವ ಬಂಡಿಗಳ ವ್ಯಾಪಾರಕ್ಕೆ ವ್ಯವಸ್ಥಿತ ಸ್ಥಳಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಇದಲ್ಲದೆ, ಪಟ್ಟಣದ ವ್ಯಾಪ್ತಿಯಲ್ಲಿರುವ ಎಲ್ಲ ಬೀದಿಬದಿ ವ್ಯಾಪಾರಿಗಳ ಸಮಗ್ರ ಸಮೀಕ್ಷೆ ನಡೆಸಿ, ಅರ್ಹ ವ್ಯಾಪಾರಿಗಳಿಗೆ ಅಧಿಕೃತ ನೋಂದಣಿ ಹಾಗೂ ಗುರುತಿನ ಚೀಟಿಗಳನ್ನು ವಿತರಿಸಬೇಕು. ವ್ಯಾಪಾರ ನಡೆಸಲು ಸೂಕ್ತ ಸ್ಥಳಗಳನ್ನು ಗುರುತಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಸರ್ಕಾರದಿಂದ ಬೀದಿಬದಿ ವ್ಯಾಪಾರಿಗಳಿಗಾಗಿ ಜಾರಿಯಲ್ಲಿರುವ ವಿವಿಧ ಕಲ್ಯಾಣ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪುರಸಭೆ ಅಧಿಕಾರಿಗಳು ಸಂಬಂಧಪಟ್ಟ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಬೇಕು. ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಆದ್ಯತೆ ಮೇರೆಗೆ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶರಣಪ್ಪ ಹುನಕುಂಟಿ, ಪ್ರಧಾನ ಕಾರ್ಯದರ್ಶಿ ಅಮರಯ್ಯ ಘಂಟಿ, ಸಂಘಟನಾ ಸಂಚಾಲಕ ಹಸ್ಮತ್, ಉಪಾಧ್ಯಕ್ಷರಾದ ಬಸವರಾಜ ತಾತ, ನಾಗೇಂದ್ರ ಭಜಂತ್ರಿ, ಮಹಾಂತೇಶ ಜಮಾದಾರ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.