ದೇವದುರ್ಗ, ನ.3: ರಾಜ್ಯದ ವಿವಿಧೆಡೆ ವಕೀಲರ ಮೇಲೆ ನಡೆಯುತ್ತಿರುವ ಹತ್ಯೆ, ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ, ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ದೇವದುರ್ಗ ತಾಲೂಕು ವಕೀಲರ ಸಂಘದ ವತಿಯಿಂದ ಮಂಗಳವಾರ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ನ್ಯಾಯಾಲಯದ ಆವರಣದ ಮುಂಭಾಗ ಜಮಾಯಿಸಿದ ವಕೀಲರು, ರಾಜ್ಯಾದ್ಯಂತ ವಕೀಲರ ಸುರಕ್ಷತೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ವಕೀಲರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಎಂ. ಮೌನೇಶ್ವರ ಹಾಗೂ ಹಿರಿಯ ನ್ಯಾಯವಾದಿ ವೇಣುಗೋಪಾಲಗೌಡ ಪಾಟೀಲ ಜಾಲಹಳ್ಳಿ, ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರು ಪ್ರಮುಖ ಪಾತ್ರ ವಹಿಸುತ್ತಿದ್ದು, ಜನಸಾಮಾನ್ಯರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ವಕೀಲರ ಮೇಲೆ ಹಲ್ಲೆ, ಬೆದರಿಕೆ ಹಾಗೂ ದೌರ್ಜನ್ಯ ಪ್ರಕರಣಗಳು ನಡೆಯುತ್ತಿರುವುದು ವಕೀಲ ಸಮುದಾಯದಲ್ಲಿ ಆತಂಕ ಮೂಡಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಸಾರ್ವಜನಿಕರ ಹಕ್ಕುಗಳ ರಕ್ಷಣೆ ಹಾಗೂ ನ್ಯಾಯಕ್ಕಾಗಿ ಹೋರಾಡುವ ವಕೀಲರೇ ಅಸುರಕ್ಷಿತ ವಾತಾವರಣದಲ್ಲಿ ಕಾರ್ಯನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ಗಂಭೀರ ವಿಚಾರವಾಗಿದೆ. ಇಂತಹ ಘಟನೆಗಳಿಂದ ವಕೀಲರು ನಿರ್ಭೀತಿಯಿಂದ ವೃತ್ತಿ ನಿರ್ವಹಿಸಲು ತೊಂದರೆಯಾಗುತ್ತಿದೆ. ವಕೀಲರ ಸುರಕ್ಷತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದರು.
ಸಾರ್ವಜನಿಕರ ವಿವಿಧ ಕೆಲಸಗಳ ನಿಮಿತ್ತ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಂದರ್ಭಗಳಲ್ಲಿಯೂ ವಕೀಲರಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಸೂಕ್ತ ಗೌರವ ಮತ್ತು ಸ್ಪಂದನೆ ದೊರೆಯುತ್ತಿಲ್ಲ. ಕಾನೂನು ವೃತ್ತಿಯಲ್ಲಿ ತೊಡಗಿರುವವರೊಂದಿಗೆ ಗೌರವಯುತವಾಗಿ ವರ್ತಿಸುವುದರ ಜೊತೆಗೆ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.
ವಕೀಲರ ಮೇಲಿನ ಹಲ್ಲೆ ಮತ್ತು ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ವಕೀಲರು ಯಾವುದೇ ಭಯ ಹಾಗೂ ಒತ್ತಡವಿಲ್ಲದೆ ವೃತ್ತಿ ನಿರ್ವಹಿಸಲು ಅಗತ್ಯ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ಅಂಗವಾಗಿ ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದ ವಕೀಲರು, ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವದುರ್ಗ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ಮತ್ತು ಕಿರಿಯ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.



