ಅರಕೇರಾ, ನ.3: ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ಅವರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ ತಾಲೂಕಿನ ನಾಗಡದಿನ್ನಿ ಗ್ರಾಮದಲ್ಲಿ ವಿಬಿ–ಜಿ–ರಾಮ್ ಜಿ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಐಇಸಿ ಸಂಯೋಜಕ ಅಮರೇಶ್ ಮಾತನಾಡಿ, ಗ್ರಾಮೀಣ ಕೂಲಿ ಕಾರ್ಮಿಕರಿಗೆ ಸ್ಥಳೀಯ ಮಟ್ಟದಲ್ಲಿಯೇ ಉದ್ಯೋಗಾವಕಾಶ ಒದಗಿಸುವ ಮೂಲಕ ಅವರ ಜೀವನಮಟ್ಟ ಸುಧಾರಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಯೋಜನೆಯ ಸೌಲಭ್ಯಗಳನ್ನು ಅರ್ಹ ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದರಿಂದ ಕೂಲಿ ಕಾರ್ಮಿಕರು ಕೆಲಸ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಸ್ಥಳೀಯವಾಗಿಯೇ ಉದ್ಯೋಗ ದೊರೆತರೆ ಕಾರ್ಮಿಕ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಯೋಜನೆಯಡಿ ವಾರ್ಷಿಕ ಉದ್ಯೋಗ ಖಾತರಿಯ ಮಾನವ ದಿನಗಳನ್ನು 100ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ದಿನಗೂಲಿಯನ್ನು ₹370ರಿಂದ ₹382ಕ್ಕೆ ಹೆಚ್ಚಿಸಲಾಗಿದ್ದು, ಒಂದು ಜಾಬ್ ಕಾರ್ಡ್ ಮೂಲಕ ವಾರ್ಷಿಕವಾಗಿ ₹47,750ರವರೆಗೆ ಕೂಲಿ ಪಡೆಯುವ ಅವಕಾಶವಿದೆ ಎಂದು ಯೋಜನೆಯ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಆಧಾರಿತ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿಯ ಜೊತೆಗೆ ಕೂಲಿ ಕಾರ್ಮಿಕರಿಗೆ ನಿರಂತರ ಉದ್ಯೋಗ ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದು ವಿವರಿಸಿದರು.

ಗಂಡು ಮತ್ತು ಹೆಣ್ಣು ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ಕೂಲಿ ನೀಡಲಾಗುತ್ತದೆ. ಕೆಲಸಕ್ಕೆ ತೆರಳುವ ಮಹಿಳಾ ಕಾರ್ಮಿಕರು ಮೂರು ವರ್ಷದೊಳಗಿನ ಮಕ್ಕಳನ್ನು ಕೂಸಿನ ಮನೆಯಲ್ಲಿ ದಾಖಲಿಸುವ ಮೂಲಕ ಮಕ್ಕಳ ಆರೈಕೆಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಂಗವಿಕಲರು, ಗರ್ಭಿಣಿಯರು ಹಾಗೂ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಯೋಜನೆಯಡಿ ಲಭ್ಯವಿರುವ ವಿಶೇಷ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಯಿತು. ಕಾರ್ಮಿಕರು ತಮ್ಮ ಕುಟುಂಬದ ಆರ್ಥಿಕ ಸುರಕ್ಷತೆಯ ದೃಷ್ಟಿಯಿಂದ ಜೀವ ವಿಮೆ ಮಾಡಿಸಿಕೊಳ್ಳುವಂತೆಯೂ ತಿಳಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಕೂಲಿ ಕಾರ್ಮಿಕರಿಗೆ ಯೋಜನೆಯ ಉದ್ದೇಶ, ಅರ್ಹತೆ ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ಒಳಗೊಂಡ ಕರಪತ್ರಗಳನ್ನು ವಿತರಿಸಲಾಯಿತು. ನಿರಂತರವಾಗಿ ಉದ್ಯೋಗ ಪಡೆಯಲು ಆಸಕ್ತಿ ಹೊಂದಿರುವ ಕೂಲಿ ಕಾರ್ಮಿಕರಿಂದ ನಮೂನೆ–6ರ ಮೂಲಕ ಕೆಲಸಕ್ಕಾಗಿ ಅರ್ಜಿಗಳನ್ನು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಐಇಸಿ ಸಂಯೋಜಕ ಅಮರೇಶ್, ಬಿಎಫ್‌ಟಿ ಮಹ್ಮದ್ ಜಾವೀದ್, ಗ್ರಾಮ ಪಂಚಾಯಿತಿ ಸಿಬ್ಬಂದಿ, ಮೇಟ್ಸ್ ಹಾಗೂ ಗ್ರಾಮದ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.