ರಾಯಚೂರು, ನ.3 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಬೇಕು. ಯೋಜನೆಗಳು ದುರುಪಯೋಗವಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ ಸೂಚಿಸಿದರು.
ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಕ್ತಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದು, ಅವರಿಗೆ ಬಸ್ ನಿಲ್ದಾಣಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ಶೌಚಾಲಯಗಳ ಸ್ವಚ್ಛತೆ ಹಾಗೂ ತಾಯಂದಿರಿಗೆ ಹಾಲುಣಿಸುವ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಆಯಾ ತಾಲೂಕುಗಳಿಗೆ ಸಂಬಂಧಿಸಿದ ಗ್ಯಾರಂಟಿ ಯೋಜನೆಗಳ ಸಮಿತಿ ಪ್ರತಿನಿಧಿಗಳನ್ನು ಕರೆದು ಬಸ್ ನಿಲ್ದಾಣಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಸ್ವಚ್ಛತೆ ಹಾಗೂ ನಿರ್ವಹಣೆಯ ಜವಾಬ್ದಾರಿ ಪಡೆದಿರುವ ಗುತ್ತಿಗೆದಾರರು ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ ಅವರ ಗುತ್ತಿಗೆಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಂಟು ತಾಲೂಕುಗಳ ಗ್ರಾಮ ಪಂಚಾಯಿತಿಗಳು, ನಗರ ಪ್ರದೇಶಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಸಮಗ್ರ ಮಾಹಿತಿ ಒದಗಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ಸಮುದಾಯಗಳ ಫಲಾನುಭವಿಗಳ ವಿವರಗಳನ್ನು ಇಲಾಖೆಗಳು ಹೊಂದಿರಬೇಕು ಎಂದು ಹೇಳಿದರು.
ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಯೋಜನೆಗಳ ಕಾರ್ಯಕ್ರಮಗಳ ಮಾಹಿತಿಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಿಗೆ ತಿಳಿಸಬೇಕು. ಸಮಿತಿಯ ಸದಸ್ಯರ ಸಹಭಾಗಿತ್ವದಲ್ಲಿಯೇ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಈ ನಿರ್ದೇಶನವನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪದಾಧಿಕಾರಿಗಳ ಸಹಕಾರದಿಂದ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿವೆ. ರಾಯಚೂರು ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಸಾರ್ವಜನಿಕರಿಗೆ ಯೋಜನೆಗಳ ಪ್ರಯೋಜನ ದೊರೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಗೃಹಲಕ್ಷ್ಮೀ ಯೋಜನೆಯಡಿ ರಾಯಚೂರು ಜಿಲ್ಲೆಯಲ್ಲಿ ಒಟ್ಟು 4,61,629 ಫಲಾನುಭವಿಗಳು ನೋಂದಣಿಯಾಗಿದ್ದು, ಅವರಲ್ಲಿ 4,36,460 ಫಲಾನುಭವಿಗಳಿಗೆ ಮಾಸಿಕ ₹2,000ರಂತೆ ಜುಲೈ 2026ರ ಅಂತ್ಯದವರೆಗೆ ಒಟ್ಟು ₹2,744.81 ಕೋಟಿ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 4,57,145 ಫಲಾನುಭವಿಗಳು ನೋಂದಣಿಯಾಗಿದ್ದು, ಇದುವರೆಗೆ ₹806.22 ಕೋಟಿ ವೆಚ್ಚ ಭರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 3,14,741 ಫಲಾನುಭವಿಗಳು ನೋಂದಣಿಯಾಗಿದ್ದು, ₹557.31 ಕೋಟಿ ವೆಚ್ಚ ಮಾಡಲಾಗಿದೆ ಎಂದು ವಿವರಿಸಿದರು.
ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ವಯಸ್ಕರು ಹಾಗೂ ಮಕ್ಕಳು ಸೇರಿದಂತೆ ಒಟ್ಟು 14.59 ಕೋಟಿ ಪ್ರಯಾಣಗಳು ದಾಖಲಾಗಿದ್ದು, ಇದಕ್ಕಾಗಿ ₹618.03 ಕೋಟಿ ವೆಚ್ಚ ಭರಿಸಲಾಗಿದೆ. ಯುವನಿಧಿ ಯೋಜನೆಯಡಿ ಪದವಿ ಹಾಗೂ ಡಿಪ್ಲೊಮಾ ಪೂರೈಸಿದ 27,876 ಅಭ್ಯರ್ಥಿಗಳು ನೋಂದಣಿಯಾಗಿದ್ದು, ಇದುವರೆಗೆ ₹78.87 ಕೋಟಿ ವೆಚ್ಚ ಭರಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ನೀಡಿರುವ ಸೂಚನೆಗಳನ್ನು ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಪಾಲಿಸಬೇಕು. ಕೈಗೊಂಡ ಕ್ರಮಗಳ ಕುರಿತು ಅನುಪಾಲನಾ ವರದಿಯನ್ನು ಸಲ್ಲಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಾಗಿದ್ದು, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು. ಇನ್ನೂ ಕೆಲವು ತಿಂಗಳುಗಳ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಪಾಮಯ್ಯ ಮುರಾಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಮುಖ್ಯ ಯೋಜನಾಧಿಕಾರಿ ಡಾ. ಟಿ. ರೋಣಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ನಾಗೇಂದ್ರ, ರಾಮಣ್ಣ ಇರಬಗೇರಾ, ಗಫೂರ್ ಸಾಬ್, ಹನುಮಂತಪ್ಪ ಜಾಲಿಬೆಂಚಿ, ಶೇಖರಗೌಡ ತುರವಿಹಾಳ, ಸದಸ್ಯರಾದ ಬಿ.ಕೆ. ಅಂಬರೇಷಪ್ಪ, ಪವನ ಕಿಶೋರ್ ಪಾಟೀಲ್, ಲಕ್ಷ್ಮಣ, ಮಹಬೂಬ್ ಸಾಬ್, ಅನಿಲ್ ಕುಮಾರ್, ವೆಂಕಟೇಶ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



