ರಾಯಚೂರು, ನ.3 (ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಸಾಮಾಜಿಕ ನ್ಯಾಯ ಸಭೆಗಳನ್ನು ಆಯೋಜಿಸಲಾಗುವುದು. ಈ ಸಭೆಗಳ ಸರಣಿಯನ್ನು ರಾಯಚೂರು ಜಿಲ್ಲೆಯಿಂದಲೇ ಆರಂಭಿಸಲಾಗಿದೆ ಎಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪಿ. ಹರಿಶೇಖರನ್ ಹೇಳಿದರು.

ಮಂಗಳವಾರ ನಗರದ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ ರಾಮ್ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಠಾಣೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಾಮಾಜಿಕ ನ್ಯಾಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಹಿಂದೆ ರಾಯಚೂರು ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸಿರುವುದರಿಂದ ಜಿಲ್ಲೆಯ ಸ್ಥಿತಿಗತಿ ಹಾಗೂ ಇಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅರಿವಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ನ್ಯಾಯ ಒದಗಿಸುವುದು ಹಾಗೂ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಸಾಮಾಜಿಕ ನ್ಯಾಯ ಸಭೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಿಂದ ರಾಯಚೂರಿಗೆ ಆಗಮಿಸಿರುವ ಮುಖ್ಯ ಉದ್ದೇಶವೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದಾಗಿದೆ. ಆದ್ದರಿಂದ ಪ್ರತಿಯೊಬ್ಬರಿಗೂ ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹೇಳಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಮೌಖಿಕವಾಗಿ ಪ್ರಸ್ತಾಪಿಸುವ ಹಾಗೂ ಲಿಖಿತ ರೂಪದಲ್ಲಿ ಸಲ್ಲಿಸುವ ಎಲ್ಲ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಅವುಗಳಿಗೆ ಸಂಬಂಧಪಟ್ಟ ಇಲಾಖೆಗಳ ಮೂಲಕ ಸೂಕ್ತ ಪರಿಹಾರ ಒದಗಿಸಲು ಖುದ್ದಾಗಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಜಿಲ್ಲಾಧಿಕಾರಿ ಪೂವಿತಾ ಎಸ್. ಮಾತನಾಡಿ, ಜಿಲ್ಲೆಯಲ್ಲಿ ಕೊಲೆ, ಅತ್ಯಾಚಾರ ಸೇರಿದಂತೆ ದೌರ್ಜನ್ಯದ ಹಲವು ಪ್ರಕರಣಗಳು ವರದಿಯಾಗುತ್ತಿದ್ದು, ಅವುಗಳ ತನಿಖೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವ ಉದ್ದೇಶದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗಾಗಿ ಸಾಮಾಜಿಕ ನ್ಯಾಯ ಸಭೆ ಆಯೋಜಿಸಲಾಗಿದೆ. ಸಾರ್ವಜನಿಕರು ಈ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಮಾತನಾಡಿ, ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದು, ಈ ಸಮುದಾಯಗಳ ವಿರುದ್ಧ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ. ಜಿಲ್ಲಾ ಪೊಲೀಸ್ ಇಲಾಖೆಯಿಂದ ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ. ಹೆಚ್ಚುವರಿ ತನಿಖೆ ಹಾಗೂ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯವು ಸಾಮಾಜಿಕ ನ್ಯಾಯ ಸಭೆ ಆಯೋಜಿಸಿದ್ದು, ಇದಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯ ಸಂಪೂರ್ಣ ಸಹಕಾರವಿದೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ ಮಾತನಾಡಿ, ಜಗತ್ತಿನಲ್ಲಿ ಸಾಮಾಜಿಕ ಸಮಾನತೆ ಮತ್ತು ಏಕತೆಯ ಕುರಿತು ಚರ್ಚಿಸುವಾಗ ಫ್ರೆಂಚ್ ಕ್ರಾಂತಿಯನ್ನು ಉಲ್ಲೇಖಿಸಲಾಗುತ್ತದೆ. ಆದರೆ, 12ನೇ ಶತಮಾನದಲ್ಲಿಯೇ ಸಾಂಸ್ಕೃತಿಕ ನಾಯಕ ಬಸವಣ್ಣನವರು ಸಾಮಾಜಿಕ ಸಮಾನತೆಯ ಕುರಿತು ಪ್ರತಿಪಾದಿಸಿದ್ದರು. ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆಯುವಂತೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರ ಜೊತೆಗೆ ಜಾತಿ ಆಧಾರಿತ ತಾರತಮ್ಯವನ್ನು ನಿರ್ಮೂಲನೆ ಮಾಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಅಂಬಣ್ಣ ಅರೋಲಿಕರ್, ಎಸ್. ರಾಜು, ಕೆ.ಇ. ಕುಮಾರ್, ಯಲ್ಲಪ್ಪ, ವೆಂಕಟೇಶ ನಾಯಕ ಅಸ್ಕಿಹಾಳ ಸೇರಿದಂತೆ ಹಲವರು ಮಾತನಾಡಿ, ಜಿಲ್ಲೆಯಲ್ಲಿ ನಡೆದ ಭೂಮಾನಂದ, ಅಶ್ವಿನಿ, ರೇಣಮ್ಮ ಅವರ ಕೊಲೆ ಪ್ರಕರಣಗಳು ಹಾಗೂ ಗಿಲ್ಲೆಸುಗೂರಿನ ಪೆಟ್ರೋಲ್ ಬಂಕ್‌ನಲ್ಲಿ ನಡೆದ ಕೊಲೆ ಪ್ರಕರಣದ ಕುರಿತು ಪ್ರಸ್ತಾಪಿಸಿದರು. ಅಲ್ಲದೆ, ದೇವಿನಗರ ಬಡಾವಣೆಯ ಹರಿಜನ ವಾಡದಲ್ಲಿರುವ ಮದ್ಯದ ಅಂಗಡಿಯನ್ನು ತೆರವುಗೊಳಿಸುವುದು ಸೇರಿದಂತೆ ವಿವಿಧ ಸಮಸ್ಯೆಗಳು ಮತ್ತು ದೌರ್ಜನ್ಯ ಪ್ರಕರಣಗಳ ಕುರಿತು ಗಮನ ಸೆಳೆದರು.

ಈ ಸಮಸ್ಯೆಗಳಿಗೆ ಪ್ರತಿಕ್ರಿಯಿಸಿದ ಎಡಿಜಿಪಿ ಪಿ. ಹರಿಶೇಖರನ್, ಸಭೆಯಲ್ಲಿ ಪ್ರಸ್ತಾಪಿಸಲಾದ ಸಮಸ್ಯೆಗಳು ಗಂಭೀರವಾಗಿದ್ದು, ಅವುಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪಿ. ಹರಿಶೇಖರನ್ ಅವರು ರಚಿಸಿರುವ ‘ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ, 1989’ ಹಾಗೂ ‘ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ನಿಯಮಗಳು, 1995’ ಕುರಿತ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಡಿಸಿಆರ್‌ಇ ಬಳ್ಳಾರಿ ವಲಯದ ಪೊಲೀಸ್ ಅಧೀಕ್ಷಕ ನವೀನ್, ಕೇಂದ್ರ ವಲಯದ ಪೊಲೀಸ್ ಅಧೀಕ್ಷಕ ಕರಿಬಸನಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೃಷ್ಣ ಶಾವಂತಗೇರಾ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.