ರಾಯಚೂರು: ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ವಿವಿಧ ರೂಪಗಳಲ್ಲಿ ವ್ಯಾಪಿಸಿರುವ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿದಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕರೂ ಜಾಗೃತರಾಗಬೇಕು ಎಂದು ರಾಯಚೂರು ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಪುರುಷೋತ್ತಮ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವತಿಯಿಂದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯ ಸಹಯೋಗದಲ್ಲಿ ಆಯೋಜಿಸಿದ್ದ 2026ನೇ ಸಾಲಿನ ಭ್ರಷ್ಟಾಚಾರ ವಿರೋಧಿ ಜಾಗೃತಿ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭ್ರಷ್ಟಾಚಾರವು ಸಾರ್ವಜನಿಕ ಆಡಳಿತದ ದಕ್ಷತೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುವ ಪ್ರಮುಖ ಸಮಸ್ಯೆಯಾಗಿದೆ. ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭ್ರಷ್ಟಾಚಾರವು ಪ್ರಗತಿಯ ವೇಗವನ್ನು ಕುಂಠಿತಗೊಳಿಸುತ್ತಿದೆ. ಭಾರತದಲ್ಲಿಯೂ ಭ್ರಷ್ಟಾಚಾರದ ಕಾರಣದಿಂದ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ಅಭಿಪ್ರಾಯಪಟ್ಟರು.

ಸಾರ್ವಜನಿಕರು, ವಿಶೇಷವಾಗಿ ಯುವ ಸಮುದಾಯವು ಭ್ರಷ್ಟಾಚಾರದ ವಿರುದ್ಧ ಜಾಗೃತರಾಗುವುದು ಅತ್ಯಗತ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಹಂತದಿಂದಲೇ ಪ್ರಾಮಾಣಿಕತೆ, ನೈತಿಕತೆ ಹಾಗೂ ಸಾಮಾಜಿಕ ಜವಾಬ್ದಾರಿಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಸ್ವಚ್ಛ ಆಡಳಿತ ವ್ಯವಸ್ಥೆ ಹಾಗೂ ಸಮೃದ್ಧ ರಾಷ್ಟ್ರ ನಿರ್ಮಾಣ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಭ್ರಷ್ಟಾಚಾರ ತಡೆ ಕಾಯ್ದೆ–1988 ಹಾಗೂ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಪ್ರಮುಖ ಅಂಶಗಳ ಕುರಿತು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ಕಾನೂನುಗಳ ಜೊತೆಗೆ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ. ಪ್ರತಿಯೊಬ್ಬರೂ ಭ್ರಷ್ಟಾಚಾರದಲ್ಲಿ ಭಾಗಿಯಾಗದಿರುವ ಹಾಗೂ ಅದನ್ನು ಪ್ರೋತ್ಸಾಹಿಸದಿರುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಸುಗುಣಾ ಬಸವರಾಜ್ ಮಾತನಾಡಿ, ಮನುಷ್ಯನ ಮಿತಿಮೀರಿದ ಆಸೆ ಮತ್ತು ಸ್ವಾರ್ಥ ಮನೋಭಾವವೇ ಭ್ರಷ್ಟಾಚಾರಕ್ಕೆ ಪ್ರಮುಖ ಕಾರಣವಾಗಿದೆ. ಸಮಾಜದಲ್ಲಿ ಪ್ರಾಮಾಣಿಕತೆ ಹಾಗೂ ನೈತಿಕ ಮೌಲ್ಯಗಳು ಕುಸಿದಾಗ ಭ್ರಷ್ಟಾಚಾರದಂತಹ ಅನಿಷ್ಟ ಪದ್ಧತಿಗಳು ಹೆಚ್ಚಾಗುತ್ತವೆ ಎಂದು ಹೇಳಿದರು.

ಶರಣರ ನಾಡಿನಲ್ಲಿ ಬದುಕುತ್ತಿರುವ ನಾವು ಆಯ್ದಕ್ಕಿ ಲಕ್ಕಮ್ಮ ಹಾಗೂ ಮಾರಯ್ಯ ಅವರ ಕಾಯಕ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಾಳೆಗಾಗಿ ಅನಗತ್ಯವಾಗಿ ಸಂಪತ್ತನ್ನು ಸಂಗ್ರಹಿಸುವುದಕ್ಕಿಂತ ಪ್ರಾಮಾಣಿಕ ದುಡಿಮೆ ಮತ್ತು ಸರಳ ಜೀವನಕ್ಕೆ ಆದ್ಯತೆ ನೀಡಬೇಕು ಎಂಬ ಶರಣರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ. ಪ್ರತಿಯೊಬ್ಬರೂ ಕಾಯಕನಿಷ್ಠೆ, ಪ್ರಾಮಾಣಿಕತೆ ಹಾಗೂ ಸಾಮಾಜಿಕ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಿದರೆ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬಹುದು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಹಿನ್ನೆಲೆ ಹಾಗೂ ಉದ್ದೇಶಗಳನ್ನು ವಿವರಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಸಂತೋಷಕುಮಾರ ರೇವೂರ, ಭ್ರಷ್ಟಾಚಾರಕ್ಕೆ ಐತಿಹಾಸಿಕ ಹಿನ್ನೆಲೆಯಿದ್ದು, ಮೊಘಲರ ಆಡಳಿತಾವಧಿಯಲ್ಲಿ ಬಳಕೆಯಲ್ಲಿದ್ದ ‘ನಜರಾನಾ’ ಮತ್ತು ‘ಶುಕ್ರಾನಾ’ ಪದ್ಧತಿಗಳನ್ನು ಉಲ್ಲೇಖಿಸಿದರು.

ಈಸ್ಟ್ ಇಂಡಿಯಾ ಕಂಪನಿಯ ಆಡಳಿತಾವಧಿಯಲ್ಲಿ ಭ್ರಷ್ಟಾಚಾರವು ವ್ಯಾಪಕ ಸ್ವರೂಪ ಪಡೆದುಕೊಂಡಿದ್ದು, ಕಾಲಕ್ರಮೇಣ ಸಾರ್ವಜನಿಕ ಆಡಳಿತದ ಪ್ರಮುಖ ಸಮಸ್ಯೆಯಾಗಿ ಬೆಳೆದಿದೆ. ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಸರ್ಕಾರ ವಿವಿಧ ಕಾಯ್ದೆ ಮತ್ತು ಕಾನೂನುಗಳನ್ನು ಜಾರಿಗೊಳಿಸಿದ್ದರೂ ಸಾರ್ವಜನಿಕರಲ್ಲಿ ನಿರಂತರ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿನಿಯರು ಭ್ರಷ್ಟಾಚಾರ ವಿರೋಧಿ ಜಾಗೃತಿ ಸಪ್ತಾಹದ ಉದ್ದೇಶವನ್ನು ಅರಿತುಕೊಂಡು, ತಮ್ಮ ಕುಟುಂಬ ಹಾಗೂ ಸಮಾಜದಲ್ಲಿಯೂ ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಲೋಕಾಯುಕ್ತ ಸಿಬ್ಬಂದಿ ವಿಜಯಕುಮಾರ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಾಧ್ಯಾಪಕರಾದ ಡಾ. ಜ್ಯೋತಿ ಸಿ.ಕೆ., ಡಾ. ಎಸ್.ಆರ್. ಪರ್ವೀನ್ ಹಾಗೂ ಶರಣಗೌಡ ಅವರು ಭ್ರಷ್ಟಾಚಾರ ನಿರ್ಮೂಲನೆ, ನೈತಿಕ ಮೌಲ್ಯಗಳು ಮತ್ತು ಜವಾಬ್ದಾರಿಯುತ ನಾಗರಿಕತ್ವದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಕಾಲೇಜಿನ ಪ್ರಾಧ್ಯಾಪಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಎನ್‌ಎಸ್‌ಎಸ್ ಸ್ವಯಂಸೇವಕಿಯರಾದ ಮಹೇಶ್ವರಿ ಹಾಗೂ ಸಂಗೀತಾ ಪ್ರಾರ್ಥಿಸಿದರು. ಅನ್ನಪೂರ್ಣಾ ಸ್ವಾಗತಿಸಿದರು. ಜಮುಲಮ್ಮ ವಂದನಾರ್ಪಣೆ ನೆರವೇರಿಸಿದರು. ರೂಪಾ ಛಾಯಾಗ್ರಹಣ ಮಾಡಿದರು. ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು.