ಗಾಣದಾಳ್, ನ.3: ಗರ್ಭಿಣಿಯರು ಮತ್ತು ಬಾಣಂತಿಯರು ಸಮತೋಲಿತ ಹಾಗೂ ಪೌಷ್ಟಿಕ ಆಹಾರ ಸೇವಿಸುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯು ತಾಯಿ ಮತ್ತು ಶಿಶು ಮರಣದ ಅಪಾಯವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮಟಮಾರಿ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ ಕುಮಾರ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಯಚೂರು ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ಗಾಣದಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಬುಳ್ಳಾಪುರ ಉಪಕೇಂದ್ರ ವ್ಯಾಪ್ತಿಯ ಗುಂಡರ್ವೇಲಿ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಪೌಷ್ಟಿಕ ಆಹಾರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಪೌಷ್ಟಿಕಾಂಶಗಳ ಅಗತ್ಯವಿರುತ್ತದೆ. ಈ ಅವಧಿಯಲ್ಲಿ ಸರಿಯಾದ ಆಹಾರ ಪದ್ಧತಿ ಅನುಸರಿಸುವುದರಿಂದ ತಾಯಿಯ ಆರೋಗ್ಯ ಸುಧಾರಿಸುವುದರ ಜೊತೆಗೆ ಗರ್ಭದಲ್ಲಿರುವ ಮಗುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೂ ಸಹಕಾರಿಯಾಗುತ್ತದೆ. ಆದ್ದರಿಂದ ಗರ್ಭಿಣಿಯರು ಹಾಗೂ ಬಾಣಂತಿಯರು ತಮ್ಮ ದಿನನಿತ್ಯದ ಆಹಾರದಲ್ಲಿ ಸಮತೋಲಿತ ಪೌಷ್ಟಿಕಾಂಶಗಳನ್ನು ಒಳಗೊಳ್ಳಬೇಕು ಎಂದು ಸಲಹೆ ನೀಡಿದರು.
ಆಹಾರದಲ್ಲಿ ಪ್ರೋಟೀನ್, ವಿಟಮಿನ್, ಖನಿಜಾಂಶ, ಕಾರ್ಬೋಹೈಡ್ರೇಟ್ ಹಾಗೂ ಆರೋಗ್ಯಕರ ಕೊಬ್ಬಿನಾಂಶಗಳು ಸಮರ್ಪಕ ಪ್ರಮಾಣದಲ್ಲಿರಬೇಕು. ಹಸಿರು ಸೊಪ್ಪು, ತರಕಾರಿಗಳು, ಹಣ್ಣುಗಳು, ಮೊಟ್ಟೆ, ಮೀನು, ಮೊಳಕೆ ಬರಿಸಿದ ಕಾಳುಗಳು, ತುಪ್ಪ ಹಾಗೂ ಬೆಲ್ಲದಂತಹ ಪೌಷ್ಟಿಕ ಆಹಾರ ಪದಾರ್ಥಗಳನ್ನು ಅಗತ್ಯಕ್ಕೆ ಅನುಗುಣವಾಗಿ ಸೇವಿಸಬೇಕು. ಸ್ಥಳೀಯವಾಗಿ ದೊರೆಯುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಆರೋಗ್ಯಕರ ಆಹಾರ ಪದ್ಧತಿ ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.
ಪೌಷ್ಟಿಕ ಆಹಾರ ಸೇವನೆಯ ಜೊತೆಗೆ ವೈಯಕ್ತಿಕ ಸ್ವಚ್ಛತೆ ಹಾಗೂ ಆಹಾರ ತಯಾರಿಸುವ ಪರಿಸರದ ಸ್ವಚ್ಛತೆಗೂ ಆದ್ಯತೆ ನೀಡಬೇಕು. ಅಡುಗೆ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ತರಕಾರಿಗಳನ್ನು ಚೆನ್ನಾಗಿ ತೊಳೆದು ನಂತರ ಕತ್ತರಿಸುವುದು ಹಾಗೂ ಅಡುಗೆಯಲ್ಲಿ ಅಯೋಡಿನ್ಯುಕ್ತ ಉಪ್ಪನ್ನು ಬಳಸುವುದು ಆರೋಗ್ಯದ ದೃಷ್ಟಿಯಿಂದ ಮುಖ್ಯವಾಗಿದೆ ಎಂದು ವಿವರಿಸಿದರು.
ಗರ್ಭಿಣಿಯರು ಮತ್ತು ಬಾಣಂತಿಯರು ಆರೋಗ್ಯ ಸಿಬ್ಬಂದಿಯ ಸಲಹೆಯಂತೆ ಕಬ್ಬಿಣಾಂಶ ಹಾಗೂ ಕ್ಯಾಲ್ಸಿಯಂ ಮಾತ್ರೆಗಳನ್ನು ನಿಯಮಿತವಾಗಿ ಸೇವಿಸಬೇಕು. ಆರೋಗ್ಯ ಉಪಕೇಂದ್ರಗಳಲ್ಲಿ ದೊರೆಯುವ ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಷಾರಾಣಿ ಮಾತನಾಡಿ, ಗರ್ಭಿಣಿಯರು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಗರ್ಭಾವಸ್ಥೆಯಲ್ಲಿ ಆರೋಗ್ಯ ತಪಾಸಣೆಯನ್ನು ನಿರ್ಲಕ್ಷಿಸದೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ನೀಡುವ ಸಲಹೆಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಗರ್ಭಿಣಿಯರು ಸಾಧ್ಯವಾದಷ್ಟು ಮನೆಯಲ್ಲಿಯೇ ತಯಾರಿಸಿದ ತಾಜಾ ಮತ್ತು ಪೌಷ್ಟಿಕ ಆಹಾರ ಸೇವಿಸಬೇಕು. ಬೇಕರಿ ಪದಾರ್ಥಗಳು ಹಾಗೂ ಅತಿಯಾಗಿ ಸಂಸ್ಕರಿಸಿದ ಜಂಕ್ ಫುಡ್ ಸೇವನೆಯನ್ನು ತಪ್ಪಿಸಬೇಕು. ಗರ್ಭಾವಸ್ಥೆಯಲ್ಲಿ ವೈಯಕ್ತಿಕ ಸ್ವಚ್ಛತೆ, ಆಹಾರ ಪದ್ಧತಿ ಹಾಗೂ ವಿಶ್ರಾಂತಿಗೆ ಹೆಚ್ಚಿನ ಗಮನ ನೀಡಬೇಕು ಎಂದು ಸಲಹೆ ನೀಡಿದರು.
ಮಗುವಿನ ಜನನದ ನಂತರವೂ ತಾಯಿಯ ಆರೋಗ್ಯದ ಬಗ್ಗೆ ನಿರಂತರ ಕಾಳಜಿ ವಹಿಸುವುದು ಅಗತ್ಯವಾಗಿದೆ. ಬಾಣಂತಿಯರು ಕುಟುಂಬ ಯೋಜನೆಯ ಸೂಕ್ತ ವಿಧಾನಗಳನ್ನು ಅಳವಡಿಸಿಕೊಂಡು ಮಕ್ಕಳ ಜನನದ ನಡುವೆ ಕನಿಷ್ಠ ಮೂರು ವರ್ಷಗಳ ಅಂತರ ಕಾಪಾಡಿಕೊಳ್ಳಬೇಕು. ಇದರಿಂದ ತಾಯಿಯ ಆರೋಗ್ಯ ಸುಧಾರಿಸುವುದರ ಜೊತೆಗೆ ಮಗುವಿನ ಸಮರ್ಪಕ ಆರೈಕೆ ಹಾಗೂ ಬೆಳವಣಿಗೆಗೂ ಅನುಕೂಲವಾಗುತ್ತದೆ ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆ ಅಂಬುಜಾಕ್ಷಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ದೊರೆಯುವ ಪೌಷ್ಟಿಕ ಆಹಾರ ಮತ್ತು ವಿವಿಧ ಕಲ್ಯಾಣ ಸೇವೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗುಂಡರ್ವೇಲಿ ಗ್ರಾಮದ ಗರ್ಭಿಣಿಯರು, ಬಾಣಂತಿಯರು ಹಾಗೂ ಅಂಗನವಾಡಿ ಕೇಂದ್ರದ ಫಲಾನುಭವಿಗಳು ಭಾಗವಹಿಸಿದ್ದರು. ಆಶಾ ಕಾರ್ಯಕರ್ತೆ ಪಾರ್ವತಿ ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆ ನೆರವೇರಿಸಿದರು.



