ರಾಯಚೂರು, ನ.4: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ. ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರು ಸಾರ್ವಜನಿಕವಾಗಿ ಮಾತನಾಡುವಾಗ ಸಂಯಮ ಮತ್ತು ಎಚ್ಚರಿಕೆ ವಹಿಸಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿಗಳ ವಿಭಾಗದ ಮಾಧ್ಯಮ ವಕ್ತಾರ ಮಾಳೇಶ ಬೊಮ್ಮನಾಳ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಪರಸ್ಪರ ಗೌರವ ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯವಾಗಿದೆ. ಆದರೆ ಬಿಜೆಪಿ ನಾಯಕರು ರಾಜಕೀಯ ಟೀಕೆಯ ಹೆಸರಿನಲ್ಲಿ ವೈಯಕ್ತಿಕ ನಿಂದನೆಗೆ ಮುಂದಾಗಿರುವುದು ಸರಿಯಲ್ಲ. ಕಾಂಗ್ರೆಸ್ ನಾಯಕರ ವಿರುದ್ಧ ಬಳಸಿರುವ ಅವಹೇಳನಕಾರಿ ಪದಗಳನ್ನು ಹಿಂಪಡೆದು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸುತ್ತಿದ್ದಾರೆ. ಕಮಿಷನ್ ವ್ಯವಹಾರಕ್ಕೆ ಸಂಬಂಧಿಸಿದ ಆರೋಪಗಳನ್ನು ಎದುರಿಸುತ್ತಿರುವ ವಿಜಯೇಂದ್ರ ಅವರಿಗೆ ಕಾಂಗ್ರೆಸ್ ನಾಯಕರ ನೈತಿಕತೆ ಪ್ರಶ್ನಿಸುವ ಅರ್ಹತೆಯಿಲ್ಲ ಎಂದು ಟೀಕಿಸಿದರು.
ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ನಾಯಕರನ್ನು ಜನರು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂಬರ್ಥದಲ್ಲಿ ಹೇಳಿಕೆ ನೀಡಿರುವುದು ಅತ್ಯಂತ ಗಂಭೀರ ವಿಚಾರವಾಗಿದೆ. ಇಂತಹ ಮಾತುಗಳು ಸಮಾಜದಲ್ಲಿ ದ್ವೇಷ ಮತ್ತು ವೈಷಮ್ಯಕ್ಕೆ ಕಾರಣವಾಗುವ ಸಾಧ್ಯತೆಯಿದ್ದು, ಪ್ರಚೋದನಾತ್ಮಕ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವಿಜಯೇಂದ್ರ ಅವರ ಹೇಳಿಕೆ ವಿರುದ್ಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ತೆರಳಿದಾಗ ಸುಮಾರು ಆರು ಗಂಟೆಗಳ ಕಾಲ ಕಾಯಿಸಿದರೂ ಎಫ್ಐಆರ್ ದಾಖಲಿಸದೆ ಕೇವಲ ದೂರು ಸ್ವೀಕೃತಿಯ ಹಿಂಬರಹ ನೀಡಿ ಕಳುಹಿಸಲಾಗಿದೆ ಎಂದು ಆರೋಪಿಸಿದರು. ಈ ಮೂಲಕ ಪೊಲೀಸರು ದೂರುದಾರರಿಗೆ ನ್ಯಾಯ ಒದಗಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೂರು ದಾಖಲಿಸಿಕೊಳ್ಳುವಲ್ಲಿ ವಿಫಲರಾಗಿರುವ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್ಐ ಅವರನ್ನು ಸೇವೆಯಿಂದ ವಜಾಗೊಳಿಸಬೇಕು. ಅಲ್ಲದೆ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜಕೀಯ ನಾಯಕರು ತಮ್ಮ ಮಾತು ಮತ್ತು ನಡವಳಿಕೆಯಿಂದ ಸಮಾಜಕ್ಕೆ ಮಾದರಿಯಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಮತ್ತು ಭಿನ್ನಾಭಿಪ್ರಾಯಗಳಿಗೆ ಅವಕಾಶವಿದ್ದರೂ ಅವಹೇಳನಕಾರಿ ಭಾಷೆ ಹಾಗೂ ಪ್ರಚೋದನಾತ್ಮಕ ಹೇಳಿಕೆಗಳಿಗೆ ಅವಕಾಶ ನೀಡಬಾರದು ಎಂದು ಮಾಳೇಶ ಬೊಮ್ಮನಾಳ ಹೇಳಿದರು.
ಈ ಸಂದರ್ಭದಲ್ಲಿ ಪಿಎಲ್ಡಿಬಿ ನಿರ್ದೇಶಕ ರಾಜಶೇಖರ ಪಾಟೀಲ್, ಮುಖಂಡ ಗಿರಿಯಪ್ಪ ಉಪಸ್ಥಿತರಿದ್ದರು.



