ರಾಯಚೂರು, ನ. 4: ದೇಶದ ಅಭಿವೃದ್ಧಿ ಯೋಜನೆಗಳ ರೂಪಿಸುವಿಕೆ ಹಾಗೂ ಜನಸಂಖ್ಯೆಗೆ ಸಂಬಂಧಿಸಿದ ಸಮಗ್ರ ಮಾಹಿತಿ ಸಂಗ್ರಹಣೆಯಲ್ಲಿ ಜನಗಣತಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಆದ್ದರಿಂದ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ಅರಿತು ನಿಖರತೆ, ಪಾರದರ್ಶಕತೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜನಗಣತಿ–2027ರ ಎರಡನೇ ಹಂತದ ಜನಸಂಖ್ಯೆ ಗಣತಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಚಾರ್ಜ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ತಂತ್ರಜ್ಞಾನದ ಮೂಲಕ ಜನಗಣತಿ ನಡೆಸಲಾಗುತ್ತಿದೆ. 2011ರಲ್ಲಿ ನಡೆದ ಜನಗಣತಿಯನ್ನು ಸಾಂಪ್ರದಾಯಿಕ ವಿಧಾನದಲ್ಲಿ ಕೈಗೊಳ್ಳಲಾಗಿತ್ತು. ಆದರೆ ಈ ಬಾರಿ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವುದರಿಂದ ಮಾಹಿತಿ ಸಂಗ್ರಹಣೆಯಲ್ಲಿ ಹೆಚ್ಚಿನ ನಿಖರತೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವುದು ಅಗತ್ಯವಾಗಿದೆ. ಕೆಳಹಂತದ ಸಿಬ್ಬಂದಿಯಿಂದ ಉನ್ನತ ಮಟ್ಟದ ಅಧಿಕಾರಿಗಳವರೆಗೆ ಪ್ರತಿಯೊಬ್ಬರೂ ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಈ ಬೃಹತ್ ಕಾರ್ಯ ಯಶಸ್ವಿಯಾಗಲಿದೆ ಎಂದು ತಿಳಿಸಿದರು.
ಡಿಜಿಟಲ್ ವಿಧಾನದಲ್ಲಿ ಜನಗಣತಿ ನಡೆಸುವುದು ಆರಂಭದಲ್ಲಿ ಸವಾಲಿನ ಕೆಲಸವೆನಿಸಬಹುದು. ಆದರೆ ಸೂಕ್ತ ತರಬೇತಿ ಹಾಗೂ ನಿರಂತರ ಅಭ್ಯಾಸದಿಂದ ಕಾರ್ಯನಿರ್ವಹಣೆ ಸುಲಭವಾಗಲಿದೆ. ಜನಗಣತಿ ಸಂದರ್ಭದಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ ಪ್ರತಿಯೊಂದು ಮನೆಯ ಕುಟುಂಬ ಸದಸ್ಯರ ಮಾಹಿತಿಯನ್ನು ಸಮರ್ಪಕವಾಗಿ ಸಂಗ್ರಹಿಸಬೇಕು. ಮಾಹಿತಿ ದಾಖಲಿಸುವಾಗ ತಪ್ಪುಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಜನಗಣತಿಯ ಮೂಲಕ ಸಂಗ್ರಹವಾಗುವ ಅಂಕಿಅಂಶಗಳು ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳು, ಮೂಲಸೌಕರ್ಯಗಳ ನಿರ್ಮಾಣ ಹಾಗೂ ಸಾರ್ವಜನಿಕ ಸೌಲಭ್ಯಗಳ ಕಲ್ಪನೆಗೆ ಆಧಾರವಾಗಲಿವೆ. ಹೀಗಾಗಿ ಈ ಕಾರ್ಯವನ್ನು ಕೇವಲ ಆಡಳಿತಾತ್ಮಕ ಜವಾಬ್ದಾರಿಯೆಂದು ಪರಿಗಣಿಸದೆ ರಾಷ್ಟ್ರದ ಅಭಿವೃದ್ಧಿಗೆ ನೀಡುವ ಮಹತ್ವದ ಕೊಡುಗೆಯೆಂದು ಭಾವಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಜನಗಣತಿಯ ಪ್ರತಿಯೊಂದು ಹಂತದ ಕುರಿತು ಸಮಗ್ರ ಮಾಹಿತಿ ಪಡೆದುಕೊಳ್ಳಬೇಕು. ಯಾವುದೇ ಅನುಮಾನಗಳಿದ್ದಲ್ಲಿ ತರಬೇತುದಾರರಿಂದ ಪರಿಹರಿಸಿಕೊಂಡು ಮುಂದಿನ ದಿನಗಳಲ್ಲಿ ಕ್ಷೇತ್ರಮಟ್ಟದ ಕಾರ್ಯವನ್ನು ಸುಗಮವಾಗಿ ನಿರ್ವಹಿಸಲು ಸಿದ್ಧರಾಗಬೇಕು. ಜನಗಣತಿ ಕಾರ್ಯದಲ್ಲಿ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ ಎಂದು ಎಚ್ಚರಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಮಾತನಾಡಿ, ಪ್ರತಿ ಹತ್ತು ವರ್ಷಗಳಿಗೊಮ್ಮೆ ನಡೆಯುವ ಜನಗಣತಿಯು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿಶೇಷ ಅನುಭವ ನೀಡುವ ಮಹತ್ವದ ಕಾರ್ಯವಾಗಿದೆ. ಪ್ರತಿಯೊಬ್ಬರೂ ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಾರಂಭಕ್ಕೆ ಇನ್ನೂ ಸಮಯಾವಕಾಶವಿರುವುದರಿಂದ ತಾಂತ್ರಿಕ ಅಥವಾ ಆಡಳಿತಾತ್ಮಕ ಸಮಸ್ಯೆಗಳಿದ್ದರೆ ಜಿಲ್ಲಾಧಿಕಾರಿಗಳ ಅಥವಾ ಜಿಲ್ಲಾ ಪಂಚಾಯಿತಿ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜನಗಣತಿ ನೋಡಲ್ ಅಧಿಕಾರಿಗಳಾದ ಸುದರ್ಶನ್ ಹಾಗೂ ಬೇಗಂ ಅವರು ಜನಗಣತಿ ಪ್ರಕ್ರಿಯೆ, ಡಿಜಿಟಲ್ ಮಾಹಿತಿ ಸಂಗ್ರಹಣೆ ಮತ್ತು ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೋಪಾಲ ಗೆಣ್ಣೂರ, ಲಿಂಗಸುಗೂರು ಸಹಾಯಕ ಆಯುಕ್ತ ನಾಗೇಂದ್ರ ಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ. ಟಿ. ರೋಣಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವಣ್ಣೆಪ್ಪ ಕಲಶೆಟ್ಟಿ, ಜಿಲ್ಲಾ ಜನಗಣತಿ ತರಬೇತಿ ಅಧಿಕಾರಿ ಸದಾಶಿವಪ್ಪ, ಜಿಲ್ಲೆಯ ವಿವಿಧ ತಾಲೂಕುಗಳ ತಹಶೀಲ್ದಾರರು, ಚಾರ್ಜ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.



