ಮಾನ್ವಿ: ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿಶೇಷ ಕಾಳಜಿ ವಹಿಸಬೇಕು. ಮುಂದಿನ ಏಳು ತಿಂಗಳ ಕಾಲ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಸೂಚಿಸಿದರು.

ನಗರದ ಶಾಸಕರ ಸಭಾಂಗಣದಲ್ಲಿ ಶಾಸಕ ಜಿ. ಹಂಪಯ್ಯ ನಾಯಕ ಅವರೊಂದಿಗೆ ಮಾನ್ವಿ ತಾಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆ ನಡೆಸಿ, ಕುಡಿಯುವ ನೀರಿನ ಪೂರೈಕೆ ಮತ್ತು ಗ್ರಾಮೀಣ ಮೂಲಸೌಕರ್ಯಗಳ ಸ್ಥಿತಿಗತಿ ಕುರಿತು ಪರಿಶೀಲಿಸಿದರು.

ಸಭೆಯಲ್ಲಿ ಮಾತನಾಡಿದ ಬೋಸರಾಜು, ತೀವ್ರ ಬರಗಾಲದಿಂದ ಗ್ರಾಮೀಣ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡಿಯುವ ನೀರಿನ ಮೂಲಗಳು, ಕೊಳವೆಬಾವಿಗಳ ಸ್ಥಿತಿಗತಿ ಹಾಗೂ ನೀರಿನ ಲಭ್ಯತೆಯ ಕುರಿತು ಸಮಗ್ರ ಮಾಹಿತಿ ಹೊಂದಿರಬೇಕು ಎಂದು ತಿಳಿಸಿದರು.

ಮುಂದಿನ ಏಳು ತಿಂಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಯಿರುವ ಗ್ರಾಮಗಳನ್ನು ಮುಂಚಿತವಾಗಿ ಗುರುತಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಯಾವುದೇ ಸಮಸ್ಯೆ ಎದುರಾದರೆ ತಕ್ಷಣ ಶಾಸಕರನ್ನು ಅಥವಾ ತಮ್ಮನ್ನು ಸಂಪರ್ಕಿಸಬೇಕು. ಸಮಸ್ಯೆ ಪರಿಹಾರಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಸರ್ಕಾರ ಈಗಾಗಲೇ 39 ಹೊಸ ಕೊಳವೆಬಾವಿಗಳನ್ನು ಕೊರೆಯಲು ಅನುಮತಿ ನೀಡಿದೆ. ಅಗತ್ಯವಿದ್ದಲ್ಲಿ ಹೆಚ್ಚುವರಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಪಿಡಿಒಗಳು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ನಿರ್ಲಕ್ಷ್ಯ ತೋರುವ ಅಥವಾ ನೆಪಗಳನ್ನು ಹೇಳಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಶಿಫಾರಸು ಮಾಡಲಾಗುವುದು. ಅಗತ್ಯವಿದ್ದರೆ ಸೇವೆಯಿಂದ ವಜಾಗೊಳಿಸುವಂತೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಸಿದರು.

ಶಾಸಕ ಜಿ. ಹಂಪಯ್ಯ ನಾಯಕ ಮಾತನಾಡಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತಿಯೊಂದು ಗ್ರಾಮ ಪಂಚಾಯಿತಿಯಿಂದ ಕುಡಿಯುವ ನೀರಿನ ಸ್ಥಿತಿಗತಿ ಕುರಿತು ಪ್ರತಿದಿನ ಮಾಹಿತಿ ಸಂಗ್ರಹಿಸಬೇಕು. ಸಮಸ್ಯೆಗಳಿರುವ ಗ್ರಾಮಗಳಲ್ಲಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒಗಳು ತಮ್ಮ ವ್ಯಾಪ್ತಿಯ ಕುಡಿಯುವ ನೀರಿನ ಲಭ್ಯತೆ, ಕೊಳವೆಬಾವಿಗಳ ಸ್ಥಿತಿ ಹಾಗೂ ಮೂಲಸೌಕರ್ಯಗಳ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ಪಂಚ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಬಿ.ಕೆ. ಅಮರೇಶಪ್ಪ, ತಾಲೂಕು ಪಂಚಾಯಿತಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.