ಸಿಂಧನೂರು: ಭೂ ಗ್ಯಾರಂಟಿ ಯೋಜನೆಯಡಿ ಅಗತ್ಯ ದಾಖಲೆಗಳನ್ನು ಹೊಂದಿರುವ ಅರ್ಹ ಆಸ್ತಿ ಮಾಲೀಕರಿಗೆ ಡಿಸೆಂಬರ್ ಅಂತ್ಯದೊಳಗೆ ಇ-ಸ್ವತ್ತು ದಾಖಲೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಪಂಚಾಯತ್ ರಾಜ್ ಇಲಾಖೆಯ ನಿರ್ದೇಶನದಂತೆ ಭೂ ಗ್ಯಾರಂಟಿ ಯೋಜನೆಯಡಿ ಇ-ಸ್ವತ್ತು ವಿತರಣೆ ಕಾರ್ಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಅರ್ಹ ಆಸ್ತಿ ಮಾಲೀಕರಿಗೆ ನೋಟಿಸ್ ನೀಡಿ, ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಕಾಲಾವಕಾಶ ಕಲ್ಪಿಸಬೇಕು. ನಂತರ ವಿದ್ಯುತ್ ಬಿಲ್ ಸೇರಿದಂತೆ ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿ, ಸ್ವತ್ತಿನ ನೈಜ ಮಾಲೀಕರಿಗೆ ಇ-ಸ್ವತ್ತು ದಾಖಲೆ ವಿತರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಪಿಡಿಒಗಳಿಂದ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಟ್ಟು ಆಸ್ತಿಗಳ ಸಂಖ್ಯೆ, ಈಗಾಗಲೇ ಇ-ಸ್ವತ್ತು ವಿತರಿಸಿರುವ ಆಸ್ತಿಗಳು ಹಾಗೂ ಬಾಕಿ ಉಳಿದಿರುವ ಆಸ್ತಿಗಳ ಕುರಿತು ಮಾಹಿತಿ ಪಡೆದರು. ಬಾಕಿ ಇರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಗೈರುಹಾಜರಾಗಿದ್ದರು. ಅಲ್ಲದೆ, ವಿವಿಧ ಗ್ರಾಮ ಪಂಚಾಯಿತಿಗಳ ಸುಮಾರು ಅರ್ಧದಷ್ಟು ಪಿಡಿಒಗಳು ಸಭೆಯಲ್ಲಿ ಭಾಗವಹಿಸಿರಲಿಲ್ಲ.
ಸಭೆಯಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಯಂಕಪ್ಪ ಉಪಸ್ಥಿತರಿದ್ದರು.



