ಸಿರವಾರ, ನ.4: ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ, ಹೋರಾಟ ಹಾಗೂ ಸಾಧನೆಗಳು ವಿದ್ಯಾರ್ಥಿಗಳಿಗೆ ಆದರ್ಶವಾಗಿದ್ದು, ಅವರ ವಿಚಾರಧಾರೆಗಳನ್ನು ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಎಂಆರ್‌ಎಚ್‌ಎಸ್ ಜಿಲ್ಲಾಧ್ಯಕ್ಷ ಅಬ್ರಾಹಂ ಹೊನ್ನಟಗಿ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು’ ಕಾರ್ಯಕ್ರಮದಲ್ಲಿ ಅವರ ಸಮಗ್ರ ಬದುಕು ಮತ್ತು ಹೋರಾಟದ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ಡಾ. ಅಂಬೇಡ್ಕರ್ ಅವರು 64 ವಿಷಯಗಳಲ್ಲಿ ಅಧ್ಯಯನ ನಡೆಸಿ ಮಹಾನ್ ವಿದ್ವಾಂಸರಾಗಿ ಹೊರಹೊಮ್ಮಿದ್ದರು. ನಿರಂತರ ಪರಿಶ್ರಮ, ಓದು ಹಾಗೂ ಜ್ಞಾನಾರ್ಜನೆಯ ಮೂಲಕ ಸಮಾಜದಲ್ಲಿ ಮಹತ್ತರ ಬದಲಾವಣೆ ತಂದರು. ಅನೇಕ ಅವಮಾನ ಮತ್ತು ಸವಾಲುಗಳನ್ನು ಎದುರಿಸಿದರೂ ಎದೆಗುಂದದೆ ವಿವಿಧ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಭಾರತದ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದು ತಿಳಿಸಿದರು.

ಸಮಾನತೆ, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳು, ಕಾರ್ಮಿಕರ ಕಲ್ಯಾಣ ಹಾಗೂ ಆರ್ಥಿಕ ಸುಧಾರಣೆಗಳಿಗೆ ಅಂಬೇಡ್ಕರ್ ನೀಡಿದ ಕೊಡುಗೆ ಅಪಾರವಾಗಿದೆ. ಮೀಸಲಾತಿ ವ್ಯವಸ್ಥೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯ ಹನುಮಂತ ಚನ್ನೂರು ಮಾತನಾಡಿ, ವಿದ್ಯಾರ್ಥಿಗಳು ಜಾತಿ, ಮತ, ಪಂಥಗಳ ಭೇದವಿಲ್ಲದೆ ಸಮಾನತೆಯ ಮನೋಭಾವ ಬೆಳೆಸಿಕೊಳ್ಳಬೇಕು. ಸರ್ಕಾರದ ಶೈಕ್ಷಣಿಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚನ್ನಪ್ಪ ಚನ್ನೂರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ರಸಪ್ರಶ್ನೆ, ಪ್ರಬಂಧ ಹಾಗೂ ಆಶುಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಪುಸ್ತಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಅಜಿತ್ ಕುಮಾರ್ ಹೊನ್ನಟಗಿ, ಸೂರಿ ದುರುಗಣ್ಣ ನಾಯಕ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಹನುಮೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಸ್ಮಾಯಿಲ್, ಚನ್ನಬಸವ, ಉಪನ್ಯಾಸಕ ಜಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು. ಯಾಸೀನ್ ಕಾರ್ಯಕ್ರಮ ನಿರೂಪಿಸಿದರು.