ಅರಕೇರಾ: ತಾಲೂಕು ಕೇಂದ್ರದ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯ ದೀರ್ಘಕಾಲದಿಂದ ಮುಚ್ಚಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಶೌಚಾಲಯವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು ಎಂದು ಅಖಂಡ ಕರ್ನಾಟಕ ರಕ್ಷಣಾ ಸೇವಾ ದಳದ ರಾಯಚೂರು ಜಿಲ್ಲಾಧ್ಯಕ್ಷ ಎ.ಎಂ. ನಡುಮನಿ ಆಗ್ರಹಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಿರುವ ಅವರು, ಅರಕೇರಾ ಬಸ್ ನಿಲ್ದಾಣವು ಸುತ್ತಮುತ್ತಲಿನ ಗ್ರಾಮಗಳು ಹಾಗೂ ವಿವಿಧ ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಕೇಂದ್ರವಾಗಿದೆ. ಪ್ರತಿದಿನ ನೂರಾರು ಪ್ರಯಾಣಿಕರು ಬಂದು ಹೋಗುವ ನಿಲ್ದಾಣದಲ್ಲಿ ಶೌಚಾಲಯದ ವ್ಯವಸ್ಥೆ ಇಲ್ಲದಿರುವುದು ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂದು ತಿಳಿಸಿದ್ದಾರೆ.
ಜನವರಿ 2025ರಲ್ಲಿ ರಾಯಚೂರು ಜಿಲ್ಲೆಯ ತಾಲೂಕು ಹಾಗೂ ಹೋಬಳಿ ಕೇಂದ್ರಗಳ ಒಟ್ಟು 14 ಬಸ್ ನಿಲ್ದಾಣಗಳ ಶೌಚಾಲಯಗಳ ನಿರ್ವಹಣೆಗೆ ಟೆಂಡರ್ ಕರೆಯಲಾಗಿತ್ತು. ಕೊಪ್ಪಳ ಜಿಲ್ಲೆಯ ರಾಜೇಶ್ ಎಂಬುವವರು ಗುತ್ತಿಗೆ ಪಡೆದಿದ್ದರೂ ಅರಕೇರಾ ಬಸ್ ನಿಲ್ದಾಣದ ಶೌಚಾಲಯವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿಲ್ಲ ಎಂದು ಆರೋಪಿಸಿದ್ದಾರೆ.
ಶೌಚಾಲಯದಲ್ಲಿ ನೀರು, ವಿದ್ಯುತ್ ಹಾಗೂ ಸ್ವಚ್ಛತೆಯ ವ್ಯವಸ್ಥೆಯಿಲ್ಲ. ಸುತ್ತಮುತ್ತ ಗಿಡಗಂಟಿಗಳು ಬೆಳೆದಿದ್ದು, ನಿರ್ವಹಣೆಗೆ ಸಿಬ್ಬಂದಿಯೂ ಇಲ್ಲ. ಇದರಿಂದ ಮಹಿಳೆಯರು, ವೃದ್ಧರು ಸೇರಿದಂತೆ ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.
ಈ ಅವ್ಯವಸ್ಥೆಗೆ ಕೆಕೆಆರ್ಟಿಸಿ ರಾಯಚೂರು ವಿಭಾಗೀಯ ನಿಯಂತ್ರಣಾಧಿಕಾರಿಯನ್ನು ಹೊಣೆಗಾರರನ್ನಾಗಿ ಮಾಡಿ, ಕಾರಣ ಕೇಳಿ ನೋಟಿಸ್ ಜಾರಿಗೊಳಿಸಬೇಕು. ಗುತ್ತಿಗೆದಾರರ ನಿರ್ಲಕ್ಷ್ಯದ ಬಗ್ಗೆಯೂ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಶೌಚಾಲಯಕ್ಕೆ ನೀರು, ವಿದ್ಯುತ್, ಸ್ವಚ್ಛತೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ದಿನದ 24 ಗಂಟೆಯೂ ಪ್ರಯಾಣಿಕರ ಬಳಕೆಗೆ ಲಭ್ಯವಾಗುವಂತೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಎ.ಎಂ. ನಡುಮನಿ ಮನವಿ ಮಾಡಿದ್ದಾರೆ.



