ಮಾನ್ವಿ: ಪಟ್ಟಣದ ಬಸವ ವೃತ್ತದಲ್ಲಿ ನಿರ್ಮಾಣವಾಗುತ್ತಿರುವ ನೂತನ ಎಕ್ಸ್‌ಪ್ರೆಸ್ ಬಸ್ ನಿಲ್ದಾಣದ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎನ್.ಎಸ್. ಬೋಸರಾಜು ಪರಿಶೀಲಿಸಿ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಬಸ್ ನಿಲ್ದಾಣದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದರಿಂದ ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ಅನಾನುಕೂಲವಾಗುತ್ತಿದೆ. ಆದ್ದರಿಂದ ಕಾಮಗಾರಿಗೆ ವೇಗ ನೀಡುವ ಮೂಲಕ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲೆಕ್ಟ್ರಿಕಲ್ ವಿಭಾಗದ ಅಭಿಯಂತರ ಬಸವರಾಜ ಅವರಿಂದ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ಪಡೆದ ಬೋಸರಾಜು, ಗುತ್ತಿಗೆದಾರರಿಂದ ಕಾಮಗಾರಿಯ ಮುಂದಿನ ಹಂತದ ನೀಲನಕ್ಷೆಯನ್ನು ಕೂಡಲೇ ಸಲ್ಲಿಸುವಂತೆ ಸೂಚಿಸಿದರು.

ಬಸ್ ನಿಲ್ದಾಣದ ನಿರ್ಮಾಣ ಕಾರ್ಯದಲ್ಲಿ ಅನಗತ್ಯ ವಿಳಂಬವಾಗದಂತೆ ಅಧಿಕಾರಿಗಳು ಗಮನಹರಿಸಬೇಕು. ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಆದ್ಯತೆ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಜಿ. ಹಂಪಯ್ಯ ನಾಯಕ, ಮಾನ್ವಿ ಸಾರಿಗೆ ಘಟಕದ ವ್ಯವಸ್ಥಾಪಕ ಎಂ. ನಾಗರಾಜ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಗಾಫೂರ್ ಸಾಬ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಕೆ. ಅಮರೇಶಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.